ಪ್ರಧಾನ ಸುದ್ದಿ

ಸಿದ್ದುಗೆ ಕಡಿವಾಣ

ಸಿದ್ದುಗೆ ಕಡಿವಾಣ
Published On :

ಕನ್ನಡಪ್ರಭ ವಾರ್ತೆ ಬೆಂಗಳೂರು ಜ. 2
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಏಕಪಕ್ಷೀಯ ನಿರ್ಧಾರಗಳಿಗೆ ಕಡಿವಾಣ ಹಾಕಲು, ಪಕ್ಷ ಮತ್ತು ಸರ್ಕಾರದ ಮಧ್ಯೆ ಹೊಂದಾಣಿಕೆಗಾಗಿ ಸಮನ್ವಯ ಸಮಿತಿ ರಚಿಸಲು ಕಾಂಗ್ರೆಸ್ ನಿರ್ಧರಿಸಿದೆ.
ಅಷ್ಟೇ ಅಲ್ಲ, ವಿಧಾನಸಭೆ ಚುನಾವಣೆ ಪ್ರಣಾಳಿಕೆಯ ಅಂಶಗಳನ್ನು ಜಾರಿಗೆ ತರಲು ಪ್ರತ್ಯೇಕ ಸಮಿತಿಯನ್ನೂ ರಚಿಸಲಿದೆ.
ಸೋಮವಾರ ಅರಮನೆ ಮೈದಾನದಲ್ಲಿ ನಡೆದ ಕೆಪಿಸಿಸಿ ಸರ್ವಸದಸ್ಯರ ಸಭೆಯಲ್ಲಿ ಪಕ್ಷದ ರಾಜ್ಯ ಉಸ್ತುವಾರಿ ದಿಗ್ವಿಜಯ್ ಸಿಂಗ್ ಅವರು ಸಮನ್ವಯ ಸಮಿತಿ ಮತ್ತು ಪ್ರಣಾಳಿಕೆ ಅನುಷ್ಠಾನ ಸಮಿತಿ ರಚಿಸುವುದಾಗಿ ಪ್ರಕಟಿಸಿದ್ದು, ಮುಖ್ಯಮಂತ್ರಿ ಮತ್ತು ಪಕ್ಷದ ರಾಜ್ಯಾಧ್ಯಕ್ಷರ ಜತೆ ಚರ್ಚಿಸಿ ಈ ಕುರಿತು ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದರು.
ಈಗಾಗಲೇ ರಾಷ್ಟ್ರೀಯ ಮಟ್ಟದಲ್ಲಿ ಇಂತಹ ಸಮಿತಿ ಇದ್ದು, ಅದರಿಂದ ಸಾಕಷ್ಟು ಅನುಕೂಲವಾಗಿದೆ. ಅದೇ ರೀತಿ ರಾಜ್ಯ ಮಟ್ಟದಲ್ಲೂ ಸಮನ್ವಯ ಸಮಿತಿ ರಚನೆ ಮಾಡಬೇಕು. ಇದರ ಜತೆಗೆ ಜಿಲ್ಲಾ ಮಟ್ಟದಲ್ಲೂ ಸಮನ್ವಯ ಸಮಿತಿ ರಚಿಸುವ ಮೂಲಕ ಉತ್ತಮ ಆಡಳಿತದ ಜತೆಗೆ ಪಕ್ಷದ ಬಲವರ್ಧನೆಗೂ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.
ಅದೇ ರೀತಿ ಕಳೆದ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಪಕ್ಷ ಬಿಡುಗಡೆ ಮಾಡಿದ್ದ ಪ್ರಣಾಳಿಕೆಯಲ್ಲಿನ ಕಾರ್ಯಕ್ರಮಗಳನ್ನು ಜಾರಿಗೆ ತರುವ ಬಗ್ಗೆ ಮುಖ್ಯಮಂತ್ರಿಗಳ ಕಚೇರಿಯಲ್ಲಿ ಒಂದು ವಿಭಾಗ ಆರಂಭಿಸಬೇಕು. ಅಲ್ಲದೆ ಅವುಗಳ ಜಾರಿಗೆ ನೀಲನಕ್ಷೆ ಸಿದ್ಧಪಡಿಸಿ ಕಾಲಮಿತಿ ಕೂಡ ನಿಗದಿಪಡಿಸಬೇಕು ಎಂದು ಸೂಚಿಸಿದರು.
ಸಭೆ ಕಡ್ಡಾಯ: ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಪಕ್ಷದ ಸಂಘಟನೆಗೆ ಆದ್ಯತೆ ನೀಡುವಂತೆ ಸೂಚಿಸಿದ ದಿಗ್ವಿಜಯ್ ಸಿಂಗ್, ಪ್ರದೇಶ ಕಾಂಗ್ರೆಸ್ ಸಮಿತಿ, ಜಿಲ್ಲಾ ಮತ್ತು ಬ್ಲಾಕ್ ಕಾಂಗ್ರೆಸ್ ಸಮಿತಿಗಳು ಕಾಲ ಕಾಲಕ್ಕೆ ಸಭೆ ನಡೆಸುವುದು ಕಡ್ಡಾಯವಾಗಬೇಕು.
ಜಿಲ್ಲಾ ಮತ್ತು ಬ್ಲಾಕ್ ಕಾಂಗ್ರೆಸ್ ಸಮಿತಿಗಳು ಪ್ರತಿ ಮೂರು ತಿಂಗಳಿಗೊಮ್ಮೆ ಸಭೆ ನಡೆಸಬೇಕು. ಪ್ರದೇಶ ಕಾಂಗ್ರೆಸ್ ಪ್ರತಿ ತಿಂಗಳು ಸಭೆ ನಡೆಸಿ ಅದರ ವರದಿಯನ್ನು ರಾಷ್ಟ್ರೀಯ ಕಾಂಗ್ರೆಸ್‌ಗೆ ಕಳುಹಿಸಬೇಕು. ಇದರ ಜತೆಗೆ ಹಿಂದಿನ ಸಭೆಯ ನಿರ್ಧಾರಗಳ ಬಗ್ಗೆ ಕೈಗೊಂಡಿರುವ ಕ್ರಮಗಳ ಕುರಿತ ವರದಿಯನ್ನೂ ನೀಡಬೇಕು ಎಂದು ನಿರ್ದೇಶನ ನೀಡಿದರು.
ಈ ನಿಟ್ಟಿನಲ್ಲಿ ಎಲ್ಲ ಜಿಲ್ಲಾ ಸಮಿತಿಗಳಿಗೂ ಪ್ರದೇಶ ಕಾಂಗ್ರೆಸ್ ಸಮಿತಿ ಒಬ್ಬ ಪ್ರತಿನಿಧಿ ಅಥವಾ ಒಬ್ಬ ಸಚಿವರನ್ನು ನಿಯೋಜನೆ ಮಾಡಬೇಕು ಎಂದು ಕೆಪಿಸಿಸಿ ಅಧ್ಯಕ್ಷರು ಹಾಗೂ ಮುಖ್ಯಮಂತ್ರಿಗಳಿಗೆ ಸೂಚಿಸಿದ ಅವರು, ಸತತ ಮೂರು ಸಭೆಗಳಿಗೆ ಗೈರುಹಾಜರಾಗುವ ಪದಾಧಿಕಾರಿಗಳು ತನ್ನಿಂತಾನಾಗಿಯೇ ಅಧಿಕಾರದಿಂದ ಪದಚ್ಯುತಗೊಳ್ಳುತ್ತಾರೆ. ಆದ್ದರಿಂದ ಪಕ್ಷದ ಪದಾಧಿಕಾರಿಗಳು ಪಕ್ಷ ಸಂಘಟನೆ ವಿಚಾರದಲ್ಲಿ ಎಚ್ಚರಿಕೆಯಿಂದ ಕೆಲಸ ಮಾಡಬೇಕು ಎಂದರು. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಪಕ್ಷ ಅಧಿಕಾರಕ್ಕೆ ಬಂದಿರಬಹುದು. ಆದರೆ, ಪಡೆದ ಮತಗಳು ಹಿಂದಿನ ವಿಧಾನಸಭೆ ಚುನಾವಣೆಗಿಂತ ಶೇ. 0.5ರಷ್ಟು ಮಾತ್ರ ಹೆಚ್ಚಾಗಿದೆ. ಹೀಗಾಗಿ ಲೋಕಸಭೆ ಚುನಾವಣೆ ವೇಳೆ ಪಕ್ಷ ಪಡೆಯುವ ಮತಗಳ ಪ್ರಮಾಣ ಶೇ. 40 ದಾಟುವಂತೆ ಕಾರ್ಯಕ್ರಮಗಳನ್ನು ರೂಪಿಸಬೇಕು ಎಂದು ಹೇಳಿದರು. ಪಕ್ಷ ಬಲವರ್ಧನೆಗೆ ಸಾಮಾಜಿಕ ಜಾಲ ತಾಣಗಳನ್ನು ಬಳಸಿಕೊಳ್ಳುವಲ್ಲಿ ಬಿಜೆಪಿ ಮುಂಚೂಣಿಯಲ್ಲಿದೆ. ಅದೇ ರೀತಿ ಕಾಂಗ್ರೆಸ್‌ನಲ್ಲೂ ಇದು ಹೆಚ್ಚು ಬಳಕೆಯಾಗಬೇಕು. ಮುಂದಿನ ಲೋಕಸಭೆ ಚುನಾವಣೆ ವೇಳೆಗೆ ಎನ್‌ಎಸ್‌ಯುಐ, ಯುವ ಕಾಂಗ್ರೆಸ್ ಸೇರಿದಂತೆ ಪಕ್ಷದ ಹತ್ತು ಲಕ್ಷ ಮಂದಿಯಾದರೂ ಟ್ವಿಟರ್ ಅಕೌಂಟ್ ತೆರೆಯಬೇಕು. ಈ ಮೂಲಕ ಎಐಸಿಸಿ ಪ್ರತಿನಿತ್ಯ ಪಕ್ಷ ಸಂಘಟನೆಗೆ ನೀಡುವ ಸೂಚನೆಗಳನ್ನು ತಿಳಿದು ಅದನ್ನು ಪಾಲಿಸಬೇಕು ಎಂದು ತಿಳಿಸಿದರು.
ಒಟ್ಟಾಗಿ ಕೆಲಸ ಮಾಡಿ: ಜನ ನಮಗೆ ಅಧಿಕಾರ ನೀಡಿರುವುದು ಜನ ಸೇವೆ ಮಾಡಲೆಂದೇ ಹೊರತು ರಾಜ್ಯ ಆಳಲು ಅಲ್ಲ. ರಾಜ್ಯ ಕಾಂಗ್ರೆಸ್‌ನಲ್ಲಿ ಸಾಕಷ್ಟು ನಾಯಕರಿದ್ದಾರೆ. ಅವರೆಲ್ಲರೂ ತಮ್ಮ ವೈಯಕ್ತಿಕ ವಿಚಾರ, ಸ್ವಂತ ಕೆಲಸ, ಸ್ವಾರ್ಥ ಸಾಧನೆ ಮಾಡುವುದನ್ನು ಬಿಟ್ಟು ಒಂದು ಗುಂಪಾಗಿ ಕೆಲಸ ಮಾಡಿ. ಆಗ ಮುಂಬರುವ ಲೋಕಸಭೆ ಚುನಾವಣೆ ವೇಳೆ ಪಕ್ಷ ಇನ್ನಷ್ಟು ಬಲಯುತವಾಗಿ ಅತಿ ಹೆಚ್ಚು ಸ್ಥಾನ ಪಡೆಯಲು ಅನುಕೂಲವಾಗುತ್ತದೆ ಎಂದು ಅವರು ಪಕ್ಷದ ರಾಜ್ಯ ನಾಯಕರಿಗೆ ಕಿವಿಮಾತು ಹೇಳಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ, ಕೇಂದ್ರ ಸಚಿವರಾದ ಆಸ್ಕರ್ ಫರ್ನಾಂಡೀಸ್, ಮಲ್ಲಿಕಾರ್ಜುನ ಖರ್ಗೆ, ರೆಹಮಾನ್ ಖಾನ್, ಕೆ.ಎಚ್. ಮುನಿಯಪ್ಪ, ಎಐಸಿಸಿ ಪ್ರತಿನಿಧಿ ಸೆಲ್ವಕುಮಾರ್, ರಾಜ್ಯ ಸಚಿವ ಸಂಪುಟದ ಸದಸ್ಯರು, ಪಕ್ಷದ ರಾಜ್ಯ ಪದಾಧಿಕಾರಿಗಳು ಇದ್ದರು.

ಪರಮೇಶ್ವರಗೆ ಡಿಸಿಎಂ ಸ್ಥಾನ ನೀಡಿ
ಬೆಂಗಳೂರು:
ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಕೆಪಿಸಿಸಿ ಪದಾಧಿಕಾರಿಗಳು ಆಗ್ರಹಿಸಿದ್ದಾರೆ.
ಈ ಕುರಿತಂತೆ ಪದಾಧಿಕಾರಿಗಳು ಎಐಸಿಸಿ ರಾಜ್ಯ ಉಸ್ತುವಾರಿ ದಿಗ್ವಿಜಯ್ ಸಿಂಗ್ ಅವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ. ಪರಮೇಶ್ವರ ಅವರು ವಿಧಾನಸಭೆ ಚುನಾವಣೆಯಲ್ಲಿ ಸೋತಿದ್ದರೂ ಅವರ ಅವಧಿಯಲ್ಲಿ ಪಕ್ಷ ಅಧಿಕಾರಕ್ಕೆ ಬಂದಿದೆ. ಅಲ್ಲದೆ, ಪಕ್ಷ ಸಂಘಟನೆಗೆ ಅವರು ಸಾಕಷ್ಟು ಶ್ರಮಿಸಿದ್ದಾರೆ. ಅಧ್ಯಕ್ಷರಾಗಿ ರಾಜ್ಯವಿಡೀ ಗಮನಹರಿಸಬೇಕಾಗಿದ್ದರಿಂದ ಅವರು ತಮ್ಮ ಕ್ಷೇತ್ರಕ್ಕೆ ಹೆಚ್ಚು ಒತ್ತು ನೀಡಲು ಸಾಧ್ಯವಾಗದೆ ಸೋಲು ಅನುಭವಿಸಬೇಕಾಯಿತು. ಪರಮೇಶ್ವರ ಅವರ ಈ ತ್ಯಾಗ ಗಮನಿಸಿ ಅವರಿಗೆ ಉಪಮುಖ್ಯಮಂತ್ರಿ ಹುದ್ದೆ ನೀಡಬೇಕು ಎಂದು ಪತ್ರದಲ್ಲಿ ಪದಾಧಿಕಾರಿಗಳು ಕೋರಿದ್ದಾರೆ.
ನಿಗಮ- ಮಂಡಳಿ ನೇಮಕ: ಹೆಚ್ಚಿನ ಸಂಖ್ಯೆಯಲ್ಲಿ ಮುಖಂಡರು ಮತ್ತು ಕಾರ್ಯಕರ್ತರಿಗೆ ಅವಕಾಶ ನೀಡುವ ಸಲುವಾಗಿ ಎರಡೂವರೆ ವರ್ಷ ಅವಧಿಗೆ ಎರಡು ಹಂತಗಳಲ್ಲಿ ನಿಗಮ- ಮಂಡಳಿ, ಪ್ರಾಧಿಕಾರಗಳ ಅಧ್ಯಕ್ಷರನ್ನು ನೇಮಿಸಲು ಕಾಂಗ್ರೆಸ್ ತೀರ್ಮಾನಿಸಿದೆ.
ನಿಗಮ- ಮಂಡಳಿ, ಪ್ರಾಧಿಕಾರಗಳ ಅಧ್ಯಕ್ಷ ಸ್ಥಾನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಆಕಾಂಕ್ಷಿಗಳಿದ್ದಾರೆ. ಈ ಪೈಕಿ ಎಲ್ಲರನ್ನು ಸಮಾಧಾನಪಡಿಸಲು ಸಾಧ್ಯವಾಗದೇ ಇದ್ದರೂ ಹೆಚ್ಚಿನವರಿಗೆ ಅವಕಾಶ ಮಾಡಿಕೊಡಬೇಕು ಎಂಬ ಕಾರಣಕ್ಕೆ ಈ ತೀರ್ಮಾನಕ್ಕೆ ಬರಲಾಗಿದೆ. ಎಐಸಿಸಿ ರಾಜ್ಯ ಉಸ್ತುವಾರಿ ದಿಗ್ವಿಜಯ್ ಸಿಂಗ್ ಅವರ ನೇತೃತ್ವದಲ್ಲಿ ಮಂಗಳವಾರ ನಡೆದ ಕೆಪಿಸಿಸಿ ಪದಾಧಿಕಾರಿಗಳ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಬಜೆಟ್ ಅಧಿವೇಶನ ಮುಗಿದ ತಕ್ಷಣವೇ ಒಂದು ಬಾರಿ ಎಲ್ಲಾ ನಿಗಮ- ಮಂಡಳಿಗಳಿಗೆ ಅಧ್ಯಕ್ಷರನ್ನು ನೇಮಿಸಬೇಕು. ಎರಡೂವರೆ ವರ್ಷಗಳ ಬಳಿಕ ಅವರನ್ನು ಕೆಳಗಿಳಿಸಿ ಬೇರೆಯವರಿಗೆ ಅವಕಾಶ ಮಾಡಿಕೊಡಬೇಕು ಎಂದು ದಿಗ್ವಿಜಯ್ ಸಿಂಗ್ ಅವರು ಪ್ರಸ್ತಾಪಿಸಿದಾಗ ಇದಕ್ಕೆ ಎಲ್ಲಾ ಪದಾಧಿಕಾರಿಗಳು ಸಮ್ಮತಿಸಿದ್ದಾರೆ. ರಾಜ್ಯದಲ್ಲಿ ಮುಂದಿನ ಲೋಕಸಭೆ ಚುನಾವಣೆಗೆ ಸಿದ್ಧರಾಗುವಂತೆ ಪದಾಧಿಕಾರಿಗಳಿಗೆ ಸೂಚನೆ ನೀಡಿದ ದಿಗ್ವಿಜಯ್‌ಸಿಂಗ್ ಅವರು, ಪಕ್ಷ ಸಂಘಟನೆಗೆ ಆದ್ಯತೆ ನೀಡಬೇಕು. ಮುಂದಿನ ಲೋಕಸಭೆ ಚುನಾವಣೆಯಲ್ಲಿ ಅತಿ ಹೆಚ್ಚು ಸ್ಥಾನ ಗೆಲ್ಲಲು ಶ್ರಮಿಸಬೇಕು ಎಂದು ಹೇಳಿದ್ದಾರೆ.
ರಾಜ್ಯಾದ್ಯಂತ ಪ್ರವಾಸ: ಪಕ್ಷ ಬಲಪಡಿಸುವ ಉದ್ದೇಶದಿಂದ ಬಜೆಟ್ ಅಧಿವೇಶನ ಮುಗಿದ ಬಳಿಕ ತಾವು ಹಾಗೂ ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ ಅವರು ರಾಜ್ಯಾದ್ಯಂತ ಪ್ರವಾಸ ಕೈಗೊಳ್ಳುವುದಾಗಿ ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಅಲ್ಲದೆ, ಪಕ್ಷದ ಎಲ್ಲಾ ಕಾರ್ಯಕ್ರಮಗಳಿಗೆ ತಾವು ಹಾಗು ಸಂಪುಟ ಸದಸ್ಯರು ಸಂಪೂರ್ಣ ಸಹಕಾರ ನೀಡುವುದಾಗಿ ಭರವಸೆ ನೀಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.