'ಕೈ' ಸಮನ್ವಯ ಸಭೆ ಅಂತ್ಯ: ಡಿಸಿಎಂ ಹುದ್ದೆ ಇಲ್ಲ, ಸಂಪುಟ ವಿಸ್ತರಣೆಗೆ ಅಸ್ತು

ಬೆಂಗಳೂರು: ರಾಜ್ಯದಲ್ಲಿ ಮೂರು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯಲ್ಲಿ ಎರಡು ಸ್ಥಾನಗಳಲ್ಲಿ ಗೆದ್ದು ಸಂಭ್ರಮದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಈಗ ಸಂಪುಟ ಸಂಕಟ ಶುರುವಾಗಿದೆ.
ಈ ಸಂಬಂಧ ಇಂದು ರಾಜ್ಯ ಉಸ್ತುವಾರಿ ದಿಗ್ವಿಜಯ್ ಸಿಂಗ್ ಅವರ ನೇತೃತ್ವದಲ್ಲಿ ಕೆಪಿಸಿಸಿ ಕಚೇರಿಯಲ್ಲಿ ನಡೆಯುತ್ತಿದ್ದ ಕಾಂಗ್ರೆಸ್ ಸಮನ್ವಯ ಸಮಿತಿ ಸಭೆ ಅಂತ್ಯವಾಗಿದ್ದು, ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಅವರಿಗೆ ಉಪ ಮುಖ್ಯಮಂತ್ರಿ ಹುದ್ದೆ ನೀಡುವ ಬಗ್ಗೆ ಯಾವುದೇ ಚರ್ಚೆ ಆಗಿಲ್ಲ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಚಿವ ಸಂಪುಟ ವಿಸ್ತರಣೆಗೆ ಹೈಕಮಾಂಡ್ ಅಸ್ತು ಎಂದಿದೆ.
ಸಭೆಯ ಬಳಿಕ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ದಿಗ್ವಿಜಯ್ ಸಿಂಗ್ ಅವರು, ಇತ್ತೀಚಿಗೆ ನಡೆದ ಉಪ ಚುನಾವಣೆಯಲ್ಲಿ ಪಕ್ಷ ಮೂರು ಸ್ಥಾನಗಳ ಪೈಕಿ ಎರಡು ಸ್ಥಾನಗಳಲ್ಲಿ ಗೆಲುವು ಸಾಧಿಸಿರುವುದು ಹರ್ಷ ತಂದಿದೆ ಎಂದರು. ಅಲ್ಲದೆ ಮೂರು ಕ್ಷೇತ್ರಗಳ ಮತದಾರರಿಗೆ ಕೃತಜ್ಞತೆ ಸಲ್ಲಿಸಿದರು.
ಇನ್ನು ಸಂಪುಟ ವಿಸ್ತರಣೆ ಮತ್ತು ಡಿಸಿಎಂ ಹುದ್ದೆ ನೀಡುವ ವಿಚಾರ ಸಿಎಂಗೆ ಬಿಟ್ಟಿದ್ದು, ಅವರು ಎಲ್ಲರೊಂದಿಗೆ ಚರ್ಚಿಸಿ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ದಿಗ್ವಿಜಯ್ ಸಿಂಗ್ ಹೇಳಿದರು.
ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ.ಜಯಚಂದ್ರ ಅವರನ್ನು ಸ್ಪೀಕರ್ ಮಾಡಿ, ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರನ್ನು ಸಚಿವರನ್ನಾಗಿ ಮಾಡಿ ಎಂದು ಸಭೆಯಲ್ಲಿ ಪರಮೇಶ್ವರ ಆಗ್ರಹಿಸಿದರು. ಅಲ್ಲದೆ ತಮ್ಮನ್ನು ಉಪ ಮುಖ್ಯಮಂತ್ರಿ ಮಾಡದಿದ್ದರೂ ಪರವಾಗಿಲ್ಲ, ಸಚಿವ ಸ್ಥಾನ ನೀಡಿ, ಜಿಲ್ಲಾ ಉಸ್ತುವಾರಿ ನೀಡುವಂತೆ ಪರಮೇಶ್ವರ ಅವರು ದಿಗ್ವಿಜಯ್ ಸಿಂಗ್ ಅವರನ್ನು ಒತ್ತಾಯಿಸಿದರು ಎನ್ನಲಾಗಿದೆ.
ಸಿಎಂ ಸಿದ್ದರಾಮಯ್ಯ ಅವರು ಸಂಪುಟ ವಿಸ್ತರಣೆ ಸಾಕು, ಪುನರಚನೆ ಬೇಡ ಎನ್ನುತ್ತಿದ್ದಾರೆ. ಆದರೆ ಕೆಲವು ಸಚಿವರ ಮೇಲೆ ಮುನಿಸಿಕೊಂಡಿರುವ ಶಾಸಕರು, ಸಚಿವರಾದ ಬಾಬುರಾವ್ ಚಿಂಚನಸೂರು, ಅಂಬರೀಶ್, ಶಾಮನೂರು ಶಿವಶಂಕರಪ್ಪ ಹಾಗೂ ಕಿಮ್ಮನೆ ರತ್ನಾಕರ್ ಅವರನ್ನು ಸಂಪುಟದಿಂದ ಕೈ ಬಿಡಬೇಕು ಎಂದು ಒತ್ತಾಯಿಸಿದ್ದಾರೆ ಎನ್ನಲಾಗಿದೆ.
ಸಭೆಯಲ್ಲಿ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಸೇರಿದಂತೆ ನಿಗಮ ಮಂಡಳಿಗಳಿಗೆ ಶಾಸಕರನ್ನು, ಕಾರ್ಯಕರ್ತರನ್ನು ನೇಮಕ ಮಾಡುವ ಬಗ್ಗೆ ಮತ್ತು ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರ ಅಸಮಾಧಾನದ ಬಗ್ಗೆಯೂ ಚರ್ಚೆ ನಡೆಸಲಾಯಿತು.
ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ, ಇಂಧನ ಸಚಿವ ಡಿ.ಕೆ.ಶಿವಕುಮಾರ್ ಹಾಗೂ ಗೃಹ ಸಚಿವ ಕೆ.ಜೆ.ಜಾರ್ಜ್ ಸಭೆಯಲ್ಲಿ ಭಾಗವಹಿಸಿದ್ದರು.
ಈ ಮಧ್ಯೆ, ಸಮನ್ವಯ ಸಮಿತಿ ಸಭೆಗೂ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿರುವ ಸಿಎಂ, ಸಭೆಯಲ್ಲಿ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಬಗ್ಗೆ ಯಾವುದೇ ಚರ್ಚೆ ಮಾಡುವುದಿಲ್ಲ ಮತ್ತು ಗಣೇಶ್ ಹಬ್ಬದ ನಂತರವೇ ಸಂಪುಟ ವಿಸ್ತರಣೆ ಮಾಡಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.
ಸಮನ್ವಯ ಸಭೆಗೂ ಮುನ್ನ ಶಾಸಕರಾದ ಶಿವಶಂಕರ ರೆಡ್ಡಿ, ಅಶೋಕ್ ಪಟ್ಟಣ್, ಮಾಲೀಕಯ್ಯ ಗುತ್ತೇದಾರ್ ಹಾಗೂ ರಾಜಶೇಖರ್ ಪಾಟೀಲ್ ಸೇರಿದಂತೆ ಹಲವು ಸಚಿವ ಆಕಾಂಕ್ಷಿಗಳು ಕುಮಾರಕೃಪಾ ಅತಿಥಿ ಗೃಹದಲ್ಲಿ ದಿಗ್ವಿಜಯ್ ಸಿಂಗ್ ಅವರನ್ನು ಭೇಟಿ ತಮಗೂ ಸಚಿವ ಸ್ಥಾನ ನೀಡುವಂತೆ ಮನವಿ ಮಾಡಿದ್ದಾರೆ.
ಇನ್ನು ಕುಮಾರ ಕೃಪಾ ಬಳಿ ಜಮಾಯಿಸಿದ್ದ ಹುಮ್ನಾಬಾದ್ ಶಾಸಕ ರಾಜಶೇಖರ್ ಪಾಟೀಲ್ ಅವರ ಬೆಂಬಲಗರು ತಮ್ಮ ನಾಯಕನಿಗೆ ಸಚಿವ ಸ್ಥಾನ ನೀಡುವಂತೆ ದಿಗ್ವಿಜಯ್ ಸಿಂಗ್ ಅವರನ್ನು ಒತ್ತಾಯಿಸಿದರು. ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿರುವ ರಾಜಶೇಖರ್ ಪಾಟೀಲ್ ಅವರು, ಕಾಂಗ್ರೆಸ್ ಸರ್ಕಾರದಲ್ಲಿ ಬೀದರ್ ಜಿಲ್ಲೆಗೆ ಸೂಕ್ತ ಸ್ಥಾನಮಾನ ಸಿಕ್ಕಿಲ್ಲ. ಹೀಗಾಗಿ ಸಚಿವ ಸಂಪುಟ ವಿಸ್ತರಣೆ ವೇಳೆ ನಮ್ಮನ್ನು ಪರಿಗಣಿಸಬೇಕು ಎಂದು ಮನವಿ ಮಾಡಲಾಗಿದೆ ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


