ಕಾಂಪೌಂಡ್ ಕುಸಿದು 4 ಸಾವು

ಕ.ಪ್ರ. ವಾರ್ತೆ ಬೆಂಗಳೂರು ಜೂ.18-
ಮುಂಗಾರು ಮಳೆ ಅಬ್ಬರಕ್ಕೆ ಉತ್ತರ ಭಾರತ ತತ್ತರಿಸಿದ ಬೆನ್ನಲ್ಲೇ ರಾಜ್ಯದಲ್ಲೂ ವರುಣನ ಆರ್ಭಟ ಜೋರಾಗಿದೆ. ಮಂಗಳವಾರ ಬೆಳಗಿನ ಜಾವ ತಡೆಗೋಡೆಯೊಂದು ಕುಸಿದು ಮನೆ ಮೇಲೆ ಬಿದ್ದ ಪರಿಣಾಮ ನಾಲ್ವರು ಮೃತಪಟ್ಟಿದ್ದಾರೆ. ಅಪಾರ ಪ್ರಮಾಣದ ಆಸ್ತಿಪಾಸ್ತಿ ಹಾನಿಯಾಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.
ಮಂಗಳೂರಿನ ಬಜಪೆ ತೊಟ್ಟಿಲುಗರಿ ಏರುಪ್ರದೇಶದಲ್ಲಿ ನಿರ್ಮಿಸಿದ್ದ ವಾಣಿಜ್ಯ ಮಳಿಗೆಗಳ ತಡೆಗೋಡೆ ಭಾರಿ ಮಳೆಗೆ ಕುಸಿದು ಮನೆ ಮೇಲೆ ಬಿದ್ದ ಪರಿಣಾಮ ಸುಂದರಿ (55), ಸುಂದರ (58), ಚೈತ್ರಾ (18) ಹಾಗೂ ಬೇಬಿ (50) ಮೃತಪಟ್ಟಿದ್ದಾರೆ. ಅಶ್ವಿನಿ (18), ಆಶಾ(30), ಅಶ್ವತ್ಥ್ (10), ಶೇಖರ (35), ಲೀಲಾ (45) ಗಂಭೀರವಾಗಿ ಗಾಯಗೊಂಡಿದ್ದು, ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಶಾ ಎಂಬವರ ಎರಡೂ ಕಾಲುಗಳು ಬಲವಾದ ಏಟು ಬಿದ್ದಿದ್ದರಿಂದ ತುಂಡಾಗಿವೆ.
ಬೆಳಗಿನ ಜಾವ 3.30ರ ಸುಮಾರಿಗೆ ಈ ದುರಂತ ಸಂಭವಿಸಿದೆ. ಬಜಪೆ ಬಸ್ ನಿಲ್ದಾಣ ಹಿಂಭಾಗದಲ್ಲಿ ದಲಿತ ಕಾಲೋನಿ ಇದೆ. ಇಲ್ಲಿನ ಮನೆಗಳ ಮೇಲ್ಭಾಗದ ಪ್ರದೇಶದಲ್ಲಿ ಹೊಟೇಲ್ ಹಾಗೂ ಅಂಗಡಿಗಳಿವೆ. ಅಲ್ಲದೇ ಬೃಹತ್ ವಾಣಿಜ್ಯ ಕಟ್ಟಡ ನಿರ್ಮಾಣಗೊಳ್ಳುತ್ತಿದೆ. ವಾಣಿಜ್ಯ ಕಟ್ಟಡದ ಸುತ್ತಲೂ ಕಟ್ಟಿರುವ ತಡೆಗೋಡೆ ಮನೆಯ ಮೇಲೆ ಕುಸಿದು ಬಿದ್ದಿದ್ದರಿಂದ ಈ ಅವಘಡ ಸಂಭವಿಸಿದೆ.
ವಾಣಿಜ್ಯ ಉದ್ದೇಶಕ್ಕೆ ನಿರ್ಮಿಸಲಾಗುತ್ತಿರುವ ಕಟ್ಟಡ ಕಾನೂನು ಉಲ್ಲಂಘಿಸಿದ್ದರೆ ಸೂಕ್ತ ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿಗಳಿಗೆ ಗೃಹ ಸಚಿವ ಕೆ.ಜೆ.ಜಾರ್ಜ್ ಆದೇಶಿಸಿದ್ದಾರೆ. ಸ್ಥಳಕ್ಕೆ ಉಸ್ತುವಾರಿ ಸಚಿವ ರಮಾನಾಥ ರೈ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಅಲ್ಲದೇ ಮೃತರ ಕುಟುಂಬಗಳಿಗೆ ತಲಾ 1.5 ಲಕ್ಷ ಪರಿಹಾರ ನೀಡುವುದಾಗಿ ಜಿಲ್ಲಾಧಿಕಾರಿ ಎನ್.ಪ್ರಕಾಶ್ ಘೋಷಿಸಿದ್ದಾರೆ. ಮಡಿಕೇರಿ ಸುತ್ತಮುತ್ತ ಭಾರಿ ಮಳೆಯಾಗಿದ್ದು ಹಾರಂಗಿ, ಕೆಆರ್ಎಸ್ ಜಲಾಶಯಕ್ಕೆ ಭಾರಿ ಪ್ರಮಾಣದ ನೀರು ಹರಿದು ಬರುತ್ತಿದೆ. ಬೆಳಗಾವಿ, ಬಿಜಾಪುರ, ಧಾರವಾಡ, ಉತ್ತರ ಕನ್ನಡ ಸೇರಿದಂತೆ ವಿವಿಧೆಡೆ ಧಾರಾಕಾರ ಮಳೆಯಾಗಿದ್ದು ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಹಾಸನ ಜಿಲ್ಲಾದ್ಯಂತ ಉತ್ತಮ ಮಳೆಯಾಗಿದೆ. ಹೇಮಾವತಿ, ಯಗಚಿ, ವಾಟೆಹೊಳೆ ಜಲಾನಯನ ಪ್ರದೇಶಗಳಲ್ಲಿ ಭಾರಿ ಮಳೆಯಾಗಿದ್ದರಿಂದ ಈ ಜಲಾಶಯಗಳಲ್ಲಿ ನೀರಿನ ಸಂಗ್ರಹ ಹೆಚ್ಚಳವಾಗಿದೆ.
ಆಲಮಟ್ಟಿ ಭರ್ತಿಗೆ 12 ಮೀ. ಬಾಕಿ: ಕೃಷ್ಣಾ ಅಚ್ಚುಕಟ್ಟು ಪ್ರದೇಶದಲ್ಲಿ ಭಾರಿ ಮಳೆ ಸುರಿಯುತ್ತಿರುವುದರಿಂದ ಆಲಮಟ್ಟಿಯ ಲಾಲ್ ಬಹದ್ದೂರ ಶಾಸ್ತ್ರಿ ಜಲಾಶಯಕ್ಕೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದೆ. ಮಂಗಳವಾರ ಜಲಾಶಯದಲ್ಲಿ 507.20 ಮೀಟರ್ ನೀರು ಸಂಗ್ರಹವಾಗಿದ್ದು ಭರ್ತಿಯಾಗಲು ಕೇವಲ 12 ಮೀಟರ್ ಬಾಕಿ ಇದೆ. ಆಲಮಟ್ಟಿ ಜಲಾಶಯದ ಎತ್ತರ 519.60 ಮೀಟರ್. ಮಂಗಳವಾರ 17339 ಕ್ಯುಸೆಕ್ ಒಳ ಹರಿವು ಇತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


