ಪ್ರಧಾನ ಸುದ್ದಿ

ಸಿಬಿಐ ತನಿಖೆ?

Published On :

ಕನ್ನಡಪ್ರಭ ವಾರ್ತೆ  ವಿಧಾನಮಂಡಲ  ಜು. 17
ಮಂಡ್ಯ ಹಾಗೂ ರಾಮನಗರ-ಚನ್ನಪಟ್ಟಣ ನಗರಾಭಿವೃದ್ಧಿ ಪ್ರಾಧಿಕಾರದ ಅವ್ಯವಹಾರದ ತನಿಖೆಯನ್ನು ರಾಜ್ಯ ಸರ್ಕಾರ ಸಿಬಿಐ ತನಿಖೆಗೆ ವಹಿಸುವ ಸಾಧ್ಯತೆ ಇದೆ.
ಎರಡೂ ಪ್ರಾಧಿಕಾರದ ವ್ಯಾಪ್ತಿಯಲ್ಲಿ ನಡೆದ ಹಗರಣಗಳು ರಾಷ್ಟ್ರೀಕೃತ ಬ್ಯಾಂಕ್‌ಗಳಿಗೆ ಸಂಬಂಧಿಸಿದ್ದಾಗಿದೆ. ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ 1 ಕೋಟಿಗಿಂತ ಹೆಚ್ಚಿನ ಅವ್ಯವಹಾರಗಳು ನಡೆದರೆ ಅದನ್ನು ಸಿಬಿಐ ತನಿಖೆಗೆ ಒಳಪಡಿಸಬೇಕು ಎಂಬುದು ರಿಸರ್ವ್ ಬ್ಯಾಂಕ್ ನಿಯಮ. ಮಂಡ್ಯ ಹಾಗೂ ರಾಮನಗರ-ಚನ್ನಪಟ್ಟಣ ನಗರಾಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯಲ್ಲಿ ನಡೆದ ಹಗರಣದ ಮೊತ್ತ 15 ಕೋಟಿ ಮೀರಿರುವುದರಿಂದ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವ ಸಾಧ್ಯತೆ ಹೆಚ್ಚಾಗಿದೆ. ಇದಕ್ಕೆ ಪೂರಕವಾಗಿ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲು ಪರಿಶೀಲಿಸಲಾಗುತ್ತಿದೆ ಎಂದು ನಗರಾಭಿವೃದ್ಧಿ ಸಚಿವ ವಿನಯ ಕುಮಾರ್ ಸೊರಕೆ ಹೇಳಿದ್ದಾರೆ.
'ರಾ-ಚ ಪ್ರಾಧಿಕಾರಕ್ಕೂ ಪಂಗನಾಮ'ಎಂಬ ಶೀರ್ಷಿಕೆಯಲ್ಲಿ ಬುಧವಾರ 'ಕನ್ನಡಪ್ರಭ' ಸಂಚಿಕೆಯಲ್ಲಿ ವರದಿ ಪ್ರಟವಾಗಿತ್ತು. ಇದನ್ನು ಆಧರಿಸಿ ಉಭಯ ಸದನಗಳ ಶೂನ್ಯವೇಳೆಯ ಸಂದರ್ಭದಲ್ಲಿ ವಿಷಯ ಪ್ರಸ್ತಾಪವಾಯಿತು.
ಈ ಕುರಿತಂತೆ ಪ್ರತಿಕ್ರಿಯೆ ನೀಡಿದ ಸಚಿವ ವಿನಯ ಕುಮಾರ್ ಸೊರಕೆ, ರಾಮನಗರ-ಚನ್ನಪಟ್ಟಣ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳಿಂದ ವರದಿ ತರಿಸಿಕೊಳ್ಳಲಾಗಿದೆ. ಇನ್ನೊಂದೆಡೆ ಈ ಕುರಿತ ತನಿಖೆ ವಿಚಾರದಲ್ಲಿ ಸಿಬಿಐ ಕೂಡ ರಾಜ್ಯ ಸರ್ಕಾರವನ್ನು ಸಂಪರ್ಕಿಸಿದೆ. ಈ ಎರಡು ಪ್ರಕರಣಗಳಲ್ಲಿ ಅಲಹಾಬಾದ್ ಬ್ಯಾಂಕ್, ವಿಜಯಾ ಬ್ಯಾಂಕ್ ಮತ್ತು ಇಂಡಿಯನ್ ಬ್ಯಾಂಕ್‌ಗಳ ಹೆಸರು ಬಂದಿರುವುದರಿಂದ ತನಿಖೆಯನ್ನು ಸಿಬಿಐಗೆ ವಹಿಸುವ ಬಗ್ಗೆ ಪರಿಶೀಲಿಸಲಾಗುತ್ತಿದೆ ಎಂದು ತಿಳಿಸಿದರು.
ಇದಕ್ಕೂ ಮುನ್ನ ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಪ್ರತಿಪಕ್ಷ ನಾಯಕ ಎಚ್.ಡಿ. ಕುಮಾರಸ್ವಾಮಿ ಹಾಗೂ ವಿಧಾನಪರಿಷತ್‌ನಲ್ಲಿ ಪುಟ್ಟಣ್ಣ, ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ 5 ಕೋಟಿ ದುರುಪಯೋಗ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ ರಾಮನಗರ-ಚನ್ನಪಟ್ಟಣ ಅಭಿವೃದ್ಧಿ ಪ್ರಾಧಿಕಾರದಲ್ಲೂ 9.99 ಕೋಟಿ ದುರುಪಯೋಗವಾಗಿದೆ. ಪ್ರಾಧಿಕಾರಕ್ಕೆ ಸೇರಿದ 9.99 ಕೋಟಿ ಹಣವನ್ನು ವಿಜಯಾ ಬ್ಯಾಂಕ್‌ನಲ್ಲಿ ಠೇವಣಿ ಇಡಲಾಗಿತ್ತು. ಆದರೆ, ನಂತರದಲ್ಲಿ ಇಂಡಿಯನ್ ಬ್ಯಾಂಕ್ ಹೆಸರಿನಲ್ಲಿ ಪ್ರಾಧಿಕಾರವನ್ನು ಸಂಪರ್ಕಿಸಿದ ವಂಚಕರ ಜಾಲ, ಎಸ್‌ಬಿ ಪ್ಲಾಟಿನಂ ಖಾತೆಯಲ್ಲಿ ಹೆಚ್ಚು ಬಡ್ಡಿ ನೀಡುತ್ತೇವೆ ಎಂದು ಹೇಳಿ ವಿಜಯಾ ಬ್ಯಾಂಕ್‌ನಲ್ಲಿದ್ದ 9.99 ಕೋಟಿ ಹಾಗೂ ಮಲ್ಲೇಶ್ವರದ ಐಸಿಐಸಿಐ ಬ್ಯಾಕ್‌ನಲ್ಲಿದ್ದ 40 ಲಕ್ಷವನ್ನು ತೆಗೆದುಕೊಂಡಿದ್ದಾರೆ. ನಂತರ ಈ ಬಗ್ಗೆ ಮಂಡ್ಯದ ಇಂಡಿಯನ್ ಬ್ಯಾಂಕ್‌ನವರನ್ನು ಸಂಪರ್ಕಿಸಿದಾಗ ಅಂತಹ ಯಾವುದೇ ಹಣ ಬಂದಿಲ್ಲ ಎಂದು ತಿಳಿದುಬಂದಿದೆ ಎಂದು ವಿವರಿಸಿದರು.

ಒಂದು ಕೋಟಿಗಿಂತ ಹೆಚ್ಚು ಅವ್ಯವಹಾರ ನಡೆದಿದ್ದರೆ ಸಿಬಿಐ ತನಿಖೆಯಾಗಬೇಕು ಎಂಬ ಆರ್‌ಬಿಐ ನಿಯಮವಿದೆ. ಹೀಗಾಗಿ ಸಿಐಡಿ ಪ್ರಕರಣದಿಂದ ಹೆಚ್ಚು ಪ್ರಯೋಜನವಿಲ್ಲ. ಈ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ಆಗ್ರಹಿಸುತ್ತಿದ್ದೇನೆ.
 ಕುಮಾರಸ್ವಾಮಿ, ಮಾಜಿ ಸಿಎಂ

ಎಚ್‌ಡಿಕೆ ವಿವಾದ
ಈ ಮಧ್ಯೆ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಲೆಲ್ಲಾ ಇಂತಹ ವಂಚನೆ ಪ್ರಕರಣಗಳು ಕಾಣಿಸಿಕೊಳ್ಳುತ್ತವೆ. ಈಗ ನಗರಾಭಿವೃದ್ಧಿ ಪ್ರಾಧಿಕಾರದ ಹಗರಣ, 2000ದಲ್ಲಿ ತೆಲಗಿ ಪ್ರಕರಣ ನಡೆಯಿತು ಎಂದು ಕುಮಾರಸ್ವಾಮಿ ಅವರು ಹೇಳಿದ ಮಾತು ವಿವಾದಕ್ಕೆ ಕಾರಣವಾಯಿತು. ಆಡಳಿತ ಸದಸ್ಯರು ಈ ಮಾತಿಗೆ ಆಕ್ಷೇಪ ವ್ಯಕ್ತಪಡಿಸಿದರು. ಗೃಹ ಸಚಿವ ಕೆ.ಜೆ. ಜಾರ್ಜ್ ಮಾತನಾಡಿ, ವಿನಾ ಕಾರಣ ಕಾಂಗ್ರೆಸ್ ಮೇಲೆ ಗೂಬೆ ಕೂರಿಸುವುದು ಸರಿಯಲ್ಲ. ಬೇರೆ ಸರ್ಕಾರ ಇದ್ದಾಗ ಇಂತಹ ಪ್ರಕರಣಗಳು ನಡೆದಿಲ್ಲವೇ? ತೆಲಗಿ ಹಗರಣ ನಡೆದಿದ್ದು ಯಾರ ಅವಧಿಯಲ್ಲಿ ಎಂಬುದನ್ನು ಮೊದಲು ತಿಳಿದುಕೊಳ್ಳಿ ಎಂದು ಹೇಳಿದರು. ಇದಕ್ಕೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಹಗರಣಗಳು ಹೊರಬರುತ್ತವೆ ಎಂದು ಹೇಳಿದೆ. ಕಾಂಗ್ರೆಸ್ ಹಗರಣ ಮಾಡಿದೆ ಎಂದು ಹೇಳಿಲ್ಲ ಎಂದಾಗ ಮಧ್ಯೆ ಪ್ರವೇಶಿಸಿದ ಸಚಿವರು, ಯಾರೇ ತಪ್ಪು ಮಾಡಲಿ. ಅವರಿಗೆ ಶಿಕ್ಷೆ ವಿಧಿಸುವಂತೆ ನೋಡಿಕೊಳ್ಳಲಾಗುವುದು ಎಂದು ಹೇಳಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.