ಸಿದ್ದು ಡಬಲ್ಗೇಮ್
ಕನ್ನಡಪ್ರಭ ವಾರ್ತೆ, ಬೆಂಗಳೂರು, ಅ.2-
ಅಕ್ರಮ ಗಣಿಗಾರಿಕೆ ವಿಚಾರದಲ್ಲಿ ದ್ವಂದ್ವ ನಿಲುವು ತಳೆದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನಾಟಕವಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆರೋಪಿಸಿದ್ದಾರೆ.
ಈ ಹಿಂದೆ ಪ್ರತಿಪಕ್ಷ ನಾಯಕರಾಗಿದ್ದಾಗ ಅಕ್ರಮ ಗಣಿಗಾರಿಕೆ ವಿರುದ್ಧ ಬಳ್ಳಾರಿವರೆಗೆ ಪಾದಯಾತ್ರೆ ಮಾಡಿದರು. ಆದರೆ, ಮುಖ್ಯಮಂತ್ರಿಯಾದ ಬಳಿಕ ಅಕ್ರಮ ಗಣಿಗಾರಿಕೆ ಆರೋಪ ಹೊತ್ತವರನ್ನು ತಮ್ಮ ಸಂಪುಟದಲ್ಲಿಟ್ಟುಕೊಂಡು ಸಮರ್ಥಿಸಿಕೊಳ್ಳುತ್ತಿದ್ದಾರೆ ಎಂದು ಅವರು ಟೀಕಿಸಿದರು.
ಕೆಜೆಪಿ ಕಚೇರಿಯಲ್ಲಿ ಬುಧವಾರ ಮಹಾತ್ಮ ಗಾಂಧಿ ಜಯಂತಿ ಅಂಗವಾಗಿ ಗಾಂಧಿ ಭಾವಚಿತ್ರಕ್ಕೆ ಗೌರವ ಸಲ್ಲಿಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ಸಂತೋಷ್ ಲಾಡ್ ಅಪರಾಧಿ ಎಂದು ನಾನು ಹೇಳುವುದಿಲ್ಲ. ಆದರೆ, ಅವರ ವಿರುದ್ಧ ಆರೋಪ ಬಂದಿದೆ. ಆರೋಪಿ ಸ್ಥಾನದಲ್ಲಿರುವ ಸಂತೋಷ್ ಲಾಡ್ ಅವರನ್ನು ಸಂಪುಟದಲ್ಲಿ ಮುಂದುವರಿಸಿದ್ದು ಮಾತ್ರವಲ್ಲದೆ, ಅವರನ್ನು ಸಮರ್ಥಿಸಿಕೊಳ್ಳುವ ಮೂಲಕ ಅಕ್ರಮ ಗಣಿಗಾರಿಕೆಗೆ ಕುಮ್ಮಕ್ಕು ನೀಡುತ್ತಿದ್ದಾರೆ ಎಂದು ಆಪಾದಿಸಿದರು.
ಲಾಡ್ ಅಕ್ರಮ ಗಣಿಗಾರಿಕೆ ನಡೆಸಿರುವ ದಾಖಲೆಗಳನ್ನು ಸಮಾಜ ಪರಿವರ್ತನಾ ಸಮುದಾಯದ ಎಸ್.ಆರ್. ಹಿರೇಮಠ್ ಬಹಿರಂಗಪಡಿಸಿದ್ದಾರೆ. ಆದರೂ ಸಮರ್ಥನೆ ನಾಚಿಕೆಗೇಡು ಎಂದರು.
ಈ ಹಿಂದೆ ನನ್ನ ವಿರುದ್ಧ ಆರೋಪ ಬಂದಾಗ ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡಿದೆ. ಅದಕ್ಕೆ ಮುನ್ನ ಸಿದ್ದರಾಮಯ್ಯ ಅವರು ನನ್ನ ಮೇಲೆ ಸಲ್ಲದ ಆರೋಪ ಮಾಡಿ ಇನ್ನಿಲ್ಲದಂತೆ ಕಾಡಿದರು. ಮುಖ್ಯಮಂತ್ರಿಯಾಗಿ ಕೆಲಸ ಮಾಡಲೂ ಅವಕಾಶ ನೀಡಲಿಲ್ಲ. ಆದರೆ, ಅದೇ ಸಿದ್ದರಾಮಯ್ಯ ಇದೀಗ ಸಂತೋಷ್ ಲಾಡ್ ನಡೆಸಿರುವ ಅಕ್ರಮ ಗಣಿಗಾರಿಕೆ ವಿಚಾರದಲ್ಲಿ ದ್ವಂದ್ವ ನಡವಳಿಕೆ ಹೊಂದಿದ್ದಾರೆ. ತಕ್ಷಣವೇ ಲಾಡ್ ಅವರನ್ನು ಸಂಪುಟದಿಂದ ವಜಾಗೊಳಿಸದಿದ್ದರೆ ಸಿದ್ದರಾಮಯ್ಯ ಅವರ ಮೇಲೆಯೇ ಅನುಮಾನಪಡಬೇಕಾಗುತ್ತದೆ ಎಂದರು.
ಶಿಂದೆ ನಿರ್ದೇಶನ ಅಕ್ಷಮ್ಯ: ಭಯೋತ್ಪಾದಕರ ಹೆಸರಿನಲ್ಲಿ ಅಮಾಯಕ ಮುಸ್ಲಿಮರನ್ನು ಬಂಧಿಸಬೇಡಿ ಎಂದು ಕೇಂದ್ರ ಗೃಹ ಸಚಿವ ಸುಶೀಲ್ಕುಮಾರ್ ಶಿಂದೆ ನೀಡಿರುವ ಸೂಚನೆ ಅಕ್ಷಮ್ಯ ಅಪರಾಧ. ಒಂದು ರಾಷ್ಟ್ರದ ಗೃಹ ಸಚಿವರಾಗಿ ಅವರು ನಿರ್ದೇಶನ ನೀಡುವುದು ಸರಿಯಲ್ಲ. ಇದು ಧರ್ಮಗಳ ಮಧ್ಯೆ ಒಡಕು ಮೂಡಿಸುವ ಹೇಳಿಕೆ ಎಂದು ಆರೋಪಿಸಿದರು.
ಯಾವುದೇ ಪ್ರಕರಣವಾಗಲಿ, ಅಪರಾಧವನ್ನು ನಿರ್ಧರಿಸುವುದು ನ್ಯಾಯಾಲಯ. ಹೀಗಿರುವಾಗ ಅಮಾಯಕರು ಎಂಬ ನಿರ್ಧಾರಕ್ಕೆ ಬರಲು ಶಿಂದೆ ಯಾರು? ಒಂದು ವರ್ಗವನ್ನು ಓಲೈಸಲು ದೇಶದ ಕಾನೂನು ವ್ಯವಸ್ಥೆಯ ಬಗ್ಗೆಯೇ ಅಗೌರವದಿಂದ ಕಾಣುವ ಶಿಂದೆ ತಮ್ಮ ಈ ತಪ್ಪಿಗಾಗಿ ದೇಶದ ಜನರ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದರು.
ಈ ಸ್ಥಿತಿ ಬರುತ್ತಿರಲಿಲ್ಲ: ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಮಹಾತ್ಮಾ ಗಾಂಧಿ ಅವರ ಮಾತುಗಳನ್ನು ಪಾಲಿಸಿದ್ದರೆ ದೇಶಕ್ಕೆ ಈ ಸ್ಥಿತಿ ಬರುತ್ತಿರಲಿಲ್ಲ. ಸ್ವಾತಂತ್ರ್ಯಾನಂತರ ಗಾಂಧೀಜಿಯವರು ಕಾಂಗ್ರೆಸ್ಸನ್ನು ವಿಸರ್ಜಿಸಬೇಕು ಎಂದಿದ್ದರು. ಅದರಂತೆ ನಡೆದುಕೊಂಡಿದ್ದರೆ ದೇಶಕ್ಕೆ ಈ ಸ್ಥಿತಿ ಬರುತ್ತಿರಲಿಲ್ಲ ಎಂದು ಹೇಳಿದರು. ಕೆಜೆಪಿ ಪ್ರಚಾರ ಸಮಿತಿ ಅಧ್ಯಕ್ಷ ವಿ. ಧನಂಜಯಕುಮಾರ್, ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ಡಿ. ಲಕ್ಷ್ಮೀನಾರಾಯಣ, ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಮಂಜುಳಾ ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

