ಪ್ರಧಾನ ಸುದ್ದಿ

ಗವರ್ನರ್, ಸರ್ಕಾರ ನಡುವೆ ಬಿಗ್‌ವಾರ್

ಗವರ್ನರ್, ಸರ್ಕಾರ ನಡುವೆ ಬಿಗ್‌ವಾರ್
Published On :

ಕನ್ನಡಪ್ರಭ ವಾರ್ತೆ, ಬೆಂಗಳೂರು, ಡಿ.13-
ಸರ್ಕಾರದ ಕಾರ್ಯನಿರ್ವಹಣೆ ಬಗ್ಗೆ ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಮತ್ತೆ ಆಕ್ಷೇಪ ವ್ಯಕ್ತಪಡಿಸಿದ್ದು, ಶನಿವಾರ ನಡೆಯಲಿರುವ ಸಮನ್ವಯ ಸಮಿತಿ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆ ಇದೆ.
ಸರ್ಕಾರ, ಪಕ್ಷ ಹಾಗೂ ರಾಜಭವನದ ನಡುವೆ ಸಂವಹನದ ಕೊಂಡಿ ಕಳಚಿದೆ. ಇದು ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗುತ್ತಿದ್ದು, ರಾಜ್ಯ ಕಾಂಗ್ರೆಸ್ ಉಸ್ತುವಾರಿ ವಹಿಸಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್ ಸಿಂಗ್ ಸಮ್ಮುಖದಲ್ಲಿ ಸಮಸ್ಯೆ ಬಗೆಹರಿಸುವ ಪ್ರಯತ್ನ ನಡೆಯಲಿದೆ. ಇತ್ತೀಚಿನ ದಿನಗಳಲ್ಲಿ ಸರ್ಕಾರದ ಬಗ್ಗೆ ಪದೇ ಪದೆ ಆಕ್ಷೇಪ ವ್ಯಕ್ತಪಡಿಸುತ್ತಿರುವ ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಶುಕ್ರವಾರ ಮತ್ತೆ ಗುಡುಗಿದ್ದಾರೆ.
ಪ್ರಮುಖ ವಿಧೇಯಕಗಳಿಗೆ ಒಪ್ಪಿಗೆ ಪಡೆಯಲು ರಾಜ್ಯಪಾಲರ ಜತೆ ಚರ್ಚೆ ನಡೆಸಲು ಶುಕ್ರವಾರ ರಾಜಭವನಕ್ಕೆ ಬಂದ ಸಚಿವರ ನಿಯೋಗದ ಎದುರೇ ರಾಜ್ಯಪಾಲರು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ. ಜಯಚಂದ್ರ, ಗೃಹ ಸಚಿವ ಕೆ.ಜೆ. ಜಾರ್ಜ್, ಸಚಿವರಾದ ಡಾ.ಎಂ.ಬಿ. ಪಾಟೀಲ್, ಎಸ್.ಆರ್. ಪಾಟೀಲ್ ಅವರಿದ್ದ ನಿಯೋಗದ ಎದುರೇ ರಾಜ್ಯಪಾಲರು ಮತ್ತೆ ಅಸಮಾಧಾನ ಹೊರ ಹಾಕಿದ್ದಾರೆ.

ಸಮನ್ವಯ ಸಮಿತಿ ಸಭೆ:
ಪಕ್ಷ ಹಾಗೂ ಸರ್ಕಾರದ ನಡುವೆ ಹೊಂದಾಣಿಕೆ ಸೃಷ್ಟಿಸಲು ರಚಿಸಿರುವ ಕಾಂಗ್ರೆಸ್ ಸಮನ್ವಯ ಸಮಿತಿ ಹಾಗೂ ಕೆಪಿಸಿಸಿ ಚುನಾವಣಾ ಸಮಿತಿ ಸಭೆಯಲ್ಲಿ ಈ ಬಗ್ಗೆ ಒಮ್ಮತ ಮೂಡಿಸುವ ಪ್ರಯತ್ನ ನಡೆಯಲಿದೆ. ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಖಾಸಗಿ ಹೊಟೇಲ್‌ನಲ್ಲಿ ಶನಿವಾರ ಮಧ್ಯಾಹ್ನ 3.30ಕ್ಕೆ ಸಭೆ ನಡೆಯಲಿದ್ದು, ರಾಜ್ಯ ಕಾಂಗ್ರೆಸ್ ಉಸ್ತುವಾರಿ ವಹಿಸಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್ ಸಿಂಗ್ ಈ ಎರಡೂ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ. ಸಮನ್ವಯ ಸಮಿತಿ ರಚನೆಯಾದ ನಂತರ ರಾಜ್ಯದಲ್ಲಿ ನಡೆಯುವ ಮೊದಲ ಸಭೆ ಇದಾಗಿದ್ದು, ಸರ್ಕಾರ ಹಾಗೂ ಪಕ್ಷಕ್ಕೆ ಸಂಬಂಧಿಸಿದ ಹಲವು ವಿಚಾರಗಳು ಚರ್ಚೆಗೆ ಬರಲಿವೆ.             
ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ, ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವ ಕೆ.ಜೆ. ಜಾರ್ಜ್, ಶಾಸಕ ಡಿ.ಕೆ. ಶಿವಕುಮಾರ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ಶಾಂತರಾಮ್ ನಾಯ್ಕ್, ಕಾರ್ಯದರ್ಶಿ ಡಾ. ಚಲ್ಲಕುಮಾರ್ ಸಭೆಯಲ್ಲಿ ಭಾಗವಹಿಸಲಿದ್ದಾರೆ.
ಸಭೆಯಲ್ಲಿ ಮುಖ್ಯವಾಗಿ ಸರ್ಕಾರದ ಜನಪ್ರಿಯ ಕಾರ್ಯಕ್ರಮಗಳ ಅನುಷ್ಠಾನ ಮತ್ತು ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ನಡೆಯಲಿದೆ. ಲೋಕಸಭಾ ಚುನಾವಣೆ ಮುಗಿಯುವವರೆಗೆ ಸಂಪುಟ ವಿಸ್ತರಣೆ ಬೇಡ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪಟ್ಟು ಹಿಡಿದಿದ್ದಾರೆ. ಆದರೆ ಸಂಪುಟದಲ್ಲಿ 5 ಖಾತೆಗಳು ಖಾಲಿ ಇವೆ. 11 ಜಿಲ್ಲೆಗಳಿಗೆ ಹಾಗೂ ಹಲವು ಜಾತಿಗಳಿಗೆ ಪ್ರಾತಿನಿಧ್ಯ ದೊರೆತಿಲ್ಲ. ಹೀಗಾಗಿ ಪಕ್ಷದ ವತಿಯಿಂದ ಸಂಪುಟ ವಿಸ್ತರಣೆಗೆ ಒತ್ತಡವಿದೆ.
ಈ ಗೊಂದಲವನ್ನು ದಿಗ್ವಿಜಯ್ ಸಿಂಗ್ ಸಮ್ಮುಖದಲ್ಲೇ ಚರ್ಚಿಸಿ ಪರಿಹರಿಸಿಕೊಳ್ಳಲು ನಿರ್ಧರಿಸಲಾಗಿದೆ. ಅದೇ ರೀತಿ ಪಕ್ಷ 9 ವರ್ಷಗಳ ನಂತರ ಪೂರ್ಣ ಪ್ರಮಾಣದಲ್ಲಿ ಅಧಿಕಾರಕ್ಕೆ ಬಂದಿದೆ. ಹೀಗಾಗಿ ನಿಗಮ- ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ಆಕಾಂಕ್ಷಿಗಳು ಹೆಚ್ಚಾಗಿದ್ದಾರೆ. ಕೆಪಿಸಿಸಿಗೆ ಈಗಾಗಲೇ 6 ಸಾವಿರ ಅರ್ಜಿಗಳು ಬಂದಿವೆ. ಈ ವಿಚಾರವನ್ನು ಆದ್ಯತೆ ಮೇಲೆ ಬಗೆಹರಿಸಬೇಕೆಂಬ ಒತ್ತಾಯ ಕೇಳಿ ಬಂದಿದೆ. ಇದರ ಜತೆಗೆ ಬಳ್ಳಾರಿ ಜಿಲ್ಲಾ ಕಾಂಗ್ರೆಸ್ ಆಸ್ತಿಯನ್ನು ದುರ್ಬಳಕೆ ಮಾಡಿಕೊಂಡಿರುವ ಆರೋಪ ಎದುರಿಸುತ್ತಿರುವ ಮಾಜಿ ಸಂಸದ ಕೆ.ಸಿ. ಕೊಂಡಯ್ಯ ವಿರುದ್ಧ ಶಿಸ್ತುಕ್ರಮ ತೆಗೆದುಕೊಳ್ಳುವ ವಿಚಾರ ಪ್ರಸ್ತಾಪವಾಗಲಿದೆ ಎಂದು ಮೂಲಗಳು ತಿಳಿಸಿವೆ.

ಚುನಾವಣಾ ಸಮಿತಿ:
ಈ ಸಭೆ ಬಳಿಕ ಕೆಪಿಸಿಸಿ ಚುನಾವಣಾ ಸಮಿತಿ ಸಭೆ ನಡೆಯಲಿದ್ದು, ಜಿಲ್ಲಾ ಕಾಂಗ್ರೆಸ್ ಹಾಗೂ ಪ್ರದೇಶ ಕಾಂಗ್ರೆಸ್ ಸಮಿತಿ ಸಿದ್ದಪಡಿಸಿರುವ ಲೋಕಸಭಾ ಚುನಾವಣಾ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯ ಬಗ್ಗೆ ಚರ್ಚೆ ನಡೆಯಲಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.