ಅಲ್ಪ ಚೇತರಿಕೆ
ಸಾಮೂಹಿಕ ಅತ್ಯಾಚಾರಕ್ಕೊಳಗಾದ ಇಟ್ನಾಳ್ ಗ್ರಾಮದ ಯುವತಿಯ ಆರೋಗ್ಯ ಅಲ್ಪ ಚೇತರಿಕೆಯಾಗಿದ್ದರೂ ಶ್ವಾಸಕೋಶದಲ್ಲಿ ಕಾಣಿಸಿಕೊಂಡ ತೊಂದರೆಯಿಂದ ಹೆಚ್ಚಿನ...

ಕನ್ನಡಪ್ರಭ ವಾರ್ತೆ ಬೆಳಗಾವಿ ಮಾ.2
ಸಾಮೂಹಿಕ ಅತ್ಯಾಚಾರಕ್ಕೊಳಗಾದ ಇಟ್ನಾಳ್ ಗ್ರಾಮದ ಯುವತಿಯ ಆರೋಗ್ಯ ಅಲ್ಪ ಚೇತರಿಕೆಯಾಗಿದ್ದರೂ ಶ್ವಾಸಕೋಶದಲ್ಲಿ ಕಾಣಿಸಿಕೊಂಡ ತೊಂದರೆಯಿಂದ ಹೆಚ್ಚಿನ ಚಿಕಿತ್ಸೆಗಾಗಿ ಬೆಳಗಾವಿಗೆ ಸ್ಥಳಾಂತರಿಸುವುದನ್ನು ಹಠಾತ್ ಸ್ಥಗಿತಗೊಳಿಸಿ ಹಾರೋಗೇರಿ ಆಸ್ಪತ್ರೆಯಲ್ಲೇ ಚಿಕಿತ್ಸೆ ಮುಂದುವರಿಸಲಾಗಿದೆ.
ರಾಯಬಾಗ ತಾಲೂಕಿನ ಹಾರೋಗೇರಿಯ ಸ್ಪಂದನಾ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿರುವ ಯುವತಿಗೆ ಶನಿವಾರ ಎಳನೀರು ಹಾಗೂ ದ್ರವರೂಪದ ಆಹಾರ ನೀಡಲಾಗಿದೆ. ಆಸ್ಪತ್ರೆಗೆ ದಾಖಲಾಗಿದ್ದ ವೇಳೆ ಗಂಭೀರ ಪರಿಸ್ಥಿತಿ ಇತ್ತು. ಈಗ ಚಿಕಿತ್ಸೆಗೆ ಸ್ಪಂದಿಸುತ್ತಿದ್ದು ಆರೋಗ್ಯದಲ್ಲೂ ಸ್ವಲ್ಪ ಮಟ್ಟಿನ ಚೇತರಿಕೆ ಕಂಡುಬಂದಿದೆ ಎಂದು ಆಸ್ಪತ್ರೆಯ ವೈದ್ಯ ಡಾ. ಅಶೋಕ ವೇಲಾಪೂರೆ ತಿಳಿಸಿದ್ದಾರೆ.
ಯುವತಿಗೆ ಶ್ವಾಸಕೋಶದಲ್ಲಿ ತೊಂದರೆ ಕಾಣಿಸಿಕೊಂಡಿತ್ತು. ಉದರ ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಇನ್ನೂ ಅತ್ಯುತ್ತಮ ವೈದ್ಯಕೀಯ ಚಿಕಿತ್ಸೆಗಾಗಿ (ಸ್ಕ್ಯಾನಿಂಗ್, ರಕ್ತ ವರ್ಗೀಕರಣ ಮತ್ತಿತರ ಅತ್ಯಾಧುನಿಕ ಸೌಲಭ್ಯವಿರುವ) ಬೆಳಗಾವಿ ಜಿಲ್ಲಾಸ್ಪತ್ರೆ ಅಥವಾ ಕೆಎಲ್ಇ ಆಸ್ಪತ್ರೆಗೆ ಕರೆದೊಯ್ಯಲು ಚಿಂತನೆ ನಡೆಸಲಾಗಿತ್ತು. ಅದಕ್ಕಾಗಿ ಆ್ಯಂಬುಲೆನ್ಸ್ ಸಹ ಸಿದ್ಧ ಮಾಡಲಾಗಿತ್ತು. ಆದರೆ, ಕೊನೆ ಗಳಿಗೆಯಲ್ಲಿ ಉಸಿರಾಟದ ತೊಂದರೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಹಠಾತ್ ರದ್ದುಗೊಳಿಸಿ ಹಾರೋಗೇರಿ ಆಸ್ಪತ್ರೆಯಲ್ಲೇ ಚಿಕಿತ್ಸೆ ಮುಂದುವರಿಸಲು ನಿರ್ಧರಿಸಲಾಗಿದೆ. ಇಲ್ಲಿಂದ ದೂರದ ಆಸ್ಪತ್ರೆಗೆ ಸಾಗಿಸುವ ವೇಳೆ ಮಾರ್ಗ ಮಧ್ಯದಲ್ಲಿ ತೊಂದರೆಯಾಗುವ ಸಾಧ್ಯತೆಗಳಿರುವ ಹಿನ್ನೆಲೆಯಲ್ಲಿ ಸದ್ಯಕ್ಕೆ ಸ್ಥಳಾಂತರ ಪ್ರಕ್ರಿಯೆ ಸ್ಥಗಿತಗೊಳಿಸಲಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ತಿಳಿಸಿದ್ದಾರೆ.
ಆರೋಪಿಗಳು ಪೊಲೀಸ್ ವಶಕ್ಕೆ: ಶುಕ್ರವಾರ ನ್ಯಾಯಾಲಯಕ್ಕೆ ಶರಣಾಗಿದ್ದ ಮೂವರು ಆರೋಪಿಗಳನ್ನು ಹೆಚ್ಚಿನ ವಿಚಾರಣೆಗಾಗಿ ಮಾ.4ರವರೆಗೆ ಪೊಲೀಸ್ ವಶಕ್ಕೆ ತೆಗೆದುಕೊಳ್ಳಲಾಗಿದೆ. ಸತ್ತೆಪ್ಪ ಬೀರಪ್ಪ ಡಾಂಗೆ, ಯಮನೂರ ಸದದೇವ ರಾಜಾಪುರೆ ಮತ್ತು ಸುರೇಶ ಸಿದ್ದಪ್ಪ ಡಾಂಗೆ ಅವರನ್ನು ರಾಯಬಾಗದಲ್ಲಿ ತೀವ್ರ ವಿಚಾರಣೆಗೆ ಒಳಪಡಿಸಲಾಗಿದೆ. ತನಿಖೆ ಪ್ರಗತಿಯಲ್ಲಿದೆ. ಇನ್ನೆರಡು ದಿನದಲ್ಲಿ ಈ ಕುರಿತಂತೆ ವಿವರಗಳನ್ನು ನೀಡಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠ ಸಂದೀಪ್ ಪಾಟೀಲ್ ತಿಳಿಸಿದ್ದಾರೆ.
ಲಿಂಗಸ್ಗೂರಿನಲ್ಲಿ ಬಾಲಕಿ ಮೇಲೆ ಅತ್ಯಾಚಾರ
ಲಿಂಗಸ್ಗೂರು: ಪಟ್ಟಣದ ಸಂತೆ ಬಜಾರ್ ಬಡಾವಣೆಯ ಅಮರೇಶ್ ಅಲಿಯಾಸ್ ಗುಂಡಪ್ಪ (23) ಎಂಬಾತ 16 ವರ್ಷದ ಬಾಲಕಿಯನ್ನು ಮದುವೆಯಾಗುವುದಾಗಿ ನಂಬಿಸಿ ದೇವದುರ್ಗ ತಾಲೂಕು ಜಾಲಹಳ್ಳಿಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ. ಆರೋಪಿ ಪರಾರಿಯಾಗಿದ್ದು ಬಾಲಕಿಯ ಪೋಷಕರು ಲಿಂಗಸ್ಗೂರು ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಕಾಮುಕನಿಗೆ ಧರ್ಮದೇಟು
ಚಿಕ್ಕಬಳ್ಳಾಪುರ: ಬಹಿರ್ದೆಸೆಗೆ ತೆರಳುತ್ತಿದ್ದ ಯುವತಿಯನ್ನು ಅಡ್ಡಗಟ್ಟಿ ಅತ್ಯಾಚಾರಕ್ಕೆ ಯತ್ನಿಸಿದ ಕಾಮುಕನಿಗೆ ಧರ್ಮದೇಟು ನೀಡಿ ಪೊಲೀಸ್ ವಶಕ್ಕೆ ಒಪ್ಪಿಸಿದ ಘಟನೆ ಶನಿವಾರ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಯುವತಿ ಬಹಿರ್ದೆಸೆಗೆ ತೆರಳುತ್ತಿದ್ದಾಗ ಅಡ್ಡಗಟ್ಟಿದ ನಗರದ ಶಾಂತಿ ನಗರ ನಿವಾಸಿ ಮಹಮ್ಮದ್ (48) ಅವಾಚ್ಯ ಶಬ್ದಗಳಿಂದ ನಿಂದಿಸಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಯುವತಿ ಕಿರುಚಿಕೊಂಡಿದ್ದರಿಂದ ಆಗಮಿಸಿದ ಸ್ಥಳೀಯರು ಧರ್ಮದೇಟು ನೀಡಿ ಪೊಲೀಸರಿಗೆ ಒಪ್ಪಿಸಿದ್ದಾರೆ. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


