ಸಮರಾಭ್ಯಾಸ ಶುರು
ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗುತ್ತಿದ್ದಂತೆ ರಾಜಕೀಯ ಪಕ್ಷಗಳ ಚಟುವಟಿಕೆಯೂ ಬಿರುಸಾಗತೊಡಗಿದೆ...

ಕನ್ನಡಪ್ರಭ ವಾರ್ತೆ ಬೆಂಗಳೂರು ಮಾ.22
ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗುತ್ತಿದ್ದಂತೆ ರಾಜಕೀಯ ಪಕ್ಷಗಳ ಚಟುವಟಿಕೆಯೂ ಬಿರುಸಾಗತೊಡಗಿದೆ.
ಬಿಜೆಪಿ ಹಾಗೂ ಕೆಜೆಪಿ ನಡುವಿನ ವಾಗ್ಯುದ್ಧಕ್ಕೆ ಸಾಂಸ್ಕೃತಿಕ ನಗರಿ ಮೈಸೂರು ವೇದಿಕೆಯಾಗಿತ್ತು. ಅತ್ತ, ದೆಹಲಿಯಲ್ಲಿ ಹೈಕಮಾಂಡ್ನೊಂದಿಗೆ ಕಾಂಗ್ರೆಸ್ ನಾಯಕರು ಅಭ್ಯರ್ಥಿಗಳ ಪಟ್ಟಿಯನ್ನು ಅಖೈರುಗೊಳಿಸುವಲ್ಲಿ ಕಸರತ್ತು ನಡೆಸಿದರು.
ಮೈಸೂರಿನಲ್ಲಿ ಬಿಜೆಪಿ ಹಾಗೂ ಕೆಜೆಪಿ ಚುನಾವಣಾ ಪ್ರಚಾರವನ್ನು ಶುಕ್ರವಾರ ಆರಂಭಿಸಿತು. ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಬಿಜೆಪಿ ಪ್ರಚಾರಕ್ಕೆ ಚಾಲನೆ ನೀಡಿದರೆ, ನಂಜನಗೂಡಿನ ಶ್ರೀಕಂಠೇಶ್ವರನಿಗೆ ಪೂಜೆ ಸಲ್ಲಿಸಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕೆಜೆಪಿ ಪ್ರಚಾರ ಆರಂಭಿಸಿದರು. ನಂತರ ಇವೆರಡು ಪಕ್ಷಗಳ ಸಮಾವೇಶ ಮೈಸೂರು ನಗರದಲ್ಲಿ ನಡೆದು, ಪರಸ್ಪರ ಆರೋಪಗಳ ಸುರಿಮಳೆ ಹರಿಸಿದರು.
ಕಾಂಗ್ರೆಸ್, ಜೆಡಿಎಸ್ ಹೊರತಾಗಿ ಇನ್ನೆಲ್ಲ ಸಣ್ಣ ಪಕ್ಷಗಳಾಗಿದ್ದು ಅವುಗಳ ಬಗ್ಗೆ ಆಲೋಚಿಸುವುದೇ ಇಲ್ಲ ಎಂದು ಬಿಜೆಪಿಯ ನೂತನ ರಾಜ್ಯಾಧ್ಯಕ್ಷ ಪ್ರಹ್ಲಾದ ಜೋಶಿ ಹೇಳಿ, ಕೆಜೆಪಿ ನಮಗೆ ಸವಾಲೇ ಅಲ್ಲ ಎಂದರು. ಇದಕ್ಕೆ ಉತ್ತರವಾಗಿ ಕೆಜೆಪಿಯ ಯಡಿಯೂರಪ್ಪ ಅವರು ಬಿಜೆಪಿ 40 ಸ್ಥಾನವನ್ನೂ ಗೆಲ್ಲುವುದಿಲ್ಲ ಎಂದರು.
ದಿಲ್ಲಿಯಲ್ಲಿ ಕೈ ನಾಯಕರ ಚಟುವಟಿಕೆ
ಬಿಜೆಪಿ- ಕೆಜೆಪಿ ರಾಜಕಾರಣ ಮೈಸೂರಿನಲ್ಲೇ ಕೇಂದ್ರೀಕೃತವಾಗಿರುವ ಸಮಯದಲ್ಲಿ ಕಾಂಗ್ರೆಸ್ ದೆಹಲಿಯಲ್ಲಿ ಬಿರುಸಿನ ಚಟುವಟಿಕೆಯಲ್ಲಿ ತೊಡಗಿತ್ತು. ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಹಾಗೂ ಉಪಾಧ್ಯಕ್ಷ ರಾಹುಲ್ಗಾಂಧಿ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ. ಕೇಂದ್ರದ ಮಾಜಿ ಸಚಿವ ಎಸ್.ಎಂ. ಕೃಷ್ಣ ಕೂಡ ಸೋನಿಯಾಗಾಂಧಿ ಹಾಗೂ ರಾಹುಲ್ಗಾಂಧಿಯವರನ್ನು ಭೇಟಿ ಮಾಡಿದ್ದರು. ಸಮನ್ವಯ ಸಮಿತಿ ಅಧ್ಯಕ್ಷ ಎ.ಕೆ. ಆ್ಯಂಟನಿ ಅವರ ನೇತೃತ್ವದಲ್ಲಿ ಸಭೆ ನಡೆದು, ಚುನಾವಣೆಯ ಸಿದ್ಧತೆ ಹಾಗೂ ಸ್ಥಿತಿಗತಿಗಳ ಬಗ್ಗೆ ಚರ್ಚಿಸಲಾಗಿದೆ. ಎಲ್ಲ ಹಂತದಲ್ಲೂ ಪರಿಶೀಲಿಸಿದ ನಂತರ, ಸೋನಿಯಾಗಾಂಧಿ ಹಾಗೂ ರಾಹುಲ್ಗಾಂಧಿ ಪಟ್ಟಿಗೆ ಸಹಿ ಹಾಕಿದ ಮೇಲೆ ಪ್ರಕಟವಾಗುವ ಸಾಧ್ಯತೆ ಇದೆ. ಈ ಪ್ರಕ್ರಿಯೆ ಮಾ.26 ಅಥವಾ 27ರಂದು ನಡೆಯಲಿದೆ ಎನ್ನಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


