ಅಪಘಾತಕ್ಕೆ 18 ಬಲಿ
ಕನ್ನಡಪ್ರಭ ವಾರ್ತೆ, ಸಿಂದಗಿ, ಜು.22-
ಬಿಜಾಪುರ ಜಿಲ್ಲೆಯ ಸಿಂದಗಿ ಪಟ್ಟಣದ ಸಮೀಪದ ಚಿಕ್ಕಸಿಂದಗಿ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 218ರಲ್ಲಿ ಖಾಸಗಿ ಬಸ್ ಮತ್ತು ಕ್ರೂಸರ್ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಬಾಲಕಿ ಸೇರಿದಂತೆ 18 ಜನ ಮೃತಪಟ್ಟ ಘಟನೆ ಸೋಮವಾರ ನಡೆದಿದೆ.
ಬಿಜಾಪುರದಿಂದ ಗುಲ್ಬರ್ಗಕ್ಕೆ ಹೊರಟಿದ್ದ ಎಂ.ಆರ್. ಟ್ರಾವೆಲ್ಸ್ಗೆ ಸೇರಿದ ಖಾಸಗಿ ಬಸ್ ಗಾಣಗಾಪುರದಿಂದ ಮಹಾರಾಷ್ಟ್ರದ ಸಾಂಗ್ಲಿಗೆ ಹೊರಟಿದ್ದ ಕ್ರೂಸರ್ ವಾಹನಕ್ಕೆ ಮುಖಾಮುಖಿ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಕ್ರೂಸರ್ನಲ್ಲಿದ್ದ 16 ಜನ ಸ್ಥಳದಲ್ಲಿಯೇ ಮೃತಪಟ್ಟಿದ್ದರೆ, ಒಬ್ಬ ಸಿಂದಗಿ ಸರ್ಕಾರಿ ಆಸ್ಪತ್ರೆ ಹಾಗೂ ಇನ್ನೊಬ್ಬ ಬಿಜಾಪುರ ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಗಂಭೀರವಾಗಿ ಗಾಯಗೊಂಡಿರುವ ಇಬ್ಬರ ಸ್ಥಿತಿ ಚಿಂತಾಜನಕವಾಗಿದ್ದು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಮೃತರೆಲ್ಲರೂ ಸಂಬಂಧಿಕರು. ಕ್ರೂಸರ್ ವಾಹನ ಸಂಪೂರ್ಣ ನುಜ್ಜುಗುಜ್ಜಾಗಿದ್ದು ವಾಹನದಲ್ಲಿದ್ದ ಶವಗಳನ್ನು ಹೊರ ತೆಗೆಯಲು ಪೊಲೀಸರು ಹರಸಾಹಸ ಪಡಬೇಕಾಯಿತು.
ಯಾತ್ರಾಸ್ಥಳಕ್ಕೆ ಹೊರಟಿದ್ದರು: ಕ್ರೂಸರ್ನಲ್ಲಿದ್ದ 20 ಜನ ಪ್ರಯಾಣಿಕರು ಮಹಾರಾಷ್ಟ್ರದ ಸಾಂಗ್ಲಿ ಬಳಿಯ ಟಕಳಾಪುರ ಹಾಗೂ ಸುತ್ತಮುತ್ತಲಿನ ಗ್ರಾಮದವರು ಎನ್ನಲಾಗಿದೆ. ಇವರೆಲ್ಲರೂ ಭಾನುವಾರ ಗುಲ್ಬರ್ಗ ಜಿಲ್ಲೆಯ ಪ್ರಸಿದ್ಧ ಯಾತ್ರಾಸ್ಥಳ ಗಾಣಗಾಪುರದ ದತ್ತಾತ್ರೇಯ ದೇವರ ದರ್ಶನಕ್ಕೆ ಆಗಮಿಸಿ ಅಲ್ಲಿಯೇ ತಂಗಿದ್ದರು. ಸೋಮವಾರ ಮರಳಿ ತಮ್ಮೂರಿಗೆ ಹೊರಟಾಗ ಈ ದುರ್ಘಟನೆ ಸಂಭವಿಸಿದೆ.
ಅಪಘಾತದಲ್ಲಿ ಖಾಸಗಿ ಬಸ್ನ ಮುಂಭಾಗ ಜಖಂಗೊಂಡಿದ್ದು, ಕೆಲವು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಮೃತಪಟ್ಟವರಲ್ಲಿ 13 ಜನ ಪುರುಷರು, ಮೂವರು ಮಹಿಳೆಯರು ಹಾಗೂ ಒಂದು ಹೆಣ್ಣು ಮಗು ಸೇರಿದೆ. ಅಪಘಾತದ ರಭಸಕ್ಕೆ ಮೃತದೇಹಗಳು ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದು ಪರಿಸ್ಥಿತಿಯ ಭೀಕರತೆಗೆ ಸಾಕ್ಷಿಯಾಗಿತ್ತು.
ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಜಯ ಹಿಲೋರಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಫ್.ಎ. ಟ್ರಾಸ್ಗರ್ ಮತ್ತು ಡಿವೈಎಸ್ಪಿ ಎಸ್. ಮಹೇಶ್ವರಪ್ಪ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಸಿಂದಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಏಲ್ಲಿ?
ಬಿಜಾಪುರ ಜಿಲ್ಲೆಯ ಸಿಂದಗಿ ಪಟ್ಟಣದ ಸಮೀಪದ ಚಿಕ್ಕಸಿಂದಗಿ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 218ರಲ್ಲಿ.
ಯಾವಾಗ?
ಸೋಮವಾರ ಮಧ್ಯಾಹ್ನ 3.30ರ ಸುಮಾರಿಗೆ.
ಹೇಗೆ?
ಬಿಜಾಪುರದಿಂದ ಗುಲ್ಬರ್ಗಕ್ಕೆ ಹೊರಟಿದ್ದ ಖಾಸಗಿ ಬಸ್ ಹಾಗೂ ಗಾಣಗಾಪುರದಿಂದ ಸಾಂಗ್ಲಿಗೆ ಹೊರಟಿದ್ದ ಕ್ರೂಸರ್ಗೆ ಡಿಕ್ಕಿ
ಏನಾಯ್ತು?
ಸ್ಥಳದಲ್ಲೇ 16 ಜನ ಮೃತಪಟ್ಟರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಇಬ್ಬರು ಕೊನೆಯುಸಿರೆಳೆದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

