ಪ್ರಧಾನ ಸುದ್ದಿ

ಲೋಕ ಸಮರಕ್ಕಾಗಿ ರಾಹುಲ್ ಯಂಗ್ ಇಂಡಿಯಾ, ಪ್ರಣಾಳಿಕೆಗೆ ಇದರ ಸಲಹೆಗಳೇ ಮಾರ್ಗದರ್ಶಿ

ಲೋಕ ಸಮರಕ್ಕಾಗಿ ರಾಹುಲ್ ಯಂಗ್ ಇಂಡಿಯಾ, ಪ್ರಣಾಳಿಕೆಗೆ ಇದರ ಸಲಹೆಗಳೇ ಮಾರ್ಗದರ್ಶಿ
Published On :

ಕನ್ನಡಪ್ರಭ ವಾರ್ತೆ , ಬೆಂಗಳೂರು , ಜ.11
ಬಿಜೆಪಿಯ 'ಯುವ ಭಾರತ್‌'ಗೆ ಪ್ರತಿಯಾಗಿ ಕಾಂಗ್ರೆಸ್ 'ಯಂಗ್ ಇಂಡಿಯಾ' ಪರಿಕಲ್ಪನೆಯೊಂದಿಗೆ ಲೋಕಸಭೆ ಚುನಾವಣಾ ಕಣಕ್ಕಿಳಿಯಲು ಸಿದ್ಧತೆ ಆರಂಭಿಸಿದೆ.
ಈ ನಿಟ್ಟಿನಲ್ಲಿ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ನೇತೃತ್ವದಲ್ಲಿ ರಾಷ್ಟ್ರವ್ಯಾಪಿ ಯುವಕರನ್ನು ಸೆಳೆಯಲು ಕಾಂಗ್ರೆಸ್ ಕಾರ್ಯಕ್ರಮ ರೂಪಿಸಿದೆ. ಅದರಂತೆ ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಪ್ರಣಾಳಿಕೆ ಸಿದ್ಧಪಡಿಸುವ ನಿಟ್ಟಿನಲ್ಲಿ ಯುವಕರು ಮತ್ತು ವಿದ್ಯಾರ್ಥಿಗಳ ಸಲಹೆ ಪಡೆಯುವ ಕಾರ್ಯ ಆರಂಭಿಸಿದೆ.
ಬೆಂಗಳೂರಿನಲ್ಲಿ ಶನಿವಾರ ರಾಹುಲ್ ಗಾಂಧಿ ನೇತೃತ್ವದಲ್ಲಿ ಕೇಂದ್ರ ಕಾರ್ಪೋರೇಟ್ ವ್ಯವಹಾರಗಳ ಖಾತೆ ರಾಜ್ಯ ಸಚಿವ ಸಚಿನ್ ಪೈಲಟ್, ವಾರ್ತಾ ಸಚಿವ ಮನೀಶ್ ತಿವಾರಿ, ಯುವಜನ ಸೇವಾ ಖಾತೆ ಸಚಿವ ಜಿತೇಂದ್ರ ಸಿಂಗ್ ಅವರು ಐಟಿ, ಬಿಟಿ, ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರಗಳ ಯುವ ಮೇಧಾವಿಗಳ ಜತೆ ಸಮಾಲೋಚನೆ ನಡೆಸಿದ್ದಾರೆ.
ಸಮಾಲೋಚನಾ ಸಭೆಯಲ್ಲಿ ಶಿಕ್ಷಣ, ಉದ್ಯೋಗ ಮತ್ತು ಯುವ ನೀತಿ ಕುರಿತಂತೆ ನಾಯಕರು ಪಕ್ಷದ ನಿಲುವು ತಿಳಿಸಿದ್ದು, ಈ ಸಂದರ್ಭದಲ್ಲಿ ಜನರಿಂದ ಬಂದ ಅಭಿಪ್ರಾಯಗಳನ್ನು ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಸಿದ್ಧಪಡಿಸುವ ಪ್ರಣಾಳಿಕೆಯಲ್ಲಿ ಅಳವಡಿಸಲಾಗುವುದು ಎಂದು ಕೇಂದ್ರ ವಾರ್ತಾ ಸಚಿವ ಮನೀಶ್ ತಿವಾರಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಹೊಸ ಪ್ರಯತ್ನ: ಯುವಕರನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್ ಮುಂದಿನ ಪ್ರಣಾಳಿಕೆಯನ್ನು ಸಿದ್ಧಪಡಿಸಲಿದ್ದು, ಇದಕ್ಕಾಗಿ ಅವರಿಂದಲೇ ಅಭಿಪ್ರಾಯ ಸಂಗ್ರಹಿಸುವ ಹೊಸ ಪ್ರಯತ್ನವನ್ನು ಪಕ್ಷ ಮಾಡುತ್ತಿದೆ. ಜತೆಗೆ ರಾಜಕೀಯ ಕ್ಷೇತ್ರದಲ್ಲಿ ಯುವಕರು ಅತಿ ಹೆಚ್ಚು ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಮಾಡಲು ಪಕ್ಷ ಯೋಜನೆಗಳನ್ನು ರೂಪಿಸಲಿದೆ ಎಂದು ಹೇಳಿದರು.
ಪ್ರಸ್ತುತ ಯುವಕರ ಆಸಕ್ತಿ ಮತ್ತು ಬೇಡಿಕೆ ಮಾಹಿತಿ ತಂತ್ರಜ್ಞಾನ ಹಾಗೂ ಮೂಲ ಸೌಕರ್ಯ. ಈ ನಿಟ್ಟಿನಲ್ಲಿ ಕಾಂಗ್ರೆಸ್ ಏನೇನು ಕಾರ್ಯಕ್ರಮ ರೂಪಿಸುತ್ತದೆ ಎಂಬುದನ್ನು ವಿವರಿಸುವ ಜತೆಗೆ ಇದಕ್ಕೆ ಸಲಹೆಗಳನ್ನು ನೀಡುವಂತೆಯೂ ಜನರನ್ನು ಕೋರಲಾಗಿದೆ. ಪಕ್ಷದ ವೆಬ್‌ಸೈಟ್ ಮೂಲಕವೂ ಸಲಹೆಗಳನ್ನು ಪಡೆಯಲಾಗುತ್ತದೆ ಎಂದು ಕಾರ್ಪೋರೇಟ್ ವ್ಯವಹಾರಗಳ ಖಾತೆ ರಾಜ್ಯ ಸಚಿವ ಸಚಿನ್ ಪೈಲಟ್ ಹೇಳಿದರು.
ವಿಳಂಬವಾಗಿಲ್ಲ: ಯುಪಿಎ 10 ವರ್ಷಗಳ ಕಾಲ ಆಡಳಿತ ನಡೆಸಿದರೂ ಯುವಕರತ್ತ ಗಮನಹರಿಸುವಲ್ಲಿ ವಿಳಂಬವಾಗಿಲ್ಲವೇ ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಮನೀಶ್ ತಿವಾರಿ, ಕಳೆದ ಹತ್ತು ವರ್ಷಗಳಲ್ಲಿ ಜನರ ಮೂಲ ಹಕ್ಕುಗಳ ಬಗ್ಗೆ ಕಾಂಗ್ರೆಸ್ ಗಮನಹರಿಸಿತ್ತು. ಉದ್ಯೋಗ, ಉಚಿತ ಮತ್ತು ಕಡ್ಡಾಯ ಶಿಕ್ಷಣದ ಹಕ್ಕು, ಆಹಾರ ಭದ್ರತಾ ಕಾಯ್ದೆ, ಭೂಸ್ವಾಧೀನ ಕಾಯ್ದೆ, ಜನರಿಗೆ ಆಧಾರ್ ಗುರುತಿನ ಚೀಟಿ ವಿತರಣೆ ಮುಂತಾದ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿದೆ. ಈ ಎಲ್ಲಾ ಕಾರ್ಯಗಳು ಮುಗಿಯುತ್ತಿದ್ದಂತೆ ಯುವಕರತ್ತ ಗಮನಹರಿಸಿದೆ. ಹೀಗಾಗಿ ಈ ಪ್ರಕ್ರಿಯೆ ವಿಳಂಬವಾಗಿಲ್ಲ ಎಂದು ಸ್ಪಷ್ಟನೆ ನೀಡಿದರು.
ಯುಪಿಎ ಸರ್ಕಾರದ 10 ವರ್ಷದ ಅಧಿಕಾರಾವಧಿಯಲ್ಲಿ ಆರ್ಥಿಕ ಅಭಿವೃದ್ಧಿ, ಆಂತರಿಕ ಭದ್ರತೆ ಮತ್ತು ಅಂತಾರಾಷ್ಟ್ರೀಯ ಸಂಬಂಧಗಳ ಸುಧಾರಣೆಗೆ ಸಾಕಷ್ಟು ಕೆಲಸ ಮಾಡಿದೆ. ಪ್ರಸ್ತುತ ನಿರ್ಧಾರಗಳನ್ನು ಕೈಗೊಳ್ಳುವ ಸಂದರ್ಭದಲ್ಲಿ ಯುವಕರ ಅಭಿಪ್ರಾಯ ಪರಿಗಣಿಸುವ ಕೆಲಸಕ್ಕೆ ಕಾಂಗ್ರೆಸ್ ಮುಂದಾಗಿದೆ ಎಂದು ಹೇಳಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.