ನೋಟಿಸ್ ನೀಡಲಿಕ್ಕೂ ಗಟ್ಸ್ ಇಲ್ವೇ?

ಕನ್ನಡಪ್ರಭ ವಾರ್ತೆ, ಬೆಂಗಳೂರು, ಸೆ.18-
ಅಕ್ರಮವಾಗಿ ನೇಮಕಗೊಂಡಿರುವ ಆರೋಪ ಎದುರಿಸುತ್ತಿರುವ ಅಧಿಕಾರಿಗಳಿಗೆ ಕನಿಷ್ಠ ಶೋಕಾಸ್ ನೋಟಿಸ್ ಜಾರಿ ಮಾಡಲೂ ನಿಮಗೆ (ಸರ್ಕಾರಕ್ಕೆ) ತಾಕತ್ತಿಲ್ಲ...
ಇದು ಕರ್ನಾಟಕ ಲೋಕಸೇವಾ ಆಯೋಗದ(ಕೆಪಿಎಸ್ಸಿ) ವತಿಯಿಂದ 1998, 1999 ಹಾಗೂ 2004ರಲ್ಲಿ
ಗೆಜೆಟೆಡ್ ಪ್ರೊಬೆಷನರ್ಸ್ ಹುದ್ದೆಗಳ ಭರ್ತಿಯಲ್ಲಿ ಆಗಿರುವ ಅಕ್ರಮಗಳ ವಿರುದ್ಧ ಕ್ರಮ ತೆಗೆದುಕೊಳ್ಳದ ಸರ್ಕಾರವನ್ನು ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದ್ದು ಹೀಗೆ.
ನೇಮಕ ಪ್ರಕ್ರಿಯೆಯಲ್ಲಿ ಅಕ್ರಮವಾಗಿರುವುದು ಮೇಲ್ನೋಟಕ್ಕೆ ಸಾಬೀತಾಗಿದೆ ಎಂದು ಸಿಐಡಿ ವರದಿ ನೀಡಿದ್ದರೂ, ಆರೋಪಿಗಳ ವಿರುದ್ಧ ಯಾವುದೇ ಕ್ರಮ ತೆಗೆದುಕೊಳ್ಳಲು ಸರ್ಕಾರ ಮನಸ್ಸು ಮಾಡುತ್ತಿಲ್ಲ. ಒಂದೆಡೆ ಕೆಪಿಎಸ್ಸಿ ತನಿಖೆಗೆ ಸಹಕರಿಸುತ್ತಿಲ್ಲ ಎಂದು ಆರೋಪಿಸುತ್ತಿದೆ. ಇನ್ನೊಂದೆಡೆ, ಸಿಐಡಿ ವರದಿ ಕೇವಲ ಮಾಹಿತಿಯಷ್ಟೇ ಎಂಬ ಉಡಾಫೆ ಧೋರಣೆ ತೋರುತ್ತಿದೆ. ಅಕ್ರಮವಾಗಿ ಹುದ್ದೆ ಗಳಿಸಿದವರನ್ನು ಪ್ರಶ್ನಿಸುವ ತಾಕತ್ತು ಸರ್ಕಾರಕ್ಕೆ ಇಲ್ಲ ಎಂಬುದು ಇದರಿಂದ ಸ್ಪಷ್ಟವಾಗುತ್ತದೆ ಎಂದು ಮುಖ್ಯ ನ್ಯಾ.ಡಿ.ಎಚ್. ವಘೇಲ ಹಾಗೂ ನ್ಯಾ.ಬಿ.ವಿ. ನಾಗರತ್ನ ಅವರಿದ್ದ ವಿಭಾಗೀಯ ಪೀಠ ತರಾಟೆಗೆ ತೆಗೆದುಕೊಂಡಿತು.
ಅಕ್ರಮವಾಗಿ ನೇಮಕವಾಗಿರುವ ಆರೋಪ ಎದುರಿಸುತ್ತಿರುವ ಆರೋಪಿಗಳ ಉತ್ತರ ಪತ್ರಿಕೆಗಳನ್ನು ಪರಿಶೀಲಿಸಲು ಹೆಚ್ಚಿನ ಕಾಲಾವಕಾಶ ಕೋರಿದ ಕೆಪಿಎಸ್ಸಿಯ ಮನವಿಯನ್ನು ತಿರಸ್ಕರಿಸಿರುವ ಪೀಠ, ಪದೇ ಪದೇ ಕಾಲಾವಕಾಶ ಕೊಟ್ಟರೂ ಪ್ರಯೋಜನವಾಗುತ್ತಿಲ್ಲ. ಕೆಪಿಎಸ್ಸಿಯೇನು ಸಂವಿಧಾನಕ್ಕಿಂತ ದೊಡ್ಡದೇ ಎಂದು ಬೇಸರ ವ್ಯಕ್ತಪಡಿಸಿದೆ. ನೀವು ಯಾರನ್ನು ರಕ್ಷಿಸಲು ಪ್ರಯತ್ನಿಸುತ್ತಿದ್ದೀರಿ ಎಂದು ಸರ್ಕಾರವನ್ನು ಪ್ರಶ್ನಿಸಿತು.
ವಿಚಾರಣೆ ವೇಳೆ ಹಾಜರಿದ್ದ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸಂಜೀವ್ ಕುಮಾರ್, ಗೆಜೆಟೆಡ್ ಪ್ರೊಬೆಷನರ್ಸ್ ಹುದ್ದೆಯ 9 ಉತ್ತರ ಪತ್ರಿಕೆಗಳನ್ನು ಮೂರನೇ ಬಾರಿಗೆ ಮರುಪರಿಶೀಲನೆ ನಡೆಸಲಾಗುತ್ತಿದೆ. ಉತ್ತರ ಪತ್ರಿಕೆಗಳ ಪರಿಶೀಲನೆ ನಂತರ ಆಯ್ಕೆ ಪಟ್ಟಿಯನ್ನು ಹೊಸದಾಗಿ ತಯಾರಿಸಲಾಗುವುದು. ಅದಕ್ಕಾಗಿ ಕಾಲಾವಕಾಶದ ಅಗತ್ಯವಿದೆ ಎಂದು ಮನವಿ ಮಾಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


