ಹೊಟೇಲ್, ಗಾರ್ಮೆಂಟ್ಸ್ ಕಾರ್ಮಿಕರ ಕನಿಷ್ಠ ವೇತನ ಪರಿಷ್ಕರಣೆಗೆ ನಿರ್ಧಾರ
ಕ.ಪ್ರ.ವಾರ್ತೆ ಬೆಂಗಳೂರು ಅ. 28-
ಗಾರ್ಮೆಂಟ್ಸ್ ಹಾಗೂ ಹೊಟೇಲ್ ಕಾರ್ಮಿಕರ ಕನಿಷ್ಠ ವೇತನ ಪರಿಷ್ಕರಣೆಗೆ ಸರ್ಕಾರ ನಿರ್ಧರಿಸಿದೆ ಎಂದು ಕಾರ್ಮಿಕ ಸಚಿವ ಪಿ.ಟಿ.ಪರಮೇಶ್ವರ ನಾಯ್ಕ್ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಸೋಮವಾರ ಈ ವಿಷಯ ತಿಳಿಸಿರುವ ಅವರು, ಈ ಬಗ್ಗೆ ಅಧಿಕಾರಿಗಳ ಜತೆ ಚರ್ಚಿಸಲಾಗಿದೆ. ಸದ್ಯದಲ್ಲೇ ಕಾರ್ಮಿಕ ಸಂಘಟನೆಗಳು ಹಾಗೂ ಉದ್ಯಮದ ಮುಖಂಡರ ಜತೆ ಚರ್ಚಿಸಿ ಪರಿಷ್ಕೃತ ಕನಿಷ್ಠ ವೇತನ ನಿಗದಿಗೊಳಿಸಲಾಗುವುದು ಎಂದು ಹೇಳಿದರು. ಗಾರ್ಮೆಂಟ್ಸ್ ಹಾಗೂ ಹೊಟೇಲ್ ಕಾರ್ಮಿಕರ ಕನಿಷ್ಠ ವೇತನ ತೀರಾ ಕಡಿಮೆ ಇದೆ. ಬೆಂಗಳೂರಿನಂತಹ ನಗರದಲ್ಲಿ ಮಾಸಿಕ ರು 4700 ಸಂಬಳ ಪಡೆದು ಜೀವನ ನಿರ್ವಹಣೆ ಮಾಡುವುದು ಕಷ್ಟ. ಈ ಹಿನ್ನೆಲೆಯಲ್ಲಿ ವೇತನ ಪರಿಷ್ಕರಣೆ ಅಗತ್ಯ ಎಂದು ಅಭಿಪ್ರಾಯಪಟ್ಟರು. ಹೊಟೇಲ್ ಕ್ಷೇತ್ರದಲ್ಲಿ ಹೆಚ್ಚಿನ ಕಾರ್ಮಿಕರು ಹೊರಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದಾರೆ. ಅಂಥವರಿಗೆ ಸೂಕ್ತ ಸೇವಾ ಭದ್ರತೆ ಇಲ್ಲ. ಹೀಗಾಗಿ ಅಂಥವರ ನೆರವಿಗೆ ಧಾವಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಹೇಳಿದರು.
ಅದೇ ರೀತಿ ಕಟ್ಟಡ ಕಾರ್ಮಿಕರ ಮಕ್ಕಳಿಗೆ ವಸತಿ ಶಾಲೆಗಳನ್ನು ನಿರ್ಮಿಸಲು ಸರ್ಕಾರ ನಿರ್ಧರಿಸಿದೆ. ರಾಜ್ಯದ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ 11 ಕೈಗಾರಿಕಾ ಪ್ರದೇಶಗಳಲ್ಲಿ ಇಂಥ ಶಾಲೆಗಳನ್ನು ನಿರ್ಮಿಸಲು ರಾಜ್ಯ ಸರ್ಕಾರ ಉದ್ದೇಶಿಸಿದೆ ಎಂದರು.
ಮೈಸೂರು, ದೊಡ್ಡಬಳ್ಳಾಪುರ, ಬೆಳಗಾವಿ, ಗುಲ್ಬರ್ಗ, ಧಾರವಾಡ, ಹಾಸನ, ಬೆಳಗಾವಿಯ ಕಿತ್ತೂರು, ಶಿವಮೊಗ್ಗ, ಚಾಮರಾಜನಗರ, ಬಳ್ಳಾರಿ, ಗುಲ್ಬರ್ಗದ ನಂದೂರು ಬಳಿ ಶಾಲೆ ನಿರ್ಮಿಸುವುದಕ್ಕೆ ಕೆಐಎಡಿಬಿಯಿಂದ ಜಾಗ ಮಂಜೂರಾಗಿದೆ. ಇದಕ್ಕೆ ರು 85.75 ಕೋಟಿ ವೆಚ್ಚವಾಗಿದೆ. ಶಿಕ್ಷಣ ತಜ್ಞರು ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜತೆ ಚರ್ಚಿಸಿ ಶಿಕ್ಷಣ ಮಾಧ್ಯಮದ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದರು. ಅದೇ ರೀತಿ ಬೆಂಗಳೂರು ಸಮೀಪದ ಓಬದೇವನಹಳ್ಳಿಯಲ್ಲಿ ಕನ್ಸ್ಟ್ರಕ್ಷನ್ ಅಕಾಡೆಮಿ ಸ್ಥಾಪನೆಗೆ ನಿರ್ಧರಿಸಲಾಗಿದೆ. ರು 200 ಕೋಟಿ ವೆಚ್ಚದಲ್ಲಿ ಈ ಅಕಾಡೆಮಿ ನಿರ್ಮಿಸಲಾಗುವುದು ಎಂದರು.
ರು 2060 ಕೋಟಿ ಸೆಸ್: ರಾಜ್ಯದಲ್ಲಿ ನಿರ್ಮಾಣಗೊಂಡಿರುವ ವಿವಿಧ ಕಾಮಗಾರಿಗಳಿಂದ 2060 ಕೋಟಿ ಕಾರ್ಮಿಕರ ಸೆಸ್ ಸಂಗ್ರಹಿಸಲಾಗಿದೆ. ಈ ಹಣವನ್ನು ಕಾರ್ಮಿಕರ ಅಭ್ಯುದಯಕ್ಕೆ ಬಳಸಲಾಗುವುದು. 900 ರಿಂದ 1000 ಕೋಟಿ ಹಣವನ್ನು ಕಾರ್ಮಿಕ ಕಲ್ಯಾಣಕ್ಕೆ ಬಳಸಲು ನಿರ್ಧರಿಸಲಾಗಿದೆ. ಅದೇ ರೀತಿ 16 ಲಕ್ಷ ಕಾರ್ಮಿಕರನ್ನು ನೋಂದಣಿ ಮಾಡಿಸಿಕೊಳ್ಳಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.
ಮೆಟ್ರೊ ಕಾಮಗಾರಿಯಲ್ಲಿ ದುಡಿಯುವ ಕಾರ್ಮಿಕರಿಗೆ ಸೂಕ್ತ ಸೌಲಭ್ಯ ದೊರಕುತ್ತಿಲ್ಲ ಎಂಬ ದೂರು ಕೇಳಿ ಬಂದಿದೆ. ಈ ಬಗ್ಗೆ ಕ್ರಮ ತೆಗೆದುಕೊಳ್ಳಲಾಗುವುದು. ಜತೆಗೆ ಕಾಮಗಾರಿ ಸಂದರ್ಭದಲ್ಲಿ ಮೃತಪಟ್ಟ ಕಾರ್ಮಿಕರ ಕುಟುಂಬ ವರ್ಗದವರಿಗೆ ನೀಡುವ ಪರಿಹಾರ ಧನ ಹೆಚ್ಚಿಸುವ ಬಗ್ಗೆ ಚಿಂತನೆ ನಡೆದಿದೆ ಎಂದರು.
ಜಿಲ್ಲಾಧಿಕಾರಿಗಳ ಜತೆ ಚರ್ಚಿಸಿ ಕ್ರಮ
ಬಳ್ಳಾರಿ ಜಿಲ್ಲಾ ಕಾಂಗ್ರೆಸ್ ಕಚೇರಿ ನಿರ್ಮಾಣಕ್ಕೆ ಮಂಜೂರಾದ ಜಾಗವನ್ನು ಕಾಂಗ್ರೆಸ್ ಮುಖಂಡ ಕೆ.ಸಿ.ಕೊಂಡಯ್ಯ ದುರ್ಬಳಕೆ ಮಾಡಿಕೊಂಡಿರುವ ಬಗ್ಗೆ ನನಗೆ ಮಾಹಿತಿ ಇಲ್ಲ. ಈ ಬಗ್ಗೆ ಜಿಲ್ಲಾಧಿಕಾರಿಗಳ ಜತೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಪಿ.ಟಿ.ಪರಮೇಶ್ವರ ನಾಯ್ಕ್ ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮಗಳಲ್ಲಿ ವರದಿ ಬಂದಿದೆ. ನನಗೆ ಸಂಪೂರ್ಣ ಮಾಹಿತಿ ಇಲ್ಲ. ಹೀಗಾಗಿ ಈಗಲೇ ಏನನ್ನೂ ಹೇಳಲಾರೆ ಎಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

