ಪಿಎಂಇಜಿಪಿ: 31ರೊಳಗೆ ಸಾಲಗಳ ಅರ್ಜಿ ವಿಲೇವಾರಿ ಮಾಡಿ
ನವದೆಹಲಿ: ಪ್ರಧಾನ ಮಂತ್ರಿ ಉದ್ಯೋಗ ಸೃಷ್ಟಿ ಯೋಜನೆಯಡಿ(ಪಿಎಂಇಜಿಪಿ) ಸಾಲ ಕೋರಿ ಸಲ್ಲಿಸಿರುವ ಅರ್ಜಿಗಳನ್ನು ಡಿ.31ರೊಳಗೆ ವಿಲೇವಾರಿ ಮಾಡುವಂತೆ ಕೇಂದ್ರ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವ ಕೆ.ಎಚ್.ಮುನಿಯಪ್ಪ ಅವರು ಎಲ್ಲ ರಾಷ್ಟ್ರೀಕೃತ ಬ್ಯಾಂಕ್ಗಳಿಗೆ ಸೂಚಿಸಿದ್ದಾರೆ.
ಸೋಮವಾರ ದೆಹಲಿಯಲ್ಲಿ ಎಲ್ಲ ರಾಷ್ಟ್ರೀಕೃತ ಬ್ಯಾಂಕ್ಗಳ ಅಧ್ಯಕ್ಷರು ಮತ್ತು ವ್ಯವಸ್ಥಾಪಕ ನಿರ್ದೇಶಕರು, ಕಾರ್ಯ ನಿರ್ವಾಹಕ ನಿರ್ದೇಶಕರು ಹಾಗೂ ಪ್ರಧಾನ ವ್ಯವಸ್ಥಾಪಕರ ಸಭೆ ನಡೆಸಿದ ಸಚಿವರು, 'ಬ್ಯಾಂಕ್ಗಳು ಸಾಲ ಖಾತರಿ ಯೋಜನೆಯಡಿ ಅರ್ಜಿದಾರರಿಗೆ ಆದ್ಯತೆ ಮೇಲೆ ಸಾಲ ಮಂಜೂರು ಮಾಡಬೇಕು' ಎಂದರು.
ಪ್ರಸಕ್ತ ಸಾಲಿನಲ್ಲಿ ಸಣ್ಣ ಉದ್ಯಮ ಪ್ರಾರಂಭಿಸಲು 3 ಲಕ್ಷ ಅರ್ಜಿಗಳು ಬಂದಿವೆ. ಈ ಪೈಕಿ 1 ಲಕ್ಷ ಅರ್ಜಿಗಳನ್ನು ಜಿಲ್ಲಾ ಮಟ್ಟದ ಕಾರ್ಯಪಡೆ ಶಿಫಾರಸು ಮಾಡಿದೆ. ಬ್ಯಾಂಕ್ಗಳು 81000 ಅರ್ಜಿಗಳನ್ನು ಸ್ವೀಕರಿಸಿವೆ. ಈ ಪೈಕಿ ಬ್ಯಾಂಕ್ಗಳು ಕೇವಲ 15000 ಅರ್ಜಿಗಳಿಗೆ ಸಾಲ ಮಂಜೂರು ಮಾಡಿದ್ದು, 6000 ಅರ್ಜಿದಾರರಿಗೆ ಸಾಲ ಬಿಡುಗಡೆ ಮಾಡಿವೆ. ಡಿ.31ರೊಳಗೆ 1 ಲಕ್ಷ ಅರ್ಜಿಗಳನ್ನು ವಿಲೇವಾರಿ ಮಾಡಿ ಸಾಲ ಮಂಜೂರು ಮಾಡಬೇಕು ಎಂದು ಕಾಲಮಿತಿ ವಿಧಿಸಿದ್ದಾರೆ. ಸಾಲ ಖಾತರಿ ಯೋಜನೆಯಡಿ ಅರ್ಹ ಅರ್ಜಿದಾರರಿಗೆ ತ್ವರಿತವಾಗಿ ಸಾಲ ಮಂಜೂರು ಮಾಡಬೇಕು ಎಂದೂ ಸೂಚಿಸಿದ್ದಾರೆ.
'ಖಾತ್ರಿ' ಇಲ್ಲದೆ ಸಾಲ ಪಡೆಯಬಹುದು: ಪ್ರಧಾನ ಮಂತ್ರಿ ಉದ್ಯೋಗ ಸೃಷ್ಟಿ ಯೋಜನೆಯಡಿ ಅರ್ಹ ಫಲಾನುಭವಿಗಳು ಯಾವುದೇ ಖಾತರಿ ನೀಡದೇ ಸಾಲ ಪಡೆಯಬಹುದಾಗಿದೆ. ಬ್ಯಾಂಕ್ಗಳು ಅದನ್ನು ನಾಮಫಲಕಗಳಲ್ಲಿ ಪ್ರದರ್ಶಿಸಬೇಕು ಎಂದು ಮುನಿಯಪ್ಪ ತಿಳಿಸಿದ್ದಾರೆ. ಸಭೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, 'ಪಿಎಂಇಜಿಪಿ ಯೋಜನೆ ಜಾರಿಯಲ್ಲಿ ಪಾರದರ್ಶಕತೆ ಮತ್ತು ಉತ್ತರದಾಯಿತ್ವ ತರಲು ಅರ್ಜಿಗಳ ಇ-ಟ್ರಾಕಿಂಗ್ ವ್ಯವಸ್ಥೆ ಮಾಡಲಾಗಿದೆ. ಪ್ರತಿಯೊಬ್ಬ ಅರ್ಜಿದಾರರು ಆನ್ಲೈನ್ನಲ್ಲಿ ತಮ್ಮ ಅರ್ಜಿಯು ಯಾವ ಹಂತದಲ್ಲಿದೆ ಎಂಬುದನ್ನು ತಿಳಿಯಬಹುದಾಗಿದೆ' ಎಂದರು. 12ನೇ ಯೋಜನೆಯಲ್ಲಿ ಸಣ್ಣ ಮತ್ತು ಮಧ್ಯಮ ಕೈಗಾರಿಕಾ ವಲಯಕ್ಕೆ 24000 ಕೋಟಿ ಅನುದಾನ ಒದಗಿಸಲಾಗಿದೆ. ಇದಕ್ಕಾಗಿ ಪ್ರಧಾನ ಮಂತ್ರಿ ಮನಮೋಹನ್ ಸಿಂಗ್ ಹಾಗೂ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

