ಬತ್ತ, ರಾಗಿ, ಜೋಳಕ್ಕೆ ಬೆಂಬೆಲೆ
ಕ.ಪ್ರ. ವಾರ್ತೆ, ಬೆಂಗಳೂರು, ಸೆ.2-
ರಾಜ್ಯದಲ್ಲಿ ಬತ್ತ, ರಾಗಿ ಮತ್ತು ಜೋಳ ಬೆಳೆಯುವ ರೈತರಿಗೆ ಶುಭ ಸುದ್ದಿ. ಈ ಮೂರೂ ಉತ್ಪನ್ನಗಳಿಗೆ ಸರ್ಕಾರ ಹೆಚ್ಚಿನ ಬೆಂಬಲ ಬೆಲೆ ನೀಡಲಿದೆ.
ಬಿಪಿಎಲ್ ಕಾರ್ಡ್ದಾರರಿಗೆ ಅಕ್ಕಿಯ ಜತೆಗೆ ಜೋಳ ಮತ್ತು ರಾಗಿ ವಿತರಿಸಲು ಹೆಚ್ಚಿನ ಪ್ರಮಾಣದ ಜೋಳ ಮತ್ತು ರಾಗಿಯನ್ನು ರೈತರಿಂದ ನೇರವಾಗಿ ಖರೀದಿಸುವ ಉದ್ದೇಶದಿಂದ ಬೆಂಬಲ ಬೆಲೆ ಹೆಚ್ಚಿಸಲು ಸರ್ಕಾರ ಮುಂದಾಗಿದೆ.
ಈ ನಿಟ್ಟಿನಲ್ಲಿ ರಚಿಸಲಾಗಿರುವ ಸಚಿವ ಸಂಪುಟ ಉಪಸಮಿತಿ ಸದ್ಯದಲ್ಲೇ ಸಭೆ ಸೇರಿ ಎಷ್ಟು ಬೆಂಬಲ ಬೆಲೆ ನೀಡಬೇಕು ಎಂಬುದನ್ನು ನಿರ್ಧರಿಸಲಿದೆ. ಆದರೆ, ಈ ಬೆಂಬಲ ಬೆಲೆ ರೈತರಿಗೆ ಲಾಭದಾಯಕವಾಗುವುದಂತೂ ಖಚಿತ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಖಾತೆ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಅನ್ನಭಾಗ್ಯ ಯೋಜನೆ ಕುರಿತಂತೆ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಆಹಾರ ಇಲಾಖೆ ಅಧಿಕಾರಿಗಳೊಂದಿಗೆ ವೀಡಿಯೋ ಕಾನ್ಫರೆನ್ಸ್ ನಡೆಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ಬಿಪಿಎಲ್ ಕಾರ್ಡ್ದಾರರಿಗೆ ವಿತರಿಸಲು ಜೋಳ ಮತ್ತು ರಾಗಿ ಖರೀದಿಗೆ ಟೆಂಡರ್ ಪ್ರಕ್ರಿಯೆ ಮಂಗಳವಾರದಿಂದ ಆರಂಭವಾಗಲಿದ್ದು, 20 ದಿನಗಳಲ್ಲಿ ಮುಗಿಯಲಿದೆ. ಎಷ್ಟು ಜೋಳ ಮತ್ತು ರಾಗಿ ಲಭ್ಯವಾಗುತ್ತದೆ ಎಂಬುದು ಖಚಿತವಾದ ಬಳಿಕ ಬಿಪಿಎಲ್ ಕಾರ್ಡ್ದಾರರಿಗೆ ಎಷ್ಟು ವಿತರಿಸಬೇಕು ಎಂಬುದನ್ನು ನಿರ್ಧರಿಸಲಾಗುವುದು. ಇದರ ಜತೆಗೆ ಮುಂದಿನ ದಿನಗಳಲ್ಲಿ ಸರ್ಕಾರವೇ ನೇರವಾಗಿ ರೈತರಿಂದ ರಾಗಿ ಮತ್ತು ಜೋಳ ಖರೀದಿಸಲಿದ್ದು, ಇದಕ್ಕಾಗಿ ಹೆಚ್ಚಿನ ಬೆಂಬಲ ಬೆಲೆ ನಿಗದಿಪಡಿಸಲಾಗುವುದು ಎಂದು ಹೇಳಿದರು.
ಫೇರ್ ಪ್ರೈಸ್ ಲೆವೆಲ್ ಅಧಿಕಾರಿಗಳ ನೇಮಕ: ಎಪಿಎಲ್ ಮತ್ತು ಬಿಪಿಎಲ್ ಕಾರ್ಡ್ಗಾಗಿ ರಾಜ್ಯಾದ್ಯಂತ ಸುಮಾರು 25 ಲಕ್ಷ ಹೊಸ ಅರ್ಜಿಗಳು ಬಂದಿವೆ. ಈ ಪೈಕಿ ಬಿಪಿಎಲ್ ಕಾರ್ಡ್ಗೆ 20 ಲಕ್ಷ ಅರ್ಜಿಗಳು ಬಂದಿವೆ. ಪ್ರಸ್ತುತ ಆಹಾರ ಇಲಾಖೆ ಅಧಿಕಾರಿಗಳೇ ಈ ಅರ್ಜಿಗಳನ್ನು ಇತ್ಯರ್ಥಗೊಳಿಸುತ್ತಿದ್ದಾರೆ. ಇದರಿಂದ ಅರ್ಜಿಗಳು ವಿಲೇವಾರಿಯಾಗಿ ಅರ್ಹರಿಗೆ ಕಾರ್ಡ್ ಸಿಗುವುದು ವಿಳಂಬವಾಗುತ್ತದೆ. ಹೀಗಾಗಿ ಅರ್ಜಿಗಳನ್ನು ವಿಲೇವಾರಿ ಮಾಡಲು ಫೇರ್ ಪ್ರೈಸ್ ಲೆವೆಲ್ ಅಧಿಕಾರಿಗಳನ್ನು (ಎಫ್ಎಲ್ಒ) ನೇಮಿಸಲು ನಿರ್ಧರಿಸಲಾಗಿದೆ ಎಂದು ಹೇಳಿದರು.
ಎಫ್ಎಲ್ಒ ನೇರ ನೇಮಕಾತಿ ಮಾಡುವುದಿಲ್ಲ. ಬದಲಾಗಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿಗಳು, ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳಿಗೆ ಈ ಜವಾಬ್ದಾರಿ ವಹಿಸಿ, ಅದಕ್ಕಾಗಿ ಪ್ರತ್ಯೇಕ ಗೌರವಧನ ನೀಡಲಾಗುವುದು. ಈ ಕುರಿತಂತೆ ಪ್ರಸ್ತಾವನೆ ಸಿದ್ಧಪಡಿಸಿ ಮುಖ್ಯಮಂತ್ರಿಗಳಿಗೆ ಸಲ್ಲಿಸಲಾಗಿದ್ದು, ಅವರು ಒಪ್ಪಿಗೆ ನೀಡಿ ಸಂಪುಟ ಸಭೆಯಲ್ಲಿ ಅನುಮೋದನೆ ಸಿಕ್ಕಿದ ತಕ್ಷಣವೇ ಪಡಿತರ ಚೀಟಿಗಾಗಿ ಸಲ್ಲಿಸಿದ ಅರ್ಜಿಗಳ ವಿಲೇವಾರಿ ಪ್ರಕ್ರಿಯೆ ಆರಂಭಿಸಲಾಗುವುದು. ಎರಡು ತಿಂಗಳೊಳಗೆ ಈ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ತಿಳಿಸಿದರು.
ಜಿಲ್ಲಾಧಿಕಾರಿಗಳಿಗೆ ಉಸ್ತುವಾರಿ ಹೊಣೆ: ಅನ್ನಭಾಗ್ಯ ಯೋಜನೆಯಡಿ ಎಲ್ಲಾ ಜಿಲ್ಲೆಗಳಲ್ಲಿ ಸಮರ್ಪಕವಾಗಿ ಫಲಾನುಭವಿಗಳಿಗೆ ಅಕ್ಕಿ ವಿತರಣೆಯಾಗುವಂತೆ ನೋಡಿಕೊಳ್ಳುವ ಜವಾಬ್ದಾರಿಯನ್ನು ಜಿಲ್ಲಾಧಿಕಾರಿಗಳಿಗೆ ನೀಡಲಾಗಿದೆ. ಈ ಕುರಿತಂತೆ ವೀಡಿಯೋ ಕಾನ್ಫರೆನ್ಸ್ನಲ್ಲಿ ಸ್ಪಷ್ಟ ಸೂಚನೆ ನೀಡಲಾಗಿದೆ ಎಂದು ಹೇಳಿದರು.
ಪ್ರತಿ ತಿಂಗಳು ಜಿಲ್ಲಾಧಿಕಾರಿಗಳು ಆ ಜಿಲ್ಲೆಗೆ ಮಂಜೂರಾದ ಆಹಾರಧಾನ್ಯ ಎಷ್ಟು? ಅದು ಸಮರ್ಪಕವಾಗಿ ವಿತರಣೆಯಾಗಿದೆಯೇ ಎಂಬುದನ್ನು ನೋಡಿಕೊಳ್ಳಬೇಕು. ಜತೆಗೆ ಪಡಿತರ ವಿತರಣೆಯಲ್ಲಿ ಲೋಪವಾಗಿರುವ ಬಗ್ಗೆ ದೂರು ಬಂದರೆ ಕ್ರಮ ಕೈಗೊಳ್ಳಬೇಕು. ಪ್ರತಿ ತಿಂಗಳ 10ರೊಳಗೆ ತಾಲೂಕು ಗೋದಾಮುಗಳಿಂದ ನ್ಯಾಯ ಬೆಲೆ ಅಂಗಡಿಗಳಿಗೆ ಪಡಿತರ ರವಾನೆಯಾಗುವಂತೆ ನೋಡಿಕೊಳ್ಳಬೇಕು ಎಂದು ನಿರ್ದೇಶನ ನೀಡಲಾಗಿದೆ. ಅದೇ ರೀತಿ ಪ್ರತಿ ಆಹಾರ ನಿರೀಕ್ಷಕರು ತಿಂಗಳಿಗೊಂದು ನ್ಯಾಯಬೆಲೆ ಅಂಗಡಿಯನ್ನು ಸಮಗ್ರವಾಗಿ ಪರಿಶೀಲಿಸಿ ವರದಿ ಸಲ್ಲಿಸಬೇಕು ಎಂದು ಆದೇಶಿಸಲಾಗಿದೆ ಎಂದು ತಿಳಿಸಿದರು.
ಸೀಮೆಎಣ್ಣೆ ಸಬ್ಸಿಡಿ ನೇರವಾಗಿ ಬ್ಯಾಂಕ್ ಖಾತೆಗೆ
ಮೈಸೂರು ಮತ್ತು ತುಮಕೂರು ಜಿಲ್ಲೆಗಳಲ್ಲಿ ಅಡುಗೆ ಅನಿಲ ಸಿಲಿಂಡರ್ ಸಬ್ಸಿಡಿ ನೇರವಾಗಿ ಗ್ರಾಹಕರ ಬ್ಯಾಂಕ್ ಖಾತೆಗೆ ಹಾಕುವಂತೆ ಇನ್ನು ಮುಂದೆ ಪಡಿತರ ಸೀಮೆ ಎಣ್ಣೆ ಸಬ್ಸಿಡಿಯೂ ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರವಾಗಿ ತಲುಪಲಿದೆ. ಪ್ರಸ್ತುತ ರಾಜ್ಯದಲ್ಲಿ ಪ್ರತಿ ಲೀಟರ್ಗೆ 16.20ರಂತೆ ಪಡಿತರ ಸೀಮೆ ಎಣ್ಣೆ ಮಾರಾಟ ಮಾಡಲಾಗುತ್ತಿದೆ. ಉಳಿದ ಮೊತ್ತವನ್ನು ಸರ್ಕಾರ ಕಂಪನಿಗಳಿಗೆ ಪಾವತಿ ಮಾಡುತ್ತಿದೆ. ಇದೀಗ ಪಡಿತರ ಚೀಟಿ ಸಂಖ್ಯೆಯನ್ನು ಮತದಾರರ ಗುರುತಿನ ಚೀಟಿ ಸಂಖ್ಯೆ ಮತ್ತು ಆಧಾರ್ ಸಂಖ್ಯೆ ಜತೆ ಹೊಂದಾಣಿಕೆ ಮಾಡಲಾಗುತ್ತಿದೆ. ಪ್ರಸ್ತುತ ಮೈಸೂರು ಮತ್ತು ತುಮಕೂರು ಜಿಲ್ಲೆಗಳಲ್ಲಿ ಅಡುಗೆ ಅನಿಲ ಸಿಲಿಂಡರ್ ಸಬ್ಸಿಡಿ ನೇರವಾಗಿ ಗ್ರಾಹಕರ ಬ್ಯಾಂಕ್ ಖಾತೆಗೆ ವರ್ಗಾವಣೆಯಾಗುತ್ತದೆ. ಹೀಗಾಗಿ ಸೀಮೆ ಎಣ್ಣೆ ಸಬ್ಸಿಡಿಯನ್ನೂ ಈ ಜಿಲ್ಲೆಗಳಲ್ಲಿ ಫಲಾನುಭವಿಗಳ ಬ್ಯಾಂಕ್ ಖಾತೆಗೆ ವರ್ಗಾಯಿಸಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

