ಭಾಷಾ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆ ಮಾನ್ಯತೆ ಪಟ್ಟಿಗೆ ತಿಂಗಳ ಗಡುವು
ಬೆಂಗಳೂರು: ಭಾಷಾ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಯ ಮಾನ್ಯತೆ ಕೋರಿ ಶಿಕ್ಷಣ ಸಂಸ್ಥೆಗಳು ಸಲ್ಲಿಸಿರುವ ಅರ್ಜಿಗಳನ್ನು ಪರಿಶೀಲಿಸಿ ಒಂದು ತಿಂಗಳಲ್ಲಿ ಅಂತಿಮ ಪಟ್ಟಿ ತಯಾರಿಸಲು ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ.
ಸರ್ಕಾರದ ಅಂತಿಮ ಪಟ್ಟಿ ತಯಾರಾಗುವವರೆಗೆ, ಆರ್ಟಿಇ ಕಾಯ್ದೆಯಲ್ಲಿ ಮಕ್ಕಳನ್ನು ದಾಖಲಿಸಿಕೊಳ್ಳುವಂತೆ ಈ ಶಾಲೆಗಳ ಮೇಲೆ ಒತ್ತಡ ಹೇರುವಂತಿಲ್ಲ ಎಂದು ಸರ್ಕಾರಕ್ಕೆ ನ್ಯಾಯಪೀಠ ಸ್ಪಷ್ಟಪಡಿಸಿದೆ.
ಈ ನಡುವೆ, ತಾವು ಅಲ್ಪಸಂಖ್ಯಾತ ಶಾಲೆಗಳಿಗೆ ವಿಧಿಸಿದ್ದ ನಿಯಮಗಳನ್ನು ಸಡಿಲಗೊಳಿಸಲು ಸಿದ್ಧವಿದ್ದು, ಮುಂದಿನ ಒಂದು ತಿಂಗಳಲ್ಲಿ ಮಾನ್ಯತೆ ಗೊಂದಲಕ್ಕೆ ತೆರೆ ಎಳೆಯುವುದಾಗಿ ನೀಡಿರುವ ಹೇಳಿಕೆಗೆ ಬದ್ಧರಾಗಿದ್ದೇವೆ ಎಂದು ಅಡ್ವೊಕೇಟ್ ಜನರಲ್ ಪ್ರೊ. ರವಿವರ್ಮಕುಮಾರ್ ಸ್ಪಷ್ಟಪಡಿಸಿದರು.
ಇದನ್ನು ಪೀಠ ಪರಿಗಣಿಸಿತಾದರೂ, ಅಲ್ಲಿಯವರೆಗೆ ಮಕ್ಕಳನ್ನು ಶಾಲೆಗೆ ದಾಖಲಿಸಿಕೊಳ್ಳಲು ನಿರ್ದೇಶನ ನೀಡಬೇಕು. ಇಲ್ಲದಿದ್ದಲ್ಲಿ ಮಕ್ಕಳ ಮೂಲಭೂತ ಹಕ್ಕು ಉಲ್ಲಂಘನೆಯಾಗುತ್ತದೆ ಎಂಬ ಅವರ ಮನವಿಯನ್ನು ಪರಿಗಣಿಸಲು ನಿರಾಕರಿಸಿತು. ರಾಷ್ಟ್ರೀಯ ಶಿಕ್ಷಣ ಸಂಸ್ಥೆ ಸೇರಿದಂತೆ ಇತರ ಶಿಕ್ಷಣ ಸಂಸ್ಥೆಗಳು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ.ಆನಂದ ಭೈರಾರೆಡ್ಡಿ ಅವರಿದ್ದ ಏಕಸದಸ್ಯ ಪೀಠ, ಕೆಲ ಶಿಕ್ಷಣ ಸಂಸ್ಥೆಗಳ ಅರ್ಜಿಗಳನ್ನು ಇತ್ಯರ್ಥಗೊಳಿಸಿತು. ಇನ್ನುಳಿದ ಅರ್ಜಿಗಳ ವಿಚಾರಣೆಯನ್ನು ಮುಂದೂಡಿದ್ದು, ಈ ಅರ್ಜಿಗಳಿಗೆ ಸಂಬಂಧಿಸಿದಂತೆ ಮಧ್ಯಂತರ ಆದೇಶ ಮುಂದುವರಿಯುತ್ತದೆ ಎಂದು ಸ್ಪಷ್ಟಪಡಿಸಿತು.
ವಿವಾದವೇನು?
ಸುಪ್ರೀಂಕೋರ್ಟ್ ಆದೇಶದ ಮೇರೆಗೆ ಸರ್ಕಾರ 2012ರ ನಂತರ ರಾಜ್ಯದಲ್ಲಿ ಆರ್ಟಿಇ ಕಡ್ಡಾಯವಾಗಿ ಜಾರಿಗೊಳಿಸಿದ ನಂತರ, ಕೆಲ ಶಾಲೆಗಳು ತಮ್ಮದು ಭಾಷಾ ಅಲ್ಪಸಂಖ್ಯಾತ ಶಾಲೆಯಾಗಿದ್ದು, ಈ ಸಂಬಂಧ ಮಾನ್ಯತೆ ನೀಡಬೇಕು ಎಂದು ಕೋರಿ ಸರ್ಕಾರಕ್ಕೆ ಅರ್ಜಿ ಸಲ್ಲಿಸಿದ್ದವು. ಆದರೆ, ಅಲ್ಪಸಂಖ್ಯಾತ ಶಾಲೆಗಳ ಪರಿಗಣನೆಗೆ ಸೂಕ್ತ ಮಾನದಂಡ ಹಾಗೂ ಸಮಿತಿ ರಚನೆಯಾಗದ ಹಿನ್ನೆಲೆಯಲ್ಲಿ ಸರ್ಕಾರ ಈ ಅರ್ಜಿಗಳನ್ನು ಪರಿಗಣಿಸಿರಲಿಲ್ಲ. ಅರ್ಜಿ ಸಲ್ಲಿಸಿರುವುದನ್ನೇ ಆಧಾರವಾಗಿರಿಸಿಕೊಂಡು ಈ ಶಾಲೆಗಳು ಪ್ರಸಕ್ತ ಸಾಲಿನಲ್ಲಿ ಮಕ್ಕಳನ್ನು ಆರ್ಟಿಇ ವ್ಯಾಪ್ತಿಯಲ್ಲಿ ದಾಖಲು ಮಾಡಿಕೊಳ್ಳಲು ನಿರಾಕರಿಸಿದ್ದವು. ಈ ನಡುವೆ, ಆರ್ಟಿಇ ಎಲ್ಲಾ ಶಾಲೆಗಳಿಗೂ ಅನ್ವಯಿಸುತ್ತದೆ ಎಂದು ಸರ್ಕಾರ ಸುತ್ತೋಲೆ ಹೊರಡಿಸಿತ್ತು. ಇದನ್ನು ಪ್ರಶ್ನಿಸಿ ಶಿಕ್ಷಣ ಸಂಸ್ಥೆಗಳು ಹೈಕೋರ್ಟ್ ಮೆಟ್ಟಿಲೇರಿದ್ದವು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

