ಕಾಲೇಜು ವಿದ್ಯಾರ್ಥಿಗಳಿಗೆ ಜ್ಞಾನ ತರಂಗ
ಕ.ಪ್ರ.ವಾರ್ತೆ, ಬೆಂಗಳೂರು, ಆ.30-
ಸರ್ಕಾರಿ ಕಾಲೇಜುಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳ ವೃತ್ತಿ ಕೌಶಲ್ಯ ಹೆಚ್ಚಿಸಲು ಉನ್ನತ ಶಿಕ್ಷಣ ಇಲಾಖೆ 'ಜ್ಞಾನ ತರಂಗ' ಕಾರ್ಯಕ್ರಮ ಆರಂಭಿಸಿದೆ.
ಕಾಲೇಜು ಶಿಕ್ಷಣ ಇಲಾಖೆ ಹಾಗೂ ತಾಂತ್ರಿಕ ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ ನಡೆಯುವ ಉಪಗ್ರಹ ಆಧಾರಿತ ಶಿಕ್ಷಣ ಕಾರ್ಯಕ್ರಮಕ್ಕೆ ಉನ್ನತ ಶಿಕ್ಷಣ ಸಚಿವ ಆರ್.ವಿ.ದೇಶಪಾಂಡೆ ಅವರು ನಗರದ ಉನ್ನತ ಶಿಕ್ಷಣ ಪರಿಷತ್ನಲ್ಲಿ ಬುಧವಾರ ಚಾಲನೆ ನೀಡಿದರು.
ರಾಜ್ಯದ 130 ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ 32 ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ ಜ್ಞಾನತರಂಗ ಕಾರ್ಯಕ್ರಮ ಪ್ರಸಾರಗೊಳ್ಳಲಿದೆ. ಪದವಿ ಹಾಗೂ ಪಾಲಿಟೆಕ್ನಿಕ್ ವಿದ್ಯಾರ್ಥಿಗಳಿಗೆ ಪೂರಕವಾದ ಬೋಧನಾ ಕಾರ್ಯಕ್ರಮ, ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ಹಾಗೂ ಕೌಶಲ್ಯ ಅಭಿವೃದ್ಧಿಗೆ ಸಂಬಂಧಿಸಿ ವಿಷೇಶ ಉಪನ್ಯಾಸ ಮತ್ತು ಕಾರ್ಯಕ್ರಮ ನೀಡಲಾಗುವುದು ಎಂದು ಸಚಿವ ದೇಶಪಾಂಡೆ ಹೇಳಿದರು.
ಬೆಂಗಳೂರಿನಲ್ಲಿ ಓದುವ ವಿದ್ಯಾರ್ಥಿಗಳಿಗೆ ಎಲ್ಲ ರೀತಿಯ ಸೌಲಭ್ಯ ಅಥವಾ ಅವಕಾಶಗಳಿರುತ್ತವೆ. ಆದರೆ ಗ್ರಾಮೀಣ ಭಾಗದಲ್ಲಿ ಪದವಿ ಓದುತ್ತಿರುವವರಿಗೆ ತರಬೇತಿಯ ಅಗತ್ಯವಿರುತ್ತದೆ. ಉದ್ಯೋಗ ಪ್ರಪಂಚದಲ್ಲಿ ಇತರರೊಂದಿಗೆ ಸ್ಪರ್ಧಿಸಲು ವೃತ್ತಿ ಕೌಶಲ್ಯದ ಹಾಗೂ ಸ್ಪರ್ಧಾತ್ಮಕ ಗುಣಗಳ ಅನಿವಾರ್ಯತೆ ಇರುತ್ತದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಈ ಮಹಾತ್ವಾಕಾಂಕ್ಷಿ ಯೋಜನೆ ಪ್ರಾರಂಭಿಸಿದೆ ಎಂದು ದೇಶಪಾಂಡೆ ಅಭಿಪ್ರಾಯಪಟ್ಟರು.
ಭವಿಷ್ಯದಲ್ಲಿ ರಾಜ್ಯದ ಎಲ್ಲ ಸರ್ಕಾರಿ ಕಾಲೇಜುಗಳಿಗೂ ಯೋಜನೆ ವಿಸ್ತರಿಸಲಾಗುವುದು. ಇದಲ್ಲದೇ ಪಿಯು ವಿದ್ಯಾರ್ಥಿಗಳಿಗೆ ಮುಂದಿನ ಕೋರ್ಸ್ಗಳ ಬಗ್ಗೆ ಮಾಹಿತಿ ನೀಡುವ ಉದ್ದೇಶದಿಂದ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ವಿಶೇಷ ಟೆಲಿಕೋರ್ಸ್ ಮಾಡಲು ಚಿಂತನೆ ನಡೆಸಲಾಗಿದೆ ಎಂದು ಅವರು ಹೇಳಿದರು.
ಜ್ಞಾನ ತರಂಗ ಯೋಜನೆಯನ್ನು ಕೇವಲ ಶಿಕ್ಷಣಕ್ಕೆ ಮೀಸಲಿಡಿಸದೇ ಆಡಳಿತಾತ್ಮಕ ವಿಚಾರಗಳ ಚರ್ಚೆ ಹಾಗೂ ಉಪನ್ಯಾಸಕರ ತರಬೇತಿಗೂ ಬಳಸಿಕೊಳ್ಳಲು ನಿರ್ಧರಿಸಲಾಗಿದೆ. ಆದರೆ ಉಪಗ್ರಹ ಆಧಾರಿತ ಶಿಕ್ಷಣವು ಉಪನ್ಯಾಸಕರಿಗೆ ಪರ್ಯಾಯವಲ್ಲ, ಬದಲಾಗಿ ನೆರವು ನೀಡಲಿದೆಯಷ್ಟೆ ಎಂದು ದೇಶಪಾಂಡೆ ಸ್ಪಷ್ಟಪಡಿಸಿದರು.
ಸಮಿತಿ ಗಮನಿಸಲಿದೆ
ಕಾಂಗ್ರೆಸ್ ನಾಯಕರ ಎಂಜಿನಿಯರಿಂಗ್ ಕಾಲೇಜುಗಳಲ್ಲೇ ಸರ್ಕಾರಿ ಆದೇಶಕ್ಕೆ ವಿರುದ್ಧವಾಗಿ ಹೆಚ್ಚುವರಿ ಶುಲ್ಕ ಪಡೆದಿರುವ ಬಗ್ಗೆ ದೇಶಪಾಂಡೆ ಅವರನ್ನು ಪ್ರಶ್ನಿಸಿದಾಗ ಹೀಗೆ ಉತ್ತರಿಸಿದರು. 'ಈ ಸಂಬಂಧ ಎಸ್.ಕೆ.ಸೈದಾಪೂರ್ ಅವರ ಸಮಿತಿ ರಚಿಸಲಾಗಿದೆ. ಎಲ್ಲ ವಿಚಾರಗಳನ್ನು ಸಮಿತಿ ಗಮನಿಸಲಿದೆ. ನಮ್ಮ ಪಕ್ಷಕ್ಕೆ ಸೇರಿದವರ ಮಾಹಿತಿಯೂ ನಿಮಗೆ ಸಿಗುವಷ್ಟು ಪಾರದರ್ಶಕ ವ್ಯವಸ್ಥೆಯನ್ನು ಸರ್ಕಾರ ಮಾಡಿದೆ. ನಿಯಮ ಪ್ರಕಾರ ಸಮಿತಿ ಕಾರ್ಯನಿರ್ವಹಿಸಲಿದೆ. ಆದರೆ ಸಂತೋಷದ ವಿಚಾರವೆಂದರೆ ಮುಂದಿನ ದಿನಗಳಲ್ಲಿ ಈ ಪ್ರಶ್ನೆಯೇ ಬರುವುದಿಲ್ಲ, 2006ರ ಕಾಯಿದೆ ಅನುಷ್ಠಾನಕ್ಕೆ ತರಲಾಗುವುದು.' ಎಂದು ಹಾರಿಕೆ ಉತ್ತರ ನೀಡಿ ಸುಮ್ಮನಾದರು. ಹೆಚ್ಚುವರಿ ಶುಲ್ಕಕ್ಕೆ ಸಂಬಂಧಿಸಿ ವಿದ್ಯಾರ್ಥಿಗಳಿಗೆ ಆಡಳಿತ ಸಂಸ್ಥೆಗಳು ಬೆದರಿಕೆ ಒಡ್ಡುತ್ತಿವೆ ಎಂಬ ವಿಚಾರದ ಬಗ್ಗೆ ಮಾತನಾಡಿದ ಸಚಿವರು, ವಿದ್ಯಾರ್ಥಿಗಳು ಆತಂಕ ಪಡಬೇಕಿಲ್ಲ. ಸರ್ಕಾರ ಎಲ್ಲ ರೀತಿಯ ನೆರವು ನೀಡಲಿದೆ ಎಂದು ಅವರು ಸ್ಪಷ್ಟಪಡಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

