ಪ್ರಣಾಳಿಕೆ ಭರವಸೆಗಳನ್ನು ಬಜೆಟ್ನಲ್ಲಿ ಅಳವಡಿಸಿಕೊಳ್ಳಿ

ಕನ್ನಡಪ್ರಭ ವಾರ್ತೆ , ಬೆಂಗಳೂರು , ಜು. 6
ವಿಧಾನಸಭೆ ಚುನಾವಣೆ ವೇಳೆ ಪ್ರಣಾಳಿಕೆ ಮೂಲಕ ಮತದಾರರಿಗೆ ನೀಡಿರುವ ಭರವಸೆಗಳನ್ನು ಬಜೆಟ್ನಲ್ಲಿ ಅಳವಡಿಸಿಕೊಳ್ಳುವಂತೆ ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ.
ಕೆಪಿಸಿಸಿ ಅಧ್ಯಕ್ಷರು ಪತ್ರ ಬರೆದಿರುವುದು ಕಾಂಗ್ರೆಸ್ ಪಾಳಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಜೊತೆಗೆ ಇದು ಭಿನ್ನಾಭಿಪ್ರಾಯದ ಮುನ್ಸೂಚನೆ ಎಂಬ ಮಾತು ಕೇಳಿ ಬಂದಿದೆ. ಆದರೆ ಮೈಸೂರು ಜಿಲ್ಲಾ ಪ್ರವಾಸದಲ್ಲಿರುವ ಸಿದ್ದರಾಮಯ್ಯ ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದು, ಪರಮೇಶ್ವರ ಅವರ ಪತ್ರ ನನ್ನ ಕೈ ಸೇರಿಲ್ಲ ಎಂದು ಹೇಳಿದ್ದಾರೆ.
ಪತ್ರದಲ್ಲಿ ಏನಿದೆ?: ರಾಜ್ಯದ ಮಹಾಜನತೆ ಪಕ್ಷದ ಮೇಲೆ ಭರವಸೆಯನ್ನು ಇಟ್ಟು ಕಾಂಗ್ರೆಸ್ನ್ನು ಅಧಿಕಾರಕ್ಕೆ ತಂದಿದ್ದಾರೆ. ಚುನಾವಣೆಗೆ ಪೂರ್ವದಲ್ಲಿ ನಾಡಿನ ಜನತೆಯ ಭವಿಷ್ಯವನ್ನು ಬದಲಿಸಬಲ್ಲ ಹಲವು ವಿಚಾರಗಳನ್ನು ಪ್ರಣಾಳಿಕೆಯಲ್ಲಿ ಪ್ರಕಟ ಪಡಿಸಿದ್ದೇವೆ. ಲೋಕಸಭಾ ಚುನಾವಣೆ ಸನ್ನಿಹಿತವಾಗುತ್ತಿರುವುದರಿಂದ ಹಾಗೂ ನಾಡಿನ ಜನತೆಗೆ ಈಗಾಗಲೇ ಮಾತು ನೀಡಿರುವುದರಿಂದ ಆ ಎಲ್ಲ ಭರವಸೆಗಳನ್ನು ಈಡೇರಿಸುವ ಜವಾಬ್ದಾರಿ ನಮ್ಮ ಮೇಲೆ ಇದೆ. ತಾವು ರೂಪಿಸುತ್ತಿರುವ ಬಜೆಟ್ನಲ್ಲಿ ಪ್ರಣಾಳಿಕೆಯಲ್ಲಿರುವ ವಿಚಾರಗಳನ್ನು ಸಾಧ್ಯವಾದಷ್ಟು ಮಟ್ಟಿಗೆ ಅಳವಡಿಸಿಕೊಳ್ಳಬೇಕು. ಜತೆಗೆ ಸಂಪುಟದ ಎಲ್ಲ ಸದಸ್ಯರಿಗೆ ಇದೇ ರೀತಿ ನಡೆದುಕೊಳ್ಳುವಂತೆ ಸೂಚನೆ ನೀಡಬೇಕು.
2013ರ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ 102 ಕಡೆ ಕಾಂಗ್ರೆಸ್ ಅಭ್ಯರ್ಥಿಗಳು ಸೋತಿದ್ದಾರೆ. ಕ್ಷೇತ್ರದ ಅಭಿವೃದ್ಧಿ ಹಾಗೂ ಅನುದಾನ ಬಿಡುಗಡೆ ಸಂದರ್ಭದಲ್ಲಿ ಇವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು ಎಂದು ತಮಗೆ ಹಾಗೂ ತಮ್ಮ ಸಂಪುಟದ ಸಚಿವರಲ್ಲಿ ಕೋರುತ್ತೇನೆ. ಮಾತ್ರವಲ್ಲ ಪ್ರಣಾಳಿಕೆ ಪ್ರತಿಯನ್ನು ಪತ್ರದ ಜತೆಗೆ ತಗತ್ತಿಸಿದ್ದೇನೆ ಎಂದು ಪರಮೇಶ್ವರ ಸಿದ್ದರಾಮಯ್ಯ ಅವರಿಗೆ ಬರೆದ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಕೆಲ ದಿನಗಳ ಹಿಂದಷ್ಟೇ ಸಿದ್ದರಾಮಯ್ಯ, ಪರಮೇಶ್ವರ ಅವರ ನಿವಾಸಕ್ಕೆ ತೆರಳಿ ಚರ್ಚೆ ನಡೆಸಿದ್ದರು. ಆ ಸಂದರ್ಭದಲ್ಲಿ ಬಜೆಟ್ ಸ್ವರೂಪದ ಬಗೆಗೂ ಮಾತುಕತೆ ನಡೆದಿತ್ತು. ಅದೇ ರೀತಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಹೊತ್ತಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ದಿಗ್ವಿಜಯಸಿಂಗ್ ಭೇಟಿ ಸಂದರ್ಬದಲ್ಲೂ ಪ್ರಣಾಳಿಕೆ ಜಾರಿ ವಿಚಾರ ಪ್ರಸ್ತಾಪವಾಗಿತ್ತು. ಆದರೆ ಇದಾಗಿ ಕೆಲವೇ ದಿನಗಳಲ್ಲಿ ಕೆಪಿಸಿಸಿ ಅಧ್ಯಕ್ಷರು ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುವುದರ ಮರ್ಮವೇನು ಎಂಬುದು ಈಗ ಚರ್ಚೆಗೆ ಕಾರಣವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


