ಸಿದ್ದರಾಮಯ್ಯ ಎಂಬ ಹೆಸರಿನವನಾದ ನಾನು...
- ಬೆಳಗ್ಗೆ 11.40ಕ್ಕೆ ಮುಹೂರ್ತ, ಕಂಠೀರವದಲ್ಲಿ ಜನಸಾಗರ ನಿರೀಕ್ಷೆ
- 19 ವರ್ಷ ಬಳಿಕ ಹಿಂದುಳಿದ ವರ್ಗದ ನಾಯಕನ ಅಧಿಕಾರ ಸ್ವೀಕಾರ
ಕನ್ನಡಪ್ರಭ ವಾರ್ತೆ ಬೆಂಗಳೂರು ಮೇ 12
ಅಕ್ಷಯ ತೃತೀಯ ಶುಭ ಮುಹೂರ್ತದಲ್ಲಿ ಸಿದ್ದರಾಮನ ಹುಂಡಿ ಸಿದ್ದರಾಮಯ್ಯ ಅವರು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸೋಮವಾರ ಅಧಿಕಾರ ಸ್ವೀಕರಿಸಲಿದ್ದಾರೆ.
ಕಂಠೀರವ ಕ್ರೀಡಾಂಗಣದಲ್ಲಿ ಬೆಳಗ್ಗೆ 11.40ಕ್ಕೆ ನಡೆಯಲಿರುವ ಕಾರ್ಯಕ್ರಮದಲ್ಲಿ ರಾಜ್ಯಪಾಲ ಹಂಸರಾಜ ಭಾರದ್ವಾಜ್ ಅವರು ಸಿದ್ದರಾಮಯ್ಯ ಅವರಿಗೆ ಅಧಿಕಾರ ಮತ್ತು ಗೌಪ್ಯತೆ ಪ್ರಮಾಣ ವಚನ ಬೋಧಿಸುವರು.
ಹೊಸ ಮುಖ್ಯಮಂತ್ರಿ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಕಂಠೀರವ ಕ್ರೀಡಾಂಗಣವನ್ನು ಸಂಪೂರ್ಣ ಸಜ್ಜುಗೊಳಿಸಲಾಗಿದ್ದು, ಅಗತ್ಯ ಪೊಲೀಸ್ ಭದ್ರತೆ ಒದಗಿಸಲಾಗಿದೆ. ಗಣ್ಯರಿಗೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ.
ವಿಧಾನಸಭೆ ಚುನಾವಣೆಯಲ್ಲಿ 121 ಸ್ಥಾನ ಗಳಿಸಿರುವ ಕಾಂಗ್ರೆಸ್ ಸಿದ್ದರಾಮಯ್ಯ ಅವರನ್ನು ಶಾಸಕಾಂಗ ಪಕ್ಷದ ನಾಯಕನನ್ನಾಗಿ ಆಯ್ಕೆ ಮಾಡಿದೆ.
ಆಡಳಿತ ಕುದುರೆ ಏರುವ ಸವಾರ: ತಾವು ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ಬಳಿಕ, ಆಡಳಿತ ಯಂತ್ರ ಎಂಬುದು ವಾಯುವೇಗದಲ್ಲಿ ಓಡುವ ಕುದುರೆ ಇದ್ದಂತೆ. ಜಾಕಿ (ಸವಾರ) ಸರಿ ಇದ್ದರೆ ಗುರಿ ಮುಟ್ಟಬಹುದು. ಇಲ್ಲವಾದರೆ ಕುದುರೆ ಎಲ್ಲೆಲ್ಲೋ ಕೊಂಡೊಯ್ದು ಬಿಸಾಕುತ್ತದೆ ಎಂದು ಹೇಳಿ ತಾವು ಏರಲಿರುವ ಹುದ್ದೆಯ ಜವಾಬ್ದಾರಿಯನ್ನು ಅರ್ಥಮಾಡಿಕೊಂಡಿರುವ ಸಿದ್ದರಾಮಯ್ಯ ಅವರು, ಆ ನಿಟ್ಟಿನಲ್ಲಿ ಕಾರ್ಯಕ್ರಮ ಕೈಗೊಳ್ಳಲು ಸೋಮವಾರ ಮುನ್ನುಡಿ ಬರೆಯಲಿದ್ದಾರೆ.
ಏಕಾಂಗಿಯಾಗಿ ಪ್ರಮಾಣವಚನ: ಹೊಸ ಸರ್ಕಾರ ಅಧಿಕಾರಕ್ಕೆ ಬರುವ ಸಂದರ್ಭದಲ್ಲಿ ಸಚಿವ ಸಂಪುಟ ಸದಸ್ಯರಿಲ್ಲದೆ ಮುಖ್ಯಮಂತ್ರಿಯೊಬ್ಬರು ಏಕಾಂಗಿಯಾಗಿ ಪ್ರಮಾಣವಚನ ಸ್ವೀಕರಿಸುತ್ತಿರುವುದು ಕೂಡ ಅಪರೂಪ.
ಹಿಂದುಳಿದ ವರ್ಗದ ನಾಯಕ: ಅಷ್ಟೇ ಅಲ್ಲ, ಸುಮಾರು 19 ವರ್ಷಗಳ ಬಳಿಕ ಹಿಂದುಳಿದ ವರ್ಗದ ನಾಯಕರೊಬ್ಬರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುವುದು ಕೂಡ ವಿಶೇಷ. 1992ರಿಂದ 94ರ ಅವಧಿಯಲ್ಲಿ ಮುಖ್ಯಮಂತ್ರಿಯಾಗಿದ್ದ ವೀರಪ್ಪ ಮೊಯ್ಲಿ ಅವರ ನಂತರ ಹಿಂದುಳಿದ ವರ್ಗದವರು ಮುಖ್ಯಮಂತ್ರಿಯಾಗುತ್ತಿರುವುದು ಇದೇ ಪ್ರಥಮ.
ಕಂಠೀರವ ಕ್ರೀಡಾಂಗಣ ಸಜ್ಜು: ನೂತನ ಮುಖ್ಯಮಂತ್ರಿಗಳ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಕಂಠೀರವ ಕ್ರೀಡಾಂಗಣ ಸಜ್ಜುಗೊಂಡಿದೆ. ಇತ್ತೀಚಿನ ದಿನಗಳಲ್ಲಿ ಕ್ರೀಡಾ ಚಟುವಟಿಕೆ ಹೊರತುಪಡಿಸಿ ಬೇರೆ ಯಾವುದೇ ಕಾರ್ಯಕ್ರಮಗಳು ನಡೆಯದೆ ಕಳೆಗುಂದಿದ್ದ ಕ್ರೀಡಾಂಗಣಕ್ಕೆ ಹೊಸ ಬಣ್ಣ ಬಳಿಯಲಾಗಿದ್ದು, ಕ್ರೀಡಾಂಗಣದ ಒಳಗೆ ಮತ್ತು ಹೊರಗೆ ಸಂಪೂರ್ಣ ಸ್ವಚ್ಛಗೊಳಿಸಲಾಗಿದೆ.
ಕಂಠೀರವ ಕ್ರೀಡಾಂಗಣದಲ್ಲಿ ಇದೇ ಮೊದಲ ಬಾರಿ ಮುಖ್ಯಮಂತ್ರಿಯೊಬ್ಬರು ಪ್ರಮಾಣವಚನ ಸ್ವೀಕರಿಸುತ್ತಿರುವುದರಿಂದ ಈ ಕಾರ್ಯಕ್ರಮವನ್ನು ಜನಮಾನಸದಲ್ಲಿ ಅಚ್ಚಳಿಯದಂತೆ ಮಾಡಲು ಎಲ್ಲಾ ಸಿದ್ಧತೆಗಳನ್ನು ಮಾಡಲಾಗಿದೆ.
ಸಂಚಾರಕ್ಕೆ ಪರ್ಯಾಯ ವ್ಯವಸ್ಥೆ: ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಬಿಗಿ ಭದ್ರತೆ ಕಲ್ಪಿಸಲಾಗಿದ್ದು, ಕ್ರೀಡಾಂಗಣದ ಸುತ್ತ ಮತ್ತು ಆಯ್ದ ಸ್ಥಳಗಳಲ್ಲಿ 9 ಸಾವಿರ ಪೊಲೀಸರನ್ನು ನಿಯೋಜಿಸಲಾಗಿದೆ. ಬೆಂಗಳೂರು ನಗರ ಪೊಲೀಸ್ ಆಯುಕ್ತರು, ಜಂಟಿ ಆಯುಕ್ತರು, ಡಿಸಿಪಿಗಳು ಕೂಡ ಕ್ರೀಡಾಂಗಣದ ಬಳಿ ಭದ್ರತೆಯ ಉಸ್ತುವಾರಿ ನೋಡಿಕೊಳ್ಳಲಿದ್ದಾರೆ.
ಗಣ್ಯರಿಗೆ ಪ್ರಮುಖ ದ್ವಾರದ ಮೂಲಕ ಪ್ರವೇಶ: ಕಾರ್ಯಕ್ರಮಕ್ಕೆ ಬರುವ ಗಣ್ಯರಿಗೆ ಕ್ರೀಡಾಂಗಣದ ಪ್ರಮುಖ ದ್ವಾರದ ಮೂಲಕ ಪ್ರವೇಶಕ್ಕೆ ಅವಕಾಶ ಮಾಡಲಾಗಿದೆ. ಸಾರ್ವಜನಿಕರಿಗೆ ಹಿಂಬಾಗಿಲ ಮೂಲಕ ಒಳಗೆ ಬರಲು ವ್ಯವಸ್ಥೆ ಕಲ್ಪಿಸಲಾಗಿದೆ. ಸಮಾರಂಭಕ್ಕೆ ಗಣ್ಯರು, ಸಾವಿರಾರು ಸಂಖ್ಯೆಯ ಅಭಿಮಾನಿಗಳು ಆಗಮಿಸುತ್ತಿರುವುದರಿಂದ ಸಂಚಾರ ವ್ಯವಸ್ಥೆ ಹದಗೆಡದಂತೆ ಸಂಚಾರ ಪೊಲೀಸರು ಬಿಎಂಟಿಸಿ ಬಸ್ ಸೇರಿದಂತೆ ವಾಹನಗಳಿಗೆ ಪರ್ಯಾಯ ವ್ಯವಸ್ಥೆ ಮಾಡಿದ್ದಾರೆ.
ಯಾರು ಬರ್ತಾರೆ?
ಸಿದ್ದರಾಮಯ್ಯ ಅವರ ಅಧಿಕಾರ ಸ್ವೀಕಾರ ಸಮಾರಂಭಕ್ಕೆ ಎಐಸಿಸಿ ಪರವಾಗಿ ಪಕ್ಷದ ರಾಜ್ಯ ಉಸ್ತುವಾರಿ ಮಧುಸೂಧನ್ ಮಿಸ್ತ್ರಿ, ಎಐಸಿಸಿ ಕಾರ್ಯದರ್ಶಿ ಹನುಮಂತರಾವ್, ಶಾಂತಾರಾಮ್ ನಾಯಕ್, ಕೇಂದ್ರ ಸಚಿವರಾದ ಮಲ್ಲಿಕಾರ್ಜುನ ಖರ್ಗೆ, ಎಂ. ವೀರಪ್ಪ ಮೊಯ್ಲಿ, ಕೆ.ಎಚ್. ಮುನಿಯಪ್ಪ, ರೆಹಮಾನ್ ಖಾನ್, ಮುಖಂಡರಾದ ಬಿ.ಕೆ. ಹರಿಪ್ರಸಾದ್, ಆಸ್ಕರ್ ಫರ್ನಾಂಡೀಸ್, ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ, ಗೋವಾ ಮಾಜಿ ಮುಖ್ಯಮಂತ್ರಿ ನ್ಯೂಜಿನೋ ಫೆಲಿರಿಯೋ ಅವರು ಸಾಕ್ಷಿಗಳಾಗಲಿದ್ದಾರೆ. ರಾಹುಲ್ ಗಾಂಧಿ ಆಗಮಿಸಲಿದ್ದಾರೆ ಎಂಬ ನಿರೀಕ್ಷೆ ಹುಸಿಯಾಗಿದೆ.
ಹಲವು ಹೊಸತನಕ್ಕೆ ಸಾಕ್ಷಿ
ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರ ಪ್ರಮಾಣವಚನ ಸ್ವೀಕಾರ ಸಮಾರಂಭ ಹಲವು ಹೊಸತುಗಳಿಗೆ ನಾಂದಿಯಾಗಲಿದೆ. ರಾಜ್ಯದ ಇತಿಹಾಸದಲ್ಲಿ ಇದುವರೆಗೆ ಇಲ್ಲದ ಹೊಸ ಸಂಪ್ರದಾಯಕ್ಕೆ ಸಿದ್ದರಾಮಯ್ಯ ನಾಂದಿ ಹಾಡಲಿದ್ದಾರೆ. ಇದುವರೆಗೆ ರಾಜ್ಯದಲ್ಲಿ ಅಧಿಕಾರ ನಡೆಸಿದ ಮುಖ್ಯಮಂತ್ರಿಗಳೆಲ್ಲರೂ ವಿಧಾನಸೌಧದ ಮುಂಭಾಗ ಮತ್ತು ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದರು. ಈ ಬಾರಿ ಸಂಪ್ರದಾಯಕ್ಕೆ ತಿಲಾಂಜಲಿ ನೀಡಿರುವ ಸಿದ್ದರಾಮಯ್ಯ ಅವರು ಕಂಠೀರವ ಕ್ರೀಡಾಂಗಣದಲ್ಲಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

