ಪ್ರಧಾನ ಸುದ್ದಿ

ಪಕ್ಷ-ಸರ್ಕಾರ ನಡುವೆ ಸಮನ್ವಯ ಸಾಧನೆಗೆ ಚಾಲನೆ, ಪಕ್ಷದಲ್ಲಿ ಚರ್ಚೆ ನಂತರ ನಿರ್ಧಾರ ಕೈಗೊಳ್ಳಲು ಸೂಚನೆ

ಪಕ್ಷ-ಸರ್ಕಾರ ನಡುವೆ ಸಮನ್ವಯ ಸಾಧನೆಗೆ ಚಾಲನೆ, ಪಕ್ಷದಲ್ಲಿ ಚರ್ಚೆ ನಂತರ ನಿರ್ಧಾರ ಕೈಗೊಳ್ಳಲು ಸೂಚನೆ
ಸಮನ್ವಯ ಸಮಿತಿ ಸಭೆಯಲ್ಲಿ ಭಾಗವಹಿಸಿದ್ದ ಜಿ.ಪರಮೇಶ್ವರ, ಸಿಎಂ ಸಿದ್ದರಾಮಯ್ಯ ಮತ್ತು ಇತರರು.
Published On :

ಕನ್ನಡಪ್ರಭ ವಾರ್ತೆ, ಬೆಂಗಳೂರು, ಜ.6-
ಪಕ್ಷ ಮತ್ತು ಸರ್ಕಾರದ ನಡುವೆ ನಿಜಾರ್ಥದಲ್ಲಿ ಸಮನ್ವಯ ಸಾಧಿಸುವ ಪ್ರಯತ್ನಕ್ಕೆ ಸೋಮವಾರ ನಡೆದ ಸಮನ್ವಯ ಸಮಿತಿ ಸಭೆಯಲ್ಲಿ ಚಾಲನೆ ನೀಡಲಾಗಿದೆ.
ರಾಜ್ಯ ಕಾಂಗ್ರೆಸ್ ಉಸ್ತುವಾರಿ ವಹಿಸಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್ ಸಿಂಗ್ ಅಧ್ಯಕ್ಷತೆಯಲ್ಲಿ ಪ್ರದೇಶ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಯಾವುದೇ ವಿವಾದಾತ್ಮಕ ವಿಚಾರಗಳು ಚರ್ಚೆಗೆ ಬಂದಿಲ್ಲ. ಆದರೆ ಪ್ರಮುಖ ವಿಧೇಯಕಗಳನ್ನು ಮಂಡಿಸುವುದಕ್ಕೆ ಮುನ್ನ ಪಕ್ಷದ ವೇದಿಕೆಯಲ್ಲಿ ಒಮ್ಮೆ ಚರ್ಚೆ ಮಾಡಲೇಬೇಕು ಎಂಬ ನಿರ್ಣಯವನ್ನು ಸಭೆಯಲ್ಲಿ ತೆಗೆದುಕೊಳ್ಳಲಾಗಿದೆ.
ಇತ್ತೀಚಿನ ದಿನಗಳಲ್ಲಿ ಸರ್ಕಾರಕ್ಕೆ ತೀವ್ರ ಮುಜುಗರ ಸೃಷ್ಟಿಸಿದ ಕಬ್ಬು ಬೆಳೆಗಾರರ ಸಮಸ್ಯೆ ಮತ್ತು ವೃತ್ತಿ ಶಿಕ್ಷಣ ಪ್ರವೇಶ ಮತ್ತು ನಿಯಂತ್ರಣ ಕಾನೂನು ಜಾರಿ ವಿಚಾರದಲ್ಲಿ ಉಂಟಾದ ಗೊಂದಲಗಳ ಬಗ್ಗೆ ದಿಗ್ವಿಜಯ್ ಸಿಂಗ್ ಪ್ರಸ್ತಾಪಿಸಿದ್ದು, ತಕ್ಷಣಕ್ಕೆ ಜನಾಭಿಪ್ರಾಯ ಸೃಷ್ಟಿಯಾಗುವಂತಹ ವಿಚಾರಗಳನ್ನು ಜಾರಿಗೆ ತರುವಾಗ ತುಸು ಎಚ್ಚರಿಕೆ ವಹಿಸುವಂತೆ ಸಲಹೆ ನೀಡಲಾಗಿದೆ.
ಪಕ್ಷ ಮತ್ತು ಸರ್ಕಾರದ ಯೋಜನೆ ಅನುಷ್ಠಾನದಲ್ಲಿ ಸಮನ್ವಯ ಸಾಧಿಸವ ಬಗ್ಗೆಯೂ ಸಭೆಯಲ್ಲಿ ಚರ್ಚೆಯಾಗಿದೆ. ಸರ್ಕಾರದ ಪ್ರಮುಖ ವಿಚಾರಗಳ ಬಗ್ಗೆ ಪ್ರಚಾರ ಮಾಡುವುದಕ್ಕೆ ಪಕ್ಷದ ಒಂದು ವಲಯದಲ್ಲಿ ತಟಸ್ಥ ಭಾವನೆ ಮೂಡುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಈ ಸಂದರ್ಭದಲ್ಲಿ ಪ್ರಸ್ತಾಪಿಸಿದ ಹಿನ್ನೆಲೆಯಲ್ಲಿ, ಪ್ರಮುಖ ಯೋಜನೆಗಳ ಪ್ರಚಾರಕ್ಕೆ ಕಾರ್ಯಕರ್ತರನ್ನು ಬಳಸಿಕೊಳ್ಳಲು ತೀರ್ಮಾನಿಸಲಾಗಿದೆ.

ಕೇಂದ್ರ ಸಚಿವರೂ ಭಾಗಿ:
ವಿಶೇಷವಾಗಿ ಲೋಕಸಭಾ ಚುನಾವಣೆ ತಯಾರಿ ಬಗ್ಗೆ ಹೆಚ್ಚು ಚರ್ಚೆಯಾಗಿದ್ದು, ಕೇಂದ್ರ ಸಚಿವರಿಗೂ ಜವಾಬ್ದಾರಿ ನಿಗದಿ ಮಾಡಬೇಕೆಂಬ ಬಗ್ಗೆ ಕೆಲ ಸದಸ್ಯರು ಸಲಹೆ ನೀಡಿದ್ದಾರೆ. ಸಾಮಾನ್ಯವಾಗಿ ಚುನಾವಣೆಯ ಸೋಲು-ಗೆಲವಿನ ಜವಾಬ್ದಾರಿಯನ್ನು ಪಕ್ಷ ಹಾಗೂ ಸರ್ಕಾರದ ಮೇಲೆ ಹಾಕಲಾಗುತ್ತದೆ. ಆದರೆ ಕೇಂದ್ರ ಸಚಿವರನ್ನೂ ಈ ಹೊಣೆಗಾರಿಕೆ ವ್ಯಾಪ್ತಿಯಲ್ಲಿ ತರಬೇಕು ಎಂಬ ಸಲಹೆ ವ್ಯಕ್ತವಾಗಿದೆ. ಅದೇ ರೀತಿ ಕೆಲ ಸಚಿವರ ವರ್ತನೆ ಬಗ್ಗೆ ಹಾಗೂ ವಿವಾದಾತ್ಮಕ ಹೇಳಿಕೆ ನಿಯಂತ್ರಣದ ಬಗ್ಗೆ ಚರ್ಚೆಯಾಗಿದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.

ವಿಭಾಗ ಸಭೆ:
ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಾಗಿನಿಂದಲೂ ದೊಡ್ಡ ಮಟ್ಟದಲ್ಲಿ ವಿಭಾಗೀಯ ಸಭೆ ನಡೆಸುವ ಬಗ್ಗೆ ಪ್ರಸ್ತಾಪ ಮಾಡಲಾಗಿತ್ತು. ಆದರೆ ಇದು ಸಾಧ್ಯವಾಗಿಲ್ಲ. ಹೀಗಾಗಿ ಗುಲ್ಬರ್ಗ, ಬೆಳಗಾವಿ, ಮೈಸೂರು, ಬೆಂಗಳೂರು ವಿಭಾಗದಲ್ಲಿ ಬೃಹತ್ ಸಮಾವೇಶ ನಡೆಸಬೇಕು. ಇದಕ್ಕೆ ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಹಾಗೂ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಆಮಂತ್ರಿಸಬೇಕು. ಇದರಿಂದ ಲೋಕಸಭಾ ಚುನಾವಣಾ ತಯಾರಿಗೆ ವೇಗೋತ್ಕರ್ಷ ನೀಡಿದಂತಾಗುತ್ತದೆ ಎಂಬ ವಿಚಾರ ಸಭೆಯಲ್ಲಿ ಪ್ರಸ್ತಾಪವಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ, ಗೃಹ ಸಚಿವ ಕೆ.ಜೆ.ಜಾರ್ಜ್, ಇಂಧನ ಸಚಿವ ಡಿ.ಕೆ.ಶಿವಕುಮಾರ್, ಎಐಸಿಸಿ ಪ್ರತಿನಿಧಿಗಳಾದ ಶಾಂತರಾಂ ನಾಯಕ್, ಡಾ.ಚಲ್ಲಕುಮಾರ್ ಸಭೆಯಲ್ಲಿ ಭಾಗವಹಿಸಿದ್ದರು.

ಚುನಾವಣೆ ವರೆಗೆ ನಿಗಮಕ್ಕೆ ನೇಮಕವಿಲ್ಲ
ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದ ಚರ್ಚೆಯಲ್ಲಿರುವ ನಿಗಮ-ಮಂಡಳಿ ಅಧ್ಯಕ್ಷರು ಮತ್ತು ಸದಸ್ಯರ ನೇಮಕ ವಿಚಾರದಲ್ಲಿ ಸ್ವಲ್ಪ ತಾಳ್ಮೆ ವಹಿಸುವ ಬಗ್ಗೆ ದಿಗ್ವಿಜಯ್ ಸಿಂಗ್ ಈ ಸಂದರ್ಭದಲ್ಲಿ ಸಲಹೆ ನೀಡಿದ್ದಾರೆ ಎಂದು ಪಕ್ಷದ ಉನ್ನತ ಮೂಲಗಳು ತಿಳಿಸಿವೆ. ಈ ನೇಮಕ ಪ್ರಕ್ರಿಯೆ ಆರಂಭಿಸುವುದರಿಂದ ಜೇನುಗೂಡಿಗೆ ಕಲ್ಲು ಹಾಕಿದಂತಾಗುತ್ತದೆ. ಇದರಿಂದ ಲೋಕಸಭಾ ಚುನಾವಣೆ ಮೇಲೆ ವ್ಯತಿರಿಕ್ತ ಪರಿಣಾಮ ಉಂಟಾಗುವ ಸಾಧ್ಯತೆ ಇರುವುದರಿಂದ ಬಹಿರಂಗ ಚರ್ಚೆಗೆ ಅವಕಾಶ ನೀಡದಂತೆ ಎಚ್ಚರಿಕೆ ವಹಿಸುವಂತೆ ಸಲಹೆ ನೀಡಲಾಗಿದೆ ಎಂದು ತಿಳಿದು ಬಂದಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.