ಪ್ರಧಾನ ಸುದ್ದಿ

ಮಳೆಯಾಟವಯ್ಯಾ

ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಮಳೆ ಆರ್ಭಟ ಮುಂದುವರಿದಿದ್ದು ಇಬ್ಬರು ಮೃತಪಟ್ಟಿದ್ದಾರೆ. ಮಹಾರಾಷ್ಟ್ರದಲ್ಲಿ ಧಾರಾಕಾರ ಮಳೆ...

ಮಳೆಯಾಟವಯ್ಯಾ
Published On :

ಕನ್ನಡಪ್ರಭ ವಾರ್ತೆ   ಬೆಂಗಳೂರು   ಜು.20
ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಮಳೆ ಆರ್ಭಟ ಮುಂದುವರಿದಿದ್ದು ಇಬ್ಬರು ಮೃತಪಟ್ಟಿದ್ದಾರೆ. ಮಹಾರಾಷ್ಟ್ರದಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವುದರಿಂದ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ 8 ಸೇತುವೆಗಳು ಮುಳುಗಡೆಯಾಗಿದ್ದು ಸಂಪರ್ಕ ಕಡಿತಗೊಂಡಿದೆ. ವಿವಿಧೆಡೆ ಅಪಾರ ಪ್ರಮಾಣದ ಆಸ್ತಿಪಾಸ್ತಿ ಹಾನಿಯಾಗಿದ್ದು, ಜನಜೀವನ ತತ್ತರಿಸಿದೆ.
ಮಹಾರಾಷ್ಟ್ರದ ಕೋಯ್ನಾ ಸುತ್ತಮುತ್ತ ಹಾಗೂ ಖಾನಾಪುರ ತಾಲೂಕಿನಾದ್ಯಂತ ಧಾರಾಕಾರ ಮಳೆ ಸುರಿಯುತ್ತಿರುವುದರಿಂದ ಕೃಷ್ಣಾ ಹಾಗೂ ಮಲಪ್ರಭಾ ನದಿಗೆ ಭಾರಿ ಪ್ರಮಾಣದ ನೀರು ಹರಿದು ಬರುತ್ತಿರುವುದರಿಂದ 8 ಸೇತುವೆಗಳು ಮುಳುಗಡೆಯಾಗಿವೆ. ದೂಧಗಂಗಾ, ರಾಜಾಪುರ ಬ್ಯಾರೇಜ್‌ನಿಂದ 76 ಸಾವಿರ ಕ್ಯುಸೆಕ್ ನೀರು ಬಿಟ್ಟಿರುವುದರಿಂದ ಚಿಕ್ಕೋಡಿ ತಾಲೂಕು ವ್ಯಾಪ್ತಿಯ ಸದಲಗಾ-ಬೋರಗಾಂವ, ಜತ್ರಾಟ-ಭೀವಶಿ, ಕಲ್ಲೋಳ-ಯಡೂರು, ಅಕ್ಕೋಳ- ಸಿದ್ನಾಳ, ಕಾರದಾಗ-ಭೋಜ, ಭೋಜವಾಡಿ- ಕುನ್ನೂರ, ಮತ್ತು ಮಲಿಕವಾಡ-ದತ್ತವಾಡ ಸೇತುವೆಗಳಲ್ಲಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು 14 ಗ್ರಾಮಗಳ ಸಂಪರ್ಕ ಕಡಿತಗೊಂಡಿದೆ. ಖಾನಾಪುರ ತಾಲೂಕಿನಲ್ಲೂ ಮಲಪ್ರಭಾ ಅಬ್ಬರಿಸುತ್ತಿದ್ದು ನಗರದ ಹೊರವಲಯದ ಹಳೆ ಸೇತುವೆ ಮುಳುಗಡೆಯಾಗಿದೆ.
ಕೃಷ್ಣಾ ನದಿಗೆ ಭಾರಿ ಪ್ರಮಾಣದ ನೀರು ಹರಿದು ಬರುತ್ತಿದ್ದು ಹಿಪ್ಪರಗಿ ಬ್ಯಾರೇಜ್‌ನಿಂದ 91402 ಕ್ಯುಸೆಕ್ ನೀರು ಬಿಡುಗಡೆ ಮಾಡಿದ್ದರಿಂದ ಜಮಖಂಡಿ ತಾಲೂಕಿನ 27 ಗ್ರಾಮಗಳಿಗೆ ಪ್ರವಾಹ ಭೀತಿ ಎದುರಾಗಿದೆ. ಆಲಮಟ್ಟಿ ಜಲಾಶಯದ 11 ಗೇಟ್‌ಗಳ ಮೂಲಕ ನೀರು ಹೊರ ಬಿಡಲಾಗುತ್ತಿದ್ದು ತೀರ ಪ್ರದೇಶದ ಜನತೆಗೆ ಪ್ರವಾಹದ ಮುನ್ನೆಚ್ಚರಿಕೆ ನೀಡಲಾಗಿದೆ. ಯಾದಗಿರಿ ಜಿಲ್ಲೆಯ ನಾರಾಯಣಪುರದ ಬಸವಸಾಗರ ಜಲಾಶಯ ಭರ್ತಿಯಾಗಿದ್ದು 18 ಗೇಟ್‌ಗಳ ಮೂಲಕ 1.10 ಲಕ್ಷ ಕ್ಯುಸೆಕ್ ನೀರನ್ನು ಕೃಷ್ಣಾ ನದಿಗೆ ಬಿಡಲಾಗುತ್ತಿದೆ. ತುಂಗಭದ್ರಾ ಜಲಾಶಯಕ್ಕೂ ಭಾರಿ ಪ್ರಮಾಣದ ನೀರು ಹರಿದು ಬರುತ್ತಿದ್ದು ನೀರಿನ ಮಟ್ಟ 1628.51 ಅಡಿಗೆ ತಲುಪಿದೆ.
ಇಬ್ಬರು ಬಲಿ: ಚನ್ನಗಿರಿ ತಾಲೂಕಿನಲ್ಲಿ ಕಳೆದೊಂದು ವಾರದಿಂದ ನಿತಂತರವಾಗಿ ಮಳೆ ಸುರಿಯುತ್ತಿರುವುದರಿಂದ ಮನೆ ಗೋಡೆ ಕುಸಿದು ಕರಿಯಮ್ಮ (45) ಮೃತಪಟ್ಟಿದ್ದಾಳೆ. ಸಕಲೇಶಪುರ ತಾಲೂಕಿನ ಕ್ಯಾಮನಹಳ್ಳಿ ಗ್ರಾಮದ ಸಮೀಪ ಎತ್ತಿನಹೊಳೆ ದಾಟುತ್ತಿದ್ದ ವೇಳೆ ಮಹಿಳೆಯೊಬ್ಬರು ಕೊಚ್ಚಿ ಹೋಗಿದ್ದು ಇದುವರೆಗೂ ಮೃತದೇಹ ಪತ್ತೆಯಾಗಿಲ್ಲ. ಮಲೆನಾಡು ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು ಪ್ರಮುಖ ನದಿಗಳು ಉಕ್ಕಿ ಹರಿಯುತ್ತಿವೆ. ತುಂಗಾ, ಶರಾವತಿ ನದಿ ತೀರ ಪ್ರದೇಶಗಳಲ್ಲಿ ಪ್ರವಾಹ ಭೀತಿ ಎದುರಾಗಿದೆ. ಚಿಕ್ಕಮಗಳೂರು ಜಿಲ್ಲಾದ್ಯಂತ ಭಾರಿ ಮಳೆಯಾಗುತ್ತಿರುವುದರಿಂದ ಭದ್ರಾ, ಹೇಮಾವತಿ ನದಿಗಳು ತುಂಬಿ ಹರಿಯುತ್ತಿದ್ದು ಕೆಲವೆಡೆ ಸಂಪರ್ಕ ಕಡಿತಗೊಂಡಿದೆ. ತೀರ ಪ್ರದೇಶದಲ್ಲಿ ಪ್ರವಾಹ ಭೀತಿ ಎದುರಾಗಿದೆ. ಕೆಳಂಗಾಡಿ ಗ್ರಾಮಗದ 8 ಎಕರೆ ಜಮೀನು ಜಲಾವೃತವಾಗಿದೆ.


ಮುಳುಗಿದ ಸ್ನಾನಘಟ್ಟ
ದಕ್ಷಿಣ ಕೊಡಗಿನಲ್ಲಿ ಲಕ್ಷಣತೀರ್ಥ ಪ್ರವಾಹದಿಂದ ನಿಟ್ಟೂರು ಗ್ರಾಮ ಜಲಾವೃತಗೊಂಡಿದೆ. 2 ಸಾವಿರ ಜನ ಭಯಭೀತರಾಗಿದ್ದಾರೆ. ಮಲ್ಲೂರು, ಜಾಗಲೆಯ ಸೇತುವೆಗಳು ಮುಳುಗಡೆಯಾಗಿದ್ದು, ಬಾಳೆಲೆ ವ್ಯಾಪ್ತಿಯಲ್ಲಿ ಪ್ರವಾಹ ಭೀತಿ ಎದುರಾಗಿದೆ. ಸುಬ್ರಹ್ಮಣ್ಯ ಭಾಗದಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ಕುಮಾರಧಾರಾ ಸೇತುವೆ ಮೇಲೆ ಉಕ್ಕಿ ಹರಿಯುತ್ತಿದೆ. ಸ್ನಾನಘಟ್ಟ ಸಂಪೂರ್ಣ ಮುಳುಗಡೆಯಾಗಿದೆ. ಮಡಿಕೇರಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗುತ್ತಿದ್ದು ಉಳ್ಳಾಲ ಪ್ರದೇಶದಲ್ಲಿ ಕಡಲ್ಕೊರೆತ ಉಂಟಾಗಿದೆ.



ದೇಶಾದ್ಯಂತ ಮಳೆ ಅಬ್ಬರ
ನವದೆಹಲಿ/ಭುವನೇಶ್ವರ: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದೆ. ಹೀಗಾಗಿ, ದಕ್ಷಿಣ ಆಂಧ್ರಪ್ರದೇಶ, ತಮಿಳುನಾಡಿನ ಉತ್ತರ ಭಾಗಗಳು ಮತ್ತು ಕರ್ನಾಟಕದಲ್ಲಿ ಮುಂದಿನ 72 ಗಂಟೆಗಳಲ್ಲಿ  ಮಳೆಯಾಗುವ ಸಾಧ್ಯತೆ ಇದೆ. ನವದೆಹಲಿ ಸೇರಿದಂತೆ ದೇಶಾದ್ಯಂತ ಮಳೆ ಜನಜೀವನಕ್ಕೆ ತೊಂದರೆ ಉಂಟು ಮಾಡಿದೆ. ನವದೆಹಲಿಯಲ್ಲಿ ಸುರಿದ ಭಾರಿ ಮಳೆಯಿಂದಾಗಿ ಹೆಚ್ಚಿನ ರಸ್ತೆಗಳಲ್ಲಿ ನೀರು ನಿಂತು ವಾಹನ ಸಂಚಾರಕ್ಕೆ ಅಡ್ಡಿ ಉಂಟಾಯಿತು. ಉತ್ತರಾಖಂಡದಲ್ಲಿ ಕೂಡ ಧಾರಾಕಾರ ಮಳೆಯಾಗುತ್ತಿದೆ. ಹೀಗಾಗಿ, ಪ್ರವಾಹ ಪೀಡಿತ ರಾಜ್ಯದಲ್ಲಿ ಮತ್ತಷ್ಟು ಸಂಕಷ್ಟ ಉಂಟಾಗಿದೆ. ಸಂತ್ರಸ್ಥ ಪ್ರದೇಶಗಳಲ್ಲಿ ಪರಿಹಾರ ಕಾರ್ಯಾಚರಣೆಗೆ ಅಡ್ಡಿ ಉಂಟಾಗಿದೆ. ಮುಂಬೈನಲ್ಲಿ ಸತತ 2ನೇ ದಿನವಾದ ಶನಿವಾರ ಕೂಡ ಧಾರಾಕಾರ ಮಳೆಯಾಗಿದೆ. ಹರ್ಯಾಣದ ಹೆಚ್ಚಿನ ಭಾಗದಲ್ಲಿ ಮತ್ತು ಪಂಜಾಬ್‌ನ ಕೆಲ ಪ್ರದೇಶಗಳಲ್ಲಿ ಮಳೆಯಾಗಿದೆ. ಹೀಗಾಗಿ, ಬಿಸಿಲಿನ ತಾಪದಿಂದ ಕಂಗೆಟ್ಟಿದ್ದ ಜನರು ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.