ಬಿಎಸ್ವೈ ಮರಳಿ ಬರಲಿ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಪಕ್ಷಕ್ಕೆ ಕರೆತರುವ ಬಗ್ಗೆ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಸೋಮವಾರ ಒಕ್ಕೊರಲ ಒತ್ತಾಯ ಕೇಳಿಬಂದಿದೆ. ಇದರಿಂದಾಗಿ ಯಡಿಯೂರಪ್ಪ ಅವರನ್ನು ಮರಳಿ ಬಿಜೆಪಿಗೆ ಕರೆತರುವ ಬಗ್ಗೆ ನಡೆಯುತ್ತಿದ್ದ ಪ್ರಯತ್ನಗಳಿಗೆ ಶಾಸಕಾಂಗ ಪಕ್ಷವೂ ಒಪ್ಪಿದಂತಾಗಿದ್ದು, ಮುಂದಿನ ನಿರ್ಧಾರವನ್ನು ರಾಜ್ಯ ನಾಯಕರಿಗೆ ಬಿಟ್ಟುಕೊಡಲಾಗಿದೆ.
ಲೋಕಸಭೆ ಮತ್ತು ವಿಧಾನ ಪರಿಷತ್ ಉಪ ಚುನಾವಣೆ, ವಿಧಾನ ಮಂಡಲದ ಅಧಿವೇಶನ ನಡೆಯುತ್ತಿರುವ ಕುರಿತು ಚರ್ಚಿಸಲು ಸೋಮವಾರ ಕರೆಯಲಾಗಿದ್ದ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಯಡಿಯೂರಪ್ಪ ಅವರನ್ನು ಕರೆತರುವ ಪ್ರಯತ್ನದ ಸಭೆಯಾಗಿ ಮಾರ್ಪಟ್ಟಿತು.
ಲೋಕಸಭೆ ಮತ್ತು ವಿಧಾನ ಪರಿಷತ್ ಉಪ ಚುನಾವಣೆಗೆ ಕೈಗೊಳ್ಳಬೇಕಾದ ಸಿದ್ಧತೆಗಳ ಬಗ್ಗೆ ಚರ್ಚೆ ಆರಂಭವಾಗುತ್ತಿದ್ದಂತೆ ಕೆಲವು ಶಾಸಕರು ಯಡಿಯೂರಪ್ಪ ಅವರನ್ನು ಪಕ್ಷಕ್ಕೆ ಮರಳಿ ಕರೆತರುವ ಬಗ್ಗೆ ಪ್ರಸ್ತಾಪಿಸಿದರು. ವೇದಿಕೆ ಮೇಲಿದ್ದ ನಾಯಕರನ್ನು ಹೊರತುಪಡಿಸಿ ಸಭೆಯಲ್ಲಿದ್ದ ಶಾಸಕರೆಲ್ಲರೂ ಇದಕ್ಕೆ ಒಕ್ಕೊರಲ ಬೆಂಬಲ ವ್ಯಕ್ತಪಡಿಸಿದರು.
ವಿಳಂಬ ಸಲ್ಲ: ಚುನಾವಣೆ ಸಮೀಪಿಸುವ ಸಂದರ್ಭದಲ್ಲಿ ಯಡಿಯೂರಪ್ಪ ಅವರನ್ನು ಪಕ್ಷಕ್ಕೆ ಕರೆಸಿಕೊಳ್ಳುವ ಪ್ರಯತ್ನ ಆರಂಭವಾದರೆ ಅದಕ್ಕೆ ಅವರಿಂದ ಸೂಕ್ತ ಪ್ರತಿಕ್ರಿಯೆ ಬರುತ್ತದೆ ಎಂಬ ನಿರೀಕ್ಷೆಯಿಲ್ಲ. ಮೇಲಾಗಿ ಅದರಿಂದ ಚುನಾವಣೆಯಲ್ಲಿ ಹೆಚ್ಚು ಲಾಭವಾಗುವ ಸಾಧ್ಯತೆಯೂ ಇಲ್ಲ. ಆದ್ದರಿಂದ ಈಗಲೇ ಅವರನ್ನು ಪಕ್ಷಕ್ಕೆ ಆಹ್ವಾನಿಸಬೇಕು. ಅವರ ಜತೆ ಸೇರಿಕೊಂಡೇ ಲೋಕಸಭೆ ಚುನಾವಣೆಗೆ ಸಿದ್ಧರಾಗಬೇಕು ಎಂದು ಬಹುತೇಕ ಶಾಸಕರು ಪ್ರತಿಪಾದಿಸಿದರು. ಯಡಿಯೂರಪ್ಪ ಪಕ್ಷ ತೊರೆದಿದ್ದರಿಂದ ರಾಜ್ಯದಲ್ಲಿ ಬಿಜೆಪಿಗೆ ಯಾವ ಪರಿಸ್ಥಿತಿ ಬಂತು ಎಂಬುದನ್ನು ಮೊದಲು ಯೋಚಿಸಿ. ಅಧಿಕಾರದಲ್ಲಿದ್ದ ಪಕ್ಷಕ್ಕೆ ಅಧಿಕೃತ ಪ್ರತಿಪಕ್ಷವಾಗಲು ಕೂಡ ಸಾಧ್ಯವಾಗಲಿಲ್ಲ. ಹೀಗಾಗಿ ಎಲ್ಲ ನಾಯಕರು ತಮ್ಮ ವೈಯಕ್ತಿಕ ಪ್ರತಿಷ್ಠೆ ಬಿಟ್ಟು ರಾಜ್ಯದಲ್ಲಿ ಪಕ್ಷ ಬಲಪಡಿಸುವ ಬಗ್ಗೆ ಯೋಚನೆ ಮಾಡಿ ಎಂದು ನಾಯಕರನ್ನು ಒತ್ತಾಯಿಸಿದರು.
ಅನಂತ್ ನಾಯಕತ್ವ ವಹಿಸಲು ಒತ್ತಾಯ: ವೇದಿಕೆ ಮೇಲಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ ಜೋಶಿ, ಸಂಸದ ಅನಂತಕುಮಾರ್, ಮಾಜಿ ಮುಖ್ಯಮಂತ್ರಿಗಳಾದ ಜಗದೀಶ್ ಶೆಟ್ಟರ್, ಸದಾನಂದಗೌಡ ಮತ್ತಿತರರು ಇದಕ್ಕೆ ಯಾವುದೇ ಪ್ರತಿಕ್ರಿಯೆ ವ್ಯಕ್ತಪಡಿಸದೆ ಮೌನವಾಗಿದ್ದರು.
ಇದನ್ನು ಗಮನಿಸಿದ ಮೂರ್ನಾಲ್ಕು ಶಾಸಕರು ಸಂಸದ ಅನಂತಕುಮಾರ್ ಅವರನ್ನು ಕುರಿತು, ಈ ಕೆಲಸ ಸುಗಮವಾಗಿ ಆಗಬೇಕಾದರೆ ನಿಮ್ಮಿಂದಲೇ ಆಗಬೇಕು. ನೀವೇ ನಾಯಕತ್ವ ವಹಿಸಿ ಯಡಿಯೂರಪ್ಪ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಬೇಕು. ಹಾಗಾದರೆ ಮುಂದಿನ ದಿನಗಳಲ್ಲಿ ಪಕ್ಷ ಇನ್ನಷ್ಟು ಬಲಿಷ್ಠವಾಗುತ್ತದೆ ಎಂದು ಒತ್ತಾಯಿಸಿದರು.
ಸದ್ಯದಲ್ಲೇ ಎರಡು ಲೋಕಸಭೆ ಕ್ಷೇತ್ರಗಳ ಉಪಚುನಾವಣೆ ಇದೆ. ಇದಾದ ಬಳಿಕ ಯಾವ ಸಂದರ್ಭದಲ್ಲಿ ಲೋಕಸಭೆಗೆ ಸಾರ್ವತ್ರಿಕ ಚುನಾವಣೆ ಎದುರಾಗುತ್ತದೆ ಎಂದು ಹೇಳಲು ಸಾಧ್ಯವಿಲ್ಲ. ಆದ್ದರಿಂದ ಉಪ ಚುನಾವಣೆಗೆ ಮುನ್ನವೇ ಯಡಿಯೂರಪ್ಪ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವ ಬಗ್ಗೆ ನಿರ್ಧಾರಕ್ಕೆ ಬನ್ನಿ. ಅವರ ಕೆಜೆಪಿಯಿಂದ ಅಭ್ಯರ್ಥಿಗಳನ್ನು ಕಣಕ್ಕಿಳಿಸದಂತೆ ನೋಡಿಕೊಳ್ಳಿ ಎಂದು ಆಗ್ರಹಿಸಿದರು. ಈ ಎಲ್ಲಾ ಒತ್ತಾಯಗಳನ್ನು ಮೌನದಿಂದಲೇ ಆಲಿಸಿದ ಮುಖಂಡರು ಕೊನೆಗೆ, ಯಡಿಯೂರಪ್ಪ ಅವರು ಮತ್ತೆ ಬಿಜೆಪಿಗೆ ಬರುವುದಕ್ಕೆ ಯಾರ ವಿರೋಧವೂ ಇಲ್ಲ. ರಾಷ್ಟ್ರೀಯ ನಾಯಕರೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಅವರೇ ಹೇಳಿದ್ದಾರೆ. ಹಾಗಾಗಿ ಯಡಿಯೂರಪ್ಪ ಮತ್ತು ರಾಷ್ಟ್ರೀಯ ನಾಯಕರೇ ಈ ಕುರಿತು ತೀರ್ಮಾನ ಕೈಗೊಳ್ಳಬೇಕು. ವರಿಷ್ಠರ ತೀರ್ಮಾನವನ್ನು ನಾವೆಲ್ಲರೂ ಒಪ್ಪಿಕೊಳ್ಳುತ್ತೇವೆ ಎಂದು ಹೇಳಿ ಚರ್ಚೆಗೆ ತೆರೆ ಎಳೆದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


