ಪ್ರಧಾನ ಸುದ್ದಿ

ಮುಂದಿನ ವರ್ಷದಿಂದ ಶುಲ್ಕ ನಿಯಂತ್ರಣ ಕಾಯ್ದೆ

Published On :

ಬೆಂಗಳೂರು: ಕರ್ನಾಟಕ ವೃತ್ತಿ ಶಿಕ್ಷಣ ಸಂಸ್ಥೆಗಳ ಪ್ರವೇಶ ಮತ್ತು ಶುಲ್ಕ ನಿಯಂತ್ರಣ ಕಾಯಿದೆ- 2006ನ್ನು ಮುಂದಿನ ಶೈಕ್ಷಣಿಕ ವರ್ಷದಿಂದ ಜಾರಿಗೆ ತರಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ವೃತ್ತಿ ಶಿಕ್ಷಣ ಪ್ರವೇಶ ಪರೀಕ್ಷೆ ರದ್ಧತಿ ವಿಚಾರದಲ್ಲಿ ಎದ್ದಿರುವ ಗೊಂದಲ ಸರಿಪಡಿಸಲು ಪ್ರಯತ್ನಿಸಿರುವ ಅವರು, ಯಾವುದೇ ಕಾರಣಕ್ಕೂ ವಿದ್ಯಾರ್ಥಿಗಳು ಹಾಗೂ ಪೋಷಕರ ಹಿತಕ್ಕೆ ಸರ್ಕಾರ ಧಕ್ಕೆ ತರುವುದಿಲ್ಲ. ಈ ಬಗ್ಗೆ ಅನಗತ್ಯ ಗೊಂದಲ ಬೇಡ ಎಂದು ಹೇಳಿದ್ದಾರೆ.
ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಜನತಾದರ್ಶನ ಕಾರ್ಯಕ್ರಮದ ನಂತರ ಸುದ್ದಿಗಾರರ ಜತೆ ಮಾತನಾಡಿದ ಅವರು ಈ ವಿಷಯ ತಿಳಿಸಿದರು. ಈ ಸಾಲಿನ ಪ್ರವೇಶ ಪ್ರಕ್ರಿಯೆ ಮುಕ್ತಾಯಗೊಂಡಿದೆ. ಮುಂದಿನ ವರ್ಷದಿಂದ ನಾವು 2006ರ ಕಾನೂನು ಜಾರಿಗೆ ತರಲು ನಿರ್ಧರಿಸಿದ್ದೇವೆ. ಇದರ ಪ್ರಕಾರ ಶುಲ್ಕ ಮತ್ತು ಪ್ರವೇಶ ಪ್ರಕ್ರಿಯೆ ನಿರ್ಧರಿಸುವುದಕ್ಕೆ  ಹೈಕೋರ್ಟ್‌ನ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಎರಡು ಸಮಿತಿ ರಚಿಸಲಾಗಿದೆ. ಆ ಸಮಿತಿ ವರದಿ ಬಂದ ನಂತರ ಉಳಿದ ವಿಚಾರ ನಿರ್ಧಾರವಾಗುತ್ತದೆ ಎಂದು ಅಭಿಪ್ರಾಯಪಟ್ಟರು.
ಆ ಎರಡು ಸಮಿತಿಗಳು ಇನ್ನೂ ಸರ್ಕಾರಕ್ಕೆ ವರದಿ ಸಲ್ಲಿಸಿಲ್ಲ. ಹೀಗಾಗಿ ದಲಿತ, ಹಿಂದುಳಿದ ಹಾಗೂ ಬಡ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತದೆ ಎಂಬ ಆತಂಕದ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಇವೆಲ್ಲವೂ ಕಪೋಲ ಕಲ್ಪಿತ ಕಳವಳ. ಈ ವಿಚಾರದಲ್ಲಿ ಗೊಂದಲ ಮೂಡಿಸುವುದು ಬೇಡ ಎಂದು ಹೇಳಿದರು. ಯಾರೋ ಕಾನೂನು ಗೊತ್ತಿಲ್ಲದವರು ಇಂಥ ಗೊಂದಲ ಮೂಡಿಸಲು ಪ್ರಯತ್ನ ಮಾಡುತ್ತಿರಬಹುದು. ಆದರೆ ಶಿಫಾರಸು ಬಾರದೇ ಸರ್ಕಾರ ಯಾವುದಾದರೂ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವೇ? 2006ರ ಕಾಯಿದೆ ಜಾರಿಗೆ ತಂದರೆ ಖಾಸಗಿಯವರು ಮಿತಿ ಮೀರಿ ಶುಲ್ಕ ವಿಧಿಸುತ್ತಾರೆ ಎಂದು ಹೇಗೆ ಈಗಲೇ ಕಲ್ಪನೆ ಮಾಡಿಕೊಳ್ಳುತ್ತೀರಿ ಎಂದು ಪ್ರಶ್ನಿಸಿದರು. ಪ್ರವೇಶ ಪರೀಕ್ಷೆ ಸೇರಿದಂತೆ ಯಾವುದೇ ವಿಚಾರದಲ್ಲೂ ಗೊಂದಲವಿಲ್ಲ. ಸರ್ಕಾರ ವಿದ್ಯಾರ್ಥಿಗಳು ಮತ್ತು ಪೋಷಕರ ಹಿತ ಕಾಯುವುದಕ್ಕೆ ಬದ್ಧ. ಹಿಂದುಳಿದ, ದಲಿತ ಹಾಗೂ ಬಡ ವಿದ್ಯಾರ್ಥಿಗಳು ಆತಂಕ ಪಡಬೇಕಾದ ಅಗತ್ಯವೇ ಇಲ್ಲ ಎಂದು ಹೇಳಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.