ಪ್ರಧಾನ ಸುದ್ದಿ

ಅಂಗನವಾಡಿಗಳಿಗೆ ಆ.15ರೊಳಗೆ ಕುಡಿವ ನೀರಿನ ವ್ಯವಸ್ಥೆ

Published On :

ಬೆಂಗಳೂರು: ರಾಜ್ಯದಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ಎದುರಿಸುತ್ತಿರುವ ಎಲ್ಲಾ ಅಂಗನವಾಡಿಗಳಿಗೆ ಕೂಡ ಆಗಸ್ಟ್ 15ರೊಳಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸುವುದಾಗಿ ಅಡ್ವೊಕೇಟ್ ಜನರಲ್ ಪ್ರೊ.ರವಿವರ್ಮಕುಮಾರ್ ಹೈಕೋರ್ಟ್‌ಗೆ ಭರವಸೆ ನೀಡಿದ್ದಾರೆ.
ರಾಜ್ಯದಲ್ಲಿನ ಸಾವಿರಾರು ಅಂಗನವಾಡಿಗಳಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ಕುರಿತ ಸ್ವಯಂ ಪ್ರೇರಿತ ಅರ್ಜಿ ವಿಚಾರಣೆ ಸಂದರ್ಭದಲ್ಲಿ ಅಡ್ವೊಕೇಟ್ ಜನರಲ್ ಈ ಭರವಸೆ ನೀಡಿದರು.
ಇದನ್ನು ಪರಿಗಣಿಸಿದ ಮುಖ್ಯ ನ್ಯಾ.ಡಿ.ಎಚ್.ವಘೇಲ ಹಾಗೂ ನ್ಯಾ.ಬಿ.ವಿ.ನಾಗರತ್ನ ಅವರಿದ್ದ ವಿಭಾಗೀಯ ಪೀಠ, ವಿಚಾರಣೆಯನ್ನು ಮುಂದೂಡಿದೆ.
ರಾಜ್ಯದಲ್ಲಿ ಒಟ್ಟು 6,415 ಅಂಗನವಾಡಿ ಕೇಂದ್ರಗಳು ಕುಡಿಯುವ ನೀರು ಹಾಗೂ ಶೌಚಾಲಯಗಳ ಕೊರತೆ ಎದುರಿಸುತ್ತಿರುವುದು ಗಮನಕ್ಕೆ ಬಂದಿದೆ. ಈ ಅಂಗನವಾಡಿಗಳಲ್ಲಿ ನಲ್ಲಿಯ ವ್ಯವಸ್ಥೆ ಕೂಡ ಇಲ್ಲ. ಈ ಅಂಗನವಾಡಿಗಳಿಗೆ ನೀರಿನ ಸೌಲಭ್ಯ ಕಲ್ಪಿಸಲು ಸರ್ಕಾರ ಬದ್ಧವಾಗಿದ್ದು, ಈ ಸಂಬಂಧ ಜಿಲ್ಲಾ ಪಂಚಾಯ್ತಿ ಹಾಗೂ ಸಂಬಂಧಪಟ್ಟ ಇಲಾಖೆಗಳಿಗೆ ನಿರ್ದೇಶನ ನೀಡಲಾಗುವುದು ಎಂದು ತಿಳಿಸಿದರು.
ಮುಂದಿನ ದಿನಗಳಲ್ಲಿ ರಾಜ್ಯದ ಪ್ರತಿಯೊಂದು ಅಂಗನವಾಡಿಗಳಲ್ಲಿ ಕೂಡ ಶೌಚಾಲಯ ಹಾಗೂ ನೀರಿನ ಸೌಕರ್ಯ ಕಲ್ಪಿಸಲಾಗುವುದು. ನೀರಿನ ಪೂರೈಕೆ ಕೂಡ ಸಮರ್ಪಕವಾಗಿರುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗುವುದು. ಗ್ರಾಮೀಣ ಪ್ರದೇಶಗಳಲ್ಲಿನ ಅಂಗನವಾಡಿಗಳಲ್ಲಿ ಪ್ಯಾಕೇಜ್ ಹಾಗೂ ಶುದ್ಧ ಕುಡಿಯುವ ನೀರು ಒದಗಿಸಲಾಗುವುದು ಎಂದರು.

ವಿವಾದವೇನು?:
ರಾಜ್ಯದಲ್ಲಿ ಸೂಕ್ತ ಅಂಗನವಾಡಿ ಕಟ್ಟಡಗಳಿಲ್ಲ, ಶೌಚಾಲಯ, ಕುಡಿಯುವ ನೀರು ಸೇರಿದಂತೆ ಮೂಲ ಸೌಕರ್ಯಗಳಿಲ್ಲ. ಅಂಗನವಾಡಿ ಕಾರ್ಯಕರ್ತರಿಗೆ ಸೂಕ್ತ ವೇತನ ಹಾಗೂ ಭತ್ಯೆಗಳನ್ನು ನೀಡಲಾಗುತ್ತಿಲ್ಲ.
ಈ ಸಂಬಂಧ ಕಾರ್ಯಕರ್ತರ ಸಂಘ ಸರ್ಕಾರಕ್ಕೆ ಹಲವು ಮನವಿಗಳನ್ನು ಸಲ್ಲಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಮಾಧ್ಯಮಗಳು ವರದಿ ಮಾಡಿದ್ದವು. ವರದಿಗಳ ಆಧಾರದ ಮೇಲೆ ಹೈಕೋರ್ಟ್ ಸ್ವಯಂ ಪ್ರೇರಿತ ಅರ್ಜಿ ದಾಖಲಿಸಿಕೊಂಡಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.