ಅಂಬಿ ಚೇತರಿಕೆ

ಬೆಂಗಳೂರು: ಅಂಬರೀಷ್ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ಅಭಿಮಾನಿಗಳು ಆತಂಕ ಪಡುವ ಅಗತ್ಯವಿಲ್ಲ ಎಂದು ಕುಟುಂಬ ಹಾಗೂ ಆಸ್ಪತ್ರೆ ಮೂಲಗಳು ತಿಳಿಸಿವೆ. ಉಸಿರಾಟ ಸಮಸ್ಯೆ, ಜ್ವರ ಹಾಗೂ ಬೆನ್ನಿನ ಭಾಗದಲ್ಲಿ ಕುರುವಾದ ಹಿನ್ನೆಲೆಯಲ್ಲಿ ಅಸ್ವಸ್ಥರಾಗಿದ್ದ ಅವರನ್ನು ಶುಕ್ರವಾರ ರಾತ್ರಿ ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶ್ವಾಸಕೋಶದ ಸೋಂಕಿನ ಸಮಸ್ಯೆಯೂ ಕಾಣಿಸಿಕೊಂಡಿದ್ದರಿಂದ ಅವರಿಗೆ ತೀವ್ರ ನಿಗಾ ಘಟಕದಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿತ್ತು. ವೈದ್ಯರಾದ ಡಾ.ಸತೀಶ್, ಡಾ.ರಂಗನಾಥ್ ನಾಯ್ಕ್ ನೇತೃತ್ವದಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಶ್ವಾಸಕೋಶದಲ್ಲಿ ಸೇರುತ್ತಿರುವ ನೀರನ್ನು ಪ್ರತಿ 2 ಗಂಟೆಗೊಮ್ಮೆ ಹೊರಹಾಕಲಾಗುತ್ತಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇಂದ್ರ ಸಚಿವ ಡಾ.ಎಂ.ವೀರಪ್ಪ ಮೊಯ್ಲಿ, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ, ಇಂಧನ ಸಚಿವ ಡಿ.ಕೆ.ಶಿವಕುಮಾರ್, ಗೃಹ ಸಚಿವ ಕೆ.ಜೆ.ಜಾರ್ಜ್, ಲೋಕೋಪಯೋಗಿ ಸಚಿವ ಎಚ್.ಎಸ್.ಮಹಾದೇವಪ್ಪ, ಆರೋಗ್ಯ ಸಚಿವ ಯು.ಟಿ.ಖಾದರ್, ಶಾಸಕ ಚಲುವರಾಯಸ್ವಾಮಿ, ವಿಧಾನ ಪರಿಷತ್ ಸದಸ್ಯರಾದ ಎಂ.ಸಿ.ನಾಣಯ್ಯ, ಸಂದೇಶ್ ನಾಗರಾಜ್, ಜೆಡಿಯು ರಾಜ್ಯಾಧ್ಯಕ್ಷ ಡಾ.ಎಂ.ಪಿ.ನಾಡಗೌಡ, ಚಿತ್ರರಂಗದ ಗಣ್ಯರಾದ ಶಿವರಾಜ್ಕುಮಾರ್, ದರ್ಶನ್, ಸುದೀಪ್, ರವಿಚಂದ್ರನ್, ಪುನೀತ್ ರಾಜಕುಮಾರ್, ರಕ್ಷಿತಾ, ಲೀಲಾವತಿ, ಮುಖ್ಯಮಂತ್ರಿ ಚಂದ್ರು ಸೇರಿದಂತೆ ಹಲವಾರು ಗಣ್ಯರು ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.
ಕೃಷ್ಣ ಪ್ರವಾಸ ಮೊಟಕು : ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಹಾಗೂ ಹಿರಿಯ ಕಾಂಗ್ರೆಸ್ ನಾಯಕರ ಜತೆ ಚರ್ಚೆ ನಡೆಸಲು ದೆಹಲಿಗೆ ತೆರಳಿದ್ದ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ, ಅಂಬರೀಷ್ ಅನಾರೋಗ್ಯದ ಸುದ್ದಿ ಕೇಳಿ ತಮ್ಮ ಪ್ರವಾಸವನ್ನು ಮೊಟಕುಗೊಳಿಸಿದ್ದಾರೆ.
ಶನಿವಾರ ರಾತ್ರಿಯೇ ಅವರು ದೆಹಲಿಯಿಂದ ವಾಪಾಸ್ ಆಗಿದ್ದು, ಭಾನುವಾರ ಬೆಳಗ್ಗೆ ಆಸ್ಪತ್ರೆಗೆ ತೆರಳಿ ಆರೋಗ್ಯ ವಿಚಾರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಭೇಟಿ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಡಾ.ಪರಮೇಶ್ವರ ಹಾಗೂ ಡಿ.ಕೆ. ಶಿವಕುಮಾರ್, ಅಂಬರೀಷ್ ಚೇತರಿಸಿಕೊಳ್ಳುತ್ತಿದ್ದು, ಅಭಿಮಾನಿಗಳು ಆತಂಕ ಪಡಬೇಕಿಲ್ಲ. ಶೀಘ್ರದಲ್ಲೇ ಅವರು ಗುಣಮುಖರಾಗುತ್ತಾರೆ ಎಂದು ಹೇಳಿದ್ದಾರೆ. ಆದರೆ ಅಂಬರೀಷ್ ಆರೋಗ್ಯದ ಬಗ್ಗೆ ಪತ್ನಿ ಸುಮಲತಾ ಯಾವುದೇ ಹೇಳಿಕೆ ನೀಡದೇ ಇರುವುದರಿಂದ ಅಭಿಮಾನಿಗಳು ಆತಂಕಕ್ಕೆ ಒಳಗಾಗಿದ್ದರು. ಆದರೆ ಸುಮಲತಾ ಪರವಾಗಿ ಚಿತ್ರನಟ ದರ್ಶನ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ್ದು, ಅಂಬರೀಶ್ ಆರೋಗ್ಯದ ಬಗ್ಗೆ ಭಯ ಪಡುವ ಅಗತ್ಯವಿಲ್ಲ. ಅಭಿಮಾನಿಗಳು ಗಾಳಿ ಸುದ್ದಿಗೆ ಕಿವಿಗೊಡಬಾರದು ಎಂದು ಮನವಿ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


