ಬಿಎಸ್ವೈಗೆಹೊಸ ಹೊಣೆ

ಬೆಂಗಳೂರು: ಕೆಜೆಪಿಯನ್ನು ಬಿಜೆಪಿ ಜತೆ ವಿಲೀನಗೊಳಿಸಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಮುಂಬರುವ ಲೋಕಸಭೆ ಚುನಾವಣೆ ಜವಾಬ್ದಾರಿ ವಹಿಸುವ ಬಗ್ಗೆ ಬಿಜೆಪಿ ಗಂಭೀರ ಚಿಂತನೆ ನಡೆಸಿದೆ.
ಇದರ ಜತೆಗೆ ಯಡಿಯೂರಪ್ಪ ಅವರು ಬಯಸಿದರೆ ಅವರಿಗೆ ಶಿವಮೊಗ್ಗ ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸಲು ಅವಕಾಶ ಮಾಡಿಕೊಡಲು ಕೂಡ ಮುಂದಾಗಿದೆ. ಯಡಿಯೂರಪ್ಪ ಮತ್ತು ಅವರ ಕೆಜೆಪಿ ಬೆಂಬಲಿಗರೆಲ್ಲರೂ ಜ.9ರ ಗುರುವಾರ ಬೆಂಗಳೂರಿನಲ್ಲಿ ಅಧಿಕೃತವಾಗಿ ಬಿಜೆಪಿ ಸೇರಲಿದ್ದಾರೆ. ಇದಾದ ಬಳಿಕ ಯಡಿಯೂರಪ್ಪ ಮತ್ತು ಅವರ ಬೆಂಬಲಿಗರಿಗೆ ಸ್ಥಾನಮಾನ ನೀಡುವ ಬಗ್ಗೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.
ಯಡಿಯೂರಪ್ಪ ಅವರು ಯಾವುದೇ ಷರತ್ತು ಇಲ್ಲದೆ ಬಿಜೆಪಿ ಸೇರುತ್ತಿದ್ದಾರೆ. ಪ್ರಸ್ತುತ ಜಗದೀಶ್ ಶೆಟ್ಟರ್ ಅವರು ಬಿಜೆಪಿ ಶಾಸಕಾಂಗ ಪಕ್ಷದ ನಾಯಕರು.
ಅದೇ ರೀತಿ ಪ್ರಹ್ಲಾದ ಜೋಶಿ ಬಿಜೆಪಿ ರಾಜ್ಯಾಧ್ಯಕ್ಷರು. ಲೋಕಸಭೆ ಚುನಾವಣೆ ಸಮೀಪಿಸುತ್ತಿರುವುದರಿಂದ ಈ ಎರಡೂ ಸ್ಥಾನಗಳಲ್ಲಿ ಬದಲಾವಣೆ ಮಾಡುವ ಸ್ಥಿತಿಯಲ್ಲಿ ಬಿಜೆಪಿ ಇಲ್ಲ. ಮೇಲಾಗಿ ಸದ್ಯಕ್ಕೆ ಯಡಿಯೂರಪ್ಪ ಅವರು ಈ ಎರಡೂ ಸ್ಥಾನಗಳನ್ನು ಬಯಸುತ್ತಿಲ್ಲ. ಲೋಕಸಭೆ ಚುನಾವಣೆಯಲ್ಲಿ ತಮ್ಮ ಸಾಮರ್ಥ್ಯ ನೋಡಿ ನಂತರವೇ ಸ್ಥಾನಮಾನ ನೀಡಿ ಎಂದು ಹೇಳಿದ್ದಾರೆ.
ಪ್ರಚಾರ ನೇತೃತ್ವ: ಈ ಹಿನ್ನೆಲೆಯಲ್ಲಿ ಯಡಿಯೂರಪ್ಪ ಅವರಿಗೆ ಲೋಕಸಭೆ ಚುನಾವಣೆ ಪ್ರಚಾರದ ನೇತೃತ್ವ ವಹಿಸುವ ಬಗ್ಗೆ ಪಕ್ಷ ಚಿಂತನೆ ನಡೆಸುತ್ತಿದ್ದು, ಅವರನ್ನು ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷರನ್ನಾಗಿ ಮಾಡುವ ಸಾಧ್ಯತೆಗಳಿವೆ.
ಒಂದು ವೇಳೆ ಅವರು ಶಿವಮೊಗ್ಗ ಕ್ಷೇತ್ರದಿಂದ ಲೋಕಸಭೆಗೆ ಸ್ಪರ್ಧಿಸಲು ಮುಂದಾದರೆ ಅದಕ್ಕೂ ಪಕ್ಷ ಒಪ್ಪಿಗೆ ನೀಡಲಿದೆ. ಇದಕ್ಕಾಗಿ ತಮಗೆ ಲೋಕಸಭೆ ಚುನಾವಣೆ ಉಸ್ತುವಾರಿ ಬೇಡ ಎಂದು ಹೇಳಿದರೂ ಅವರ ನೇತೃತ್ವದಲ್ಲಿ ಮತ್ತು ಸಾಮೂಹಿಕ ನಾಯಕತ್ವದಲ್ಲೇ ಚುನಾವಣೆಗೆ ಹೋಗುವುದು ಸೂಕ್ತ ಎಂಬುದು ಬಿಜೆಪಿ ನಾಯಕರ ಅಭಿಪ್ರಾಯವಾಗಿದೆ.
ಕಳೆದ ವಿಧಾನಸಭೆ ಚುನಾವಣೆ ವೇಳೆ ಯಡಿಯೂರಪ್ಪ ಅವರು ಬಿಜೆಪಿ ತೊರೆದು ಕೆಜೆಪಿ ಕಟ್ಟಿದ್ದರು. ಇದರಿಂದಾಗಿ ಬಿಜೆಪಿ ಹೀನಾಯವಾಗಿ ಸೋತಿತ್ತು. ಈ ಸೋಲನ್ನು ಲೋಕಸಭೆ ಚುನಾವಣೆಯಲ್ಲಿ ಮತ್ತೆ ಗೆಲುವಾಗಿ ಪರಿವರ್ತಿಸುವ ಜವಾಬ್ದಾರಿ ತಮ್ಮದು ಎಂದು ಯಡಿಯೂರಪ್ಪ ಅವರು ಈಗಾಗಲೇ ಬಿಜೆಪಿಯ ರಾಷ್ಟ್ರೀಯ ನಾಯಕರಿಗೂ ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅವರಿಗೆ ಲೋಕಸಭೆ ಚುನಾವಣೆ ಉಸ್ತುವಾರಿ ನೀಡುವ ಬಗ್ಗೆ ಯೋಚಿಸಲಾಗುತ್ತಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಬಿಜೆಪಿ ಸೇರಲು ಆಹ್ವಾನ: ಈ ಮಧ್ಯೆ ಜ. 9ರಂದು ಬಿಜೆಪಿ ಸೇರುವಂತೆ ಪಕ್ಷ ಯಡಿಯೂರಪ್ಪ ಮತ್ತು ಅವರ ಬೆಂಬಲಿಗರಿಗೆ ಆಹ್ವಾನ ನೀಡಿದೆ. ಅಂದು ಬೆಳಗ್ಗೆ 10 ಗಂಟೆಗೆ ಜಗನ್ನಾಥ ಭವನದಲ್ಲಿ ನಡೆಯುವ ಸರಳ ಕಾರ್ಯಕ್ರಮದಲ್ಲಿ ಯಡಿಯೂರಪ್ಪ ಮತ್ತು ಬೆಂಬಲಿಗರು ಅಧಿಕೃತವಾಗಿ ಬಿಜೆಪಿ ಸೇರಲಿದ್ದಾರೆ.
ಯಡಿಯೂರಪ್ಪ ಅವರು ರಾಘವೇಂದ್ರ ಸ್ವಾಮಿಗಳ ಬಗ್ಗೆ ಅಪಾರ ಭಕ್ತಿ ಹೊಂದಿದವರು. ಅವರ ದಿನವಾದ ಗುರುವಾರ ನಿರ್ಧಾರ ಕೈಗೊಂಡರೆ ಯಶಸ್ವಿಯಾಗುತ್ತದೆ ಎಂದು ನಂಬಿದವರು. ಈ ಕಾರಣದಿಂದಾಗಿಯೇ ಕಳೆದ ಗುರುವಾರ (ಜ.2) ಅವರು ಬಿಜೆಪಿ ಸೇರುವ ನಿರ್ಧಾರ ಕೈಗೊಂಡರು. ಮುಂದಿನ ಗುರುವಾರ ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಲಿದ್ದಾರೆ. ಈ ಸಂದರ್ಭದಲ್ಲಿ ತಮ್ಮೊಂದಿಗೆ ಬಿಜೆಪಿಗೆ ಸೇರಲು ಜ.9ರಂದು ಬೆಳಗ್ಗೆ ಎಲ್ಲರೂ ಬಿಜೆಪಿ ಕಚೇರಿಗೆ ಬರುವಂತೆ ಪಕ್ಷದ ಜಿಲ್ಲಾ ಮತ್ತು ರಾಜ್ಯ ಪದಾಧಿಕಾರಿಗಳಿಗೂ ಸೂಚನೆ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


