ಲೋಕದಲ್ಲಿ ರೇಪ್ ಪ್ರತಿಧ್ವನಿ

ಕನ್ನಡಪ್ರಭ ಪ್ರತಿನಿಧಿಯಿಂದ
ನವದೆಹಲಿ: ಕರ್ನಾಟಕದಲ್ಲಿ ನಡೆಯುತ್ತಿರುವ ಅತ್ಯಾಚಾರ ಮತ್ತು ದೌರ್ಜನ್ಯ ಪ್ರಕರಣಗಳು ಮಂಗಳವಾರ ಲೋಕಸಭೆಯಲ್ಲಿ ಪ್ರತಿಧ್ವನಿಸಿವೆ. ಮಹಿಳೆಯರಿಗೆ ರಾಜ್ಯ ಸರ್ಕಾರ ರಕ್ಷಣೆ ನೀಡುತ್ತಿಲ್ಲ. ಅತ್ಯಾಚಾರ ಪ್ರಕರಣಗಳನ್ನು ನಿಗ್ರಹಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದ್ದು, ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸಬೇಕೆಂದು ಬಿಜೆಪಿ ಸದಸ್ಯರು ಸದನದಲ್ಲಿ ಆಗ್ರಹಿಸಿದರು. ಕಾಂಗ್ರೆಸ್ ಸದಸ್ಯರು ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರಿಂದ ಸದನದಲ್ಲಿ ಕೆಲ ಕ್ಷಣ ಗೊಂದಲ ಏರ್ಪಟ್ಟಿತ್ತು.
ಶೂನ್ಯವೇಳೆಯಲ್ಲಿ ಈ ವಿಷಯ ಪ್ರಸ್ತಾಪಿಸಿದ ಚಿಕ್ಕಮಗಳೂರು-ಉಡುಪಿ ಲೋಕಸಭಾ ಸದಸ್ಯೆ ಶೋಭಾ ಕರಂದ್ಲಾಜೆ, ಬೆಂಗಳೂರು ಸೆಂಟ್ರಲ್ ಲೋಕಸಭಾ ಸದಸ್ಯ ಪಿ.ಸಿ.ಮೋಹನ್, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ ಎಂದು ಆರೋಪಿಸಿದರು. ಕೇಂದ್ರ ಸರ್ಕಾರ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಆಗ್ರಹಿಸಿದರು.
ಅತ್ಯಾಚಾರ ಪ್ರಕರಣಗಳ ಬಗ್ಗೆ ಪ್ರಸ್ತಾಪಿಸಿದ ಶೋಭಾ, ಕರ್ನಾಟಕದಲ್ಲಿ ಕಾನೂನು ವ್ಯವಸ್ಥೆ ಕುಸಿದಿದೆ. ಕರ್ನಾಟಕದಲ್ಲಿ ಸರ್ಕಾರವೇ ಇಲ್ಲದೆ ಅತ್ಯಾಚಾರಿಗಳ ಸ್ವರ್ಗವಾಗಿದೆ ಎಂದು ಗುಡುಗಿದರು.
ಅವರ ಆರೋಪಗಳಿಗೆ ಕಾಂಗ್ರೆಸ್ ಸದಸ್ಯರಿಂದ ವಿರೋಧ ವ್ಯಕ್ತವಾದ್ದರಿಂದ ಒಂದು ಹಂತದಲ್ಲಿ, 'ಧ್ರುವನಾರಾಯಣ ಅವರೇ ನೀವು ಅತ್ಯಾಚಾರಿಗಳನ್ನು ಬೆಂಬಲಿಸುತ್ತಿರೋ ಅಥವಾ ವಿರೋಧಿಸುತ್ತಿರೋ?' ಎಂದು ಶೋಭಾ ಪ್ರಶ್ನಿಸಿದರು.
ನಡುಗಿದೆ ರಾಜ್ಯ: ಶ್ರೀಗಂಧದ ನಾಡಾಗಿದ್ದ ಕರ್ನಾಟಕವು ಮಹಿಳೆಯರ ಮೇಲಿನ ಅತ್ಯಾಚಾರ ದೌರ್ಜನ್ಯಗಳಿಂದ ನಲುಗಿ ಹೋಗಿದೆ. ಕಳೆದ 15 ದಿನಗಳಲ್ಲಿ 50 ಅತ್ಯಾಚಾರ ಪ್ರಕರಣಗಳು ನಡೆದಿವೆ. ಜುಲೈ 19ರಂದು ಒಂದೇ ದಿನ 10 ಅತ್ಯಾಚಾರ ಪ್ರಕರಣಗಳು ವರದಿಯಾಗಿವೆ. ಬೆಂಗಳೂರಿನಲ್ಲಿ 6 ವರ್ಷದ ಬಾಲಕಿಯನ್ನು ಇಬ್ಬರು ಶಿಕ್ಷಕರು ಅತ್ಯಾಚಾರ ಮಾಡಿದ್ದಾರೆ. ಸ್ಕೇಟಿಂಗ್ ಅಕಾಡೆಮಿಯ ತರಬೇತುದಾರನೇ 5 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದಾನೆ. ಕಾಲೇಜಿಗೆ ಹೊರಟಿದ್ದ 17 ವರ್ಷದ ಬಾಲಕಿಯನ್ನು ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿದೆ ಎಂದರು.
ದುರಂತವೆಂದರೆ 6 ವರ್ಷದ ಬಾಲಕಿ ಅತ್ಯಾಚಾರಕ್ಕೀಡಾದ ಶಾಲೆಯ ಆಡಳಿತ ಮಂಡಳಿ ವಿದ್ಯಾರ್ಥಿಗಳ ಜವಾಬ್ದಾರಿ ನಮ್ಮದಲ್ಲ ಎಂದು ಬೇಜವಾಬ್ದಾರಿಯಿಂದ ವರ್ತಿಸಿದೆ. ಆ ಶಾಲೆಯ ವಿರುದ್ಧ ರಾಜ್ಯ ಸರ್ಕಾರ ಏನೂ ಕ್ರಮಕೈಗೊಂಡಿಲ್ಲ. ಇದರಿಂದ ಕರ್ನಾಟಕದಲ್ಲಿ ಶಾಲೆಗೆ ಹೋಗುವ ಲಕ್ಷಾಂತರ ವಿದ್ಯಾರ್ಥಿನಿಯರಿಗೆ ಆತಂಕವಾಗಿದೆ. ರಾಜ್ಯದಲ್ಲಿ ಮಕ್ಕಳು, ಮಹಿಳೆಯರಿಗೆ ರಕ್ಷಣೆಯೇ ಇಲ್ಲ. ಕಾನೂನು ವ್ಯವಸ್ಥೆ ಕುಸಿದು ಬಿದ್ದಿದೆ. ಅದಕ್ಕೆ ನಿದರ್ಶನ ಎಂಬಂತೆ ಬೆಂಗಳೂರಿನಲ್ಲಿ ಚಲಿಸುತ್ತಿರುವ ಕಾರಿನಲ್ಲಿ 20 ವರ್ಷದ ಯುವತಿಯ ಮೇಲೆ ಅತ್ಯಾಚಾರ ಮಾಡಲಾಗಿದೆ. ಆ ಯುವತಿ ದೂರು ನೀಡಲು ಹೋದಾಗ ಠಾಣಾಧಿಕಾರಿಯು ಐಪಿಸಿ 276 ರಡಿ ಪ್ರಕರಣ ದಾಖಲಿಸಿದೇ, 166 (ಎ)ರಡಿ ಪ್ರಕರಣ ದಾಖಲಿಸಿದ್ದಾರೆ. ಈ ಠಾಣೆ ಗೃಹ ಸಚಿವರ ಕ್ಷೇತ್ರದಲ್ಲಿದೆ. ರಾಜ್ಯ ಸರ್ಕಾರ ಅತ್ಯಾಚಾರ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ ಎಂದು ದೂರಿದರು.
ನಿಷ್ಕ್ರಿಯವಾಗಿದೆ ಸರ್ಕಾರ: ದೆಹಲಿ ನಿರ್ಭಯಾ ಪ್ರಕರಣದ ನಂತರ ಕಾನೂನುಗಳನ್ನು ಬಿಗಿಗೊಳಿಸಿದ್ದರೂ ಕರ್ನಾಟಕದಲ್ಲಿ ಮಾತ್ರ ಅತ್ಯಾಚಾರ ಪ್ರಕರಣಗಳು ನಿಂತಿಲ್ಲ. ರಾಜ್ಯ ಸರ್ಕಾರದ ನಿಷ್ಕ್ರಿಯತೆ ಇದಕ್ಕೆ ಕಾರಣ ಎಂದು ದೂರಿದರು. ಕಾಂಗ್ರೆಸ್ ಸದಸ್ಯರು ತೀವ್ರ ವಿರೋಧ ವ್ಯಕ್ತಪಡಿಸಿದರು.
ನಂತರ ಪಿ.ಸಿ. ಮೋಹನ್ ಅವರು ವಿಷಯ ಪ್ರಸ್ತಾಪಿಸಿ, ರಾಜ್ಯದಲ್ಲಿ ಕಾನೂನು ಕುಸಿದಿರುವುದರಿಂದ ಕೇಂದ್ರ ಸರ್ಕಾರ ಕೂಡಲೇ ಮಧ್ಯ ಪ್ರವೇಶಿಸಿ, ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಈ ಹಂತದಲ್ಲಿಯೂ ಧ್ರುವನಾರಾಯಣ ಸೇರಿದಂತೆ ಹಲವು ಕಾಂಗ್ರೆಸ್ ಸದಸ್ಯರು ತೀವ್ರ ವಿರೋಧ ವ್ಯಕ್ತಪಡಿಸಿದರು. ಬಿಜೆಪಿ ಸದಸ್ಯರಾದ ಪ್ರತಾಪ್ ಸಿಂಹ ಮತ್ತಿತರರು ಮೋಹನ್ ಅವರನ್ನು ಬೆಂಬಲಿಸಿದರು.
ಸ್ಪೀಕರ್ ಸ್ಥಾನದಲ್ಲಿದ್ದ ಎಂ.ತಂಬಿದೊರೈ ಅವರು, ಕಾನೂನು ಮತ್ತು ಸುವ್ಯವಸ್ಥೆ ವಿಚಾರ ರಾಜ್ಯ ಸರ್ಕಾರಕ್ಕೆ ಸೇರಿದ್ದು ಎಂದು ಹೆಚ್ಚು ಮಾತನಾಡಲು ಅವಕಾಶ ನೀಡಲಿಲ್ಲ. ಬೇರೊಬ್ಬ ಸದಸ್ಯರು ಮಾತನಾಡಲು ನಿಂತಾಗಲೂ ಶೋಭಾ, ಮೋಹನ್ ರಾಜ್ಯ ಸರ್ಕಾರದ ವಿರುದ್ಧ ದೂರುತ್ತಲೇ ಇದ್ದರು. ಅದಕ್ಕೆ ಕಾಂಗ್ರೆಸ್ ಸದಸ್ಯರು ಧ್ವನಿಯೇರಿಸಿ ವಿರೋಧಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


