ಕುಮಾರಸ್ವಾಮಿ ಡೀಲ್: ಕೇಂದ್ರ ವರದಿ ಕೇಳಿಲ್ಲ

ಕ.ಪ್ರ. ವಾರ್ತೆ ಬೆಂಗಳೂರು ಜು.7
ವಿಧಾನ ಪರಿಷತ್ ಸದಸ್ಯತ್ವ 'ಡೀಲ್' ಪ್ರಕರಣದಲ್ಲಿ ಸಿಲುಕಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪ್ರಕರಣ ಸಂಬಂಧ ಕೇಂದ್ರ ಸರ್ಕಾರ ಯಾವುದೇ ವರದಿ ಕೇಳಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ವಿಧಾನಸೌಧದ ಮುಂಭಾಗದಲ್ಲಿ ನಡೆದ ಮಾದಕವಸ್ತು ವಿರೋಧಿ ಅಭಿಯಾನಕ್ಕೆ ಚಾಲನೆ ನೀಡಿದ ನಂತರ ಸುದ್ದಿಗಾರರ ಜತೆ ಮಾತನಾಡಿದ ಅವರು ಈ ವಿಷಯ ತಿಳಿಸಿದ್ದು, ವಿಧಾನ ಪರಿಷತ್ ಸದಸ್ಯತ್ವಕ್ಕಾಗಿ ಜೆಡಿಎಸ್ ಶಾಸಕರು ಲಂಚ ಕೇಳಿದ್ದರು ಎಂದು ಕುಮಾರಸ್ವಾಮಿ ಹೇಳಿರುವ ಸಿಡಿ ಪ್ರಕರಣ ಬಗ್ಗೆ ವರದಿ ನೀಡುವಂತೆ ಕೇಂದ್ರದಿಂದ ರಾಜ್ಯಕ್ಕೆ ಯಾವುದೇ ಸೂಚನೆ ಬಂದಿಲ್ಲ. ಪತ್ರ ಬಂದರೆ ಉತ್ತರ ನೀಡುತ್ತೇನೆ ಎಂದು ಹೇಳಿದರು. ಈ ಪ್ರಕರಣ ಸಂಬಂಧ ರಾಜ್ಯ ಸರ್ಕಾರವೂ ಒಂದು ವರದಿ ಕೇಳಿದೆ. ವರದಿ ಬಂದ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು. ಜೆಡಿಎಸ್ ಪಕ್ಷದಲ್ಲಿ ವಿಧಾನ ಪರಿಷತ್ ಸ್ಥಾನಕ್ಕಾಗಿ ಲಂಚ ಕೇಳಬಹುದು. ಅದನ್ನು ಕುಮಾರಸ್ವಾಮಿ ಅವರೇ ಒಪ್ಪಿಕೊಂಡಿದ್ದಾರೆ. ಆದರೆ ಕಾಂಗ್ರೆಸ್ನಲ್ಲಿ ಅಂಥ ಘಟನೆಗಳು ನಡೆಯುವುದಿಲ್ಲ ಎಂದರು.
ರೇಲ್ವೆ ಸಚಿವ ಸದಾನಂದಗೌಡರು ಮಂಗಳವಾರ ಬಜೆಟ್ ಮಂಡಿಸಲಿದ್ದಾರೆ. ರಾಜ್ಯಕ್ಕೆ ಹಲವು ಕೊಡುಗೆ ನೀಡಲಿದ್ದಾರೆ ಎಂಬ ಅಪಾರ ನಿರೀಕ್ಷೆ ಇದೆ. ಹೊಸ ಯೋಜನೆಗಳು, ಹೊಸ ರೈಲು ಸಂಪರ್ಕಗಳ ಬಗ್ಗೆ ಈಗಾಗಲೇ ರಾಜ್ಯ ಸರ್ಕಾರ ಅವರಿಗೆ ಬೇಡಿಕೆ ಸಲ್ಲಿಸಿದೆ ಎಂದು ಹೇಳಿದರು.
ಕಂದಾಯ ಸಚಿವ ವಿ.ಶ್ರೀನಿವಾಸ್ ಪ್ರಸಾದ್ ಮಾತನಾಡಿ, ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಸಮಗ್ರ ತನಿಖೆಯಾಗಬೇಕು. ಸ್ವತಃ ಕುಮಾರಸ್ವಾಮಿ ಅವರೇ ಹಣ ಕೇಳಿದ್ದಾಗಿ ಒಪ್ಪಿಕೊಂಡಿದ್ದಾರೆ. ಈ ಪ್ರಕರಣವನ್ನು ಸಮರ್ಥಿಸಿಕೊಂಡಿದ್ದಾರೆ. ಹೀಗಾಗಿ ಈ ಸಂಬಂಧ ತನಿಖೆ ನಡೆಸಿ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.
ಕುಮಾರಸ್ವಾಮಿ ಅವರ ಹೇಳಿಕೆಯಿಂದ ಎಲ್ಲ ರಾಜಕಾರಣಿಗಳೂ ಒಂದೇ ಎಂಬ ಭಾವನೆ ಮೂಡುತ್ತದೆ. ಇಂದಿನ ರಾಜಕೀಯದಲ್ಲಿ ಎಲ್ಲ ಪಕ್ಷಗಳು ಹಣ ಪಡೆಯುವ ಸ್ಥಿತಿ ಇದೆ ಎಂಬ ಅರ್ಥ ಬರುವಂತೆ ಮಾತನಾಡಿದ್ದಾರೆ. ಇದು ಸರಿಯಲ್ಲ. ಇದರಿಂದ ಒಳ್ಳೆಯ ರಾಜಕಾರಣಿಗಳ ಬಗ್ಗೂ ಅನುಮಾನ ಬರುವಂತಾಗುತ್ತದೆ. ಹೀಗಾಗಿ ಈ ಪ್ರಕರಣದ ಬಗ್ಗೆ ತನಿಖೆ ನಡೆಸಿ ಸತ್ಯಾಂಶ ಹೊರ ಬರುವಂತೆ ಮಾಡಬೇಕು ಎಂದು ಹೇಳಿದರು. ಗೃಹ ಸಚಿವ ಕೆ.ಜೆ.ಜಾರ್ಜ್, ಸಚಿವರಾದ ಎಸ್.ಆರ್.ಪಾಟೀಲ್, ರಾಮಲಿಂಗಾ ರೆಡ್ಡಿ, ಡಾ.ಶರಣಪ್ರಕಾಶ್ ಪಾಟೀಲ್, ಅಭಯಚಂದ್ರ ಜೈನ್ ಮೊದಲಾದವರು ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


