ಜ.7ರಿಂದ ಕನ್ನಡ ಸಾಹಿತ್ಯ ಜಾತ್ರೆ
ಮಡಿಕೇರಿ: ಅಖಿಲ ಭಾರತ 80ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ದಿನ ನಿಗದಿಯಾಗಿದ್ದು, ಜ.7ರಿಂದ 9ರವರೆಗೆ 3 ದಿನಗಳ ಕಾಲ ಮಡಿಕೇರಿಯಲ್ಲಿ ನಡೆಯಲಿದೆ.
ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಸ್.ಸಿ. ಮಹದೇವಪ್ಪ ಅಧ್ಯಕ್ಷತೆಯಲ್ಲಿ ಮಡಿಕೇರಿಯಲ್ಲಿ ಗುರುವಾರ ನಡೆದ ಅಖಿಲ ಭಾರತ 80ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿಯ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಯಿತು. ಅಲ್ಲದೇ ಸಮ್ಮೇಳನಕ್ಕೆ ಸರ್ಕಾರದಿಂದ 3 ಕೋಟಿ ಅನುದಾನ ಕೋರುವ ಬಗ್ಗೆಯೂ ಸಭೆಯಲ್ಲಿ ತೀರ್ಮಾನಿಸಲಾಯಿತು. ಇದೇ ಸಂದರ್ಭದಲ್ಲಿ ಸರ್ಕಾರಿ ಅಧಿಕಾರಿಗಳು ಅಧ್ಯಕ್ಷರಾಗಿ ಸಾರ್ವಜನಿಕ ಪ್ರಮುಖರು ಸಂಚಾಲಕರಾಗಿರುವ 27 ಉಪಸಮಿತಿಗಳಿಗೆ ಸದಸ್ಯರನ್ನು ನೇಮಿಸಲಾಯಿತು.
ಹೆಚ್ಚು ಅನುದಾನ ಬೇಡಿಕೆ: ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಟಿ.ಪಿ. ರಮೇಶ್ ಮಾತನಾಡಿ, ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸರ್ಕಾರ ತನ್ನ ಬಜೆಟ್ನಲ್ಲಿ 1 ಕೋಟಿ ಅನುದಾನ ನೀಡಿದೆ. ಆದರೆ, ಕೈಗಾರಿಕೆಗಳು, ವಾಣಿಜ್ಯ ಉದ್ದಿಮೆಗಳು ಹೆಚ್ಚಾಗಿಲ್ಲದ ಕೊಡಗಿನಲ್ಲಿ ಈ ಅಲ್ಪ ಅನುದಾನದಲ್ಲಿ ಸಮ್ಮೇಳನ ನಡೆಸಲು ಕಷ್ಟಸಾಧ್ಯವಾಗಬಹುದು. ಈ ಹಿನ್ನೆಲೆಯಲ್ಲಿ ಹೆಚ್ಚುವರಿಯಾಗಿ 2 ಕೋಟಿ ಸರ್ಕಾರದಿಂದ ಬಿಡುಗಡೆ ಮಾಡಿಸಬೇಕು ಎಂದು ಮನವಿ ಮಾಡಿದರು.
ಮಡಿಕೇರಿಯ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜ್ ಮೈದಾನದಲ್ಲಿ ಮುಖ್ಯ ಸಮ್ಮೇಳನ ನಡೆಸಿ, ಪೊಲೀಸ್ ಮೈದಾನ ಮತ್ತು ಮೈತ್ರಿ ಸಭಾಂಗಣದಲ್ಲಿ ಊಟೋಪಾಚಾರದ ವ್ಯವಸ್ಥೆ ಮಾಡಲಾಗುತ್ತದೆ ಎಂದು ಅವರು ಮಾಹಿತಿ ನೀಡಿದರು. ವಿರಾಜಪೇಟೆ ಶಾಸಕ ಕೆ.ಜಿ. ಬೋಪಯ್ಯ ಮಾತನಾಡಿ, ಅತಿಥಿ ಸತ್ಕಾರಕ್ಕೆ ಹೆಸರಾದ ಕೊಡಗಿನಲ್ಲಿ ನಡೆಯುವ ಸಮ್ಮೇಳನ ಕೊಡಗಿನವರು ಆತಿಥ್ಯ ಪ್ರಿಯರು ಎಂಬ ಹೆಸರನ್ನು ಉಳಿಸುವ ರೀತಿಯಲ್ಲಿ ನಡೆಯಬೇಕು ಎಂದರು.
ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಮಾತನಾಡಿ, 'ಸಮ್ಮೇಳನದಲ್ಲಿ ಸಣ್ಣ ಪುಟ್ಟ ಲೋಪಗಳು ದೊಡ್ಡದಾಗದಂತೆ ಗಮನ ಹರಿಸಿ, ಸಮ್ಮೇಳನದ ಮೂಲ ಉದ್ದೇಶಕ್ಕೆ ಚ್ಯುತಿ ಬಾರದಂತೆ ಅಚ್ಚುಕಟ್ಟಾಗಿ ವ್ಯವಸ್ಥೆಗೊಳಿಸಿ. ಸಮ್ಮೇಳನದ ಸಂದರ್ಭದಲ್ಲಿ ಸಾಹಿತ್ಯದ ರಸದೌತಣ ಸಮಸ್ತ ಕನ್ನಡಿಗರಿಗೂ ದೊರಕುವಂತಾಗಬೇಕು' ಎಂದರು. ಇದೇ ಸಂದರ್ಭದಲ್ಲಿ ಅಖಿಲ ಭಾರತ 80 ನೇ ಕನ್ನಡಸಾಹಿತ್ಯ ಸಮ್ಮೇಳನದ ಲಾಂಛನ ಬಿಡುಗಡೆಗೊಳಿಸಲಾಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

