ಪ್ರಧಾನ ಸುದ್ದಿ

ಸನ್ಯಾಸ ಸವಾಲು

ಸನ್ಯಾಸ ಸವಾಲು
Published On :

ವಿಧಾನಸಭೆ: ಅಕ್ರಮ ಡಿನೋಟಿಫಿಕೇಶನ್ ಪ್ರಕರಣವನ್ನು ಸಿಎಂ ಸಿದ್ದರಾಮಯ್ಯ ಹಾಗೂ ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದು, ಆರೋಪ ಸಾಬೀತು ಮಾಡಿದರೆ ರಾಜಕೀಯ ಸನ್ಯಾಸ ಸ್ವೀಕರಿಸುವುದಾಗಿ ಪರಸ್ಪರರು ವಿಧಾನಸಭೆಯಲ್ಲಿ ಸವಾಲು ಹಾಕಿದ್ದಾರೆ.
ಅರ್ಕಾವತಿ ಬಡಾವಣೆಯಲ್ಲಿ ನಡೆದ 541 ಎಕರೆ ಡಿನೋಟಿಫಿಕೇಶನ್ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸುವಂತೆ ಆಗ್ರಹಿಸಿ ಬಿಜೆಪಿ ಸದಸ್ಯರು 2ನೇ ದಿನವೂ ಹೋರಾಟ ಮುಂದುವರಿಸಿದ್ದರಿಂದ ಕಲಾಪವನ್ನು ಸೋಮವಾರಕ್ಕೆ ಮುಂದೂಡಲಾಗಿದೆ.
ಕಲಾಪ ಆರಂಭವಾಗುತ್ತಿದ್ದಂತೆ ಬಿಜೆಪಿ ಸದಸ್ಯರು ಪ್ರತಿಭಟನೆಗೆ ಇಳಿದರು. ಸಿದ್ದರಾಮಯ್ಯ ಹಾಗೂ ಶೆಟ್ಟರ್ ಏರಿದ ಧ್ವನಿಯಲ್ಲಿ ಆರೋಪ-ಪ್ರತ್ಯಾರೋಪದಲ್ಲಿ ತೊಡಗಿದರು. ನಾನು ಅಧಿಕಾರಕ್ಕೆ ಬಂದ ನಂತರ ಒಂದು ಗುಂಟೆ ಜಾಗವನ್ನು ಡಿನೋಟಿಫೈ ಮಾಡಿಲ್ಲ. ಆರೋಪ ಸಾಬೀತುಪಡಿಸಿದರೆ ರಾಜಕೀಯ ಸನ್ಯಾಸ ತೆಗೆದುಕೊಳ್ಳುತ್ತೇನೆ ಎಂದು ಸಿದ್ದರಾಮಯ್ಯ ಸವಾಲು ಹಾಕಿದರು. ನೀವು ನನ್ನ ಮೇಲಿನ ಆರೋಪ ಋಜುವಾತುಪಡಿಸಿದರೆ ರಾಜಕೀಯ ನಿವೃತ್ತಿ ತೆಗೆದುಕೊಳ್ಳುತ್ತೇನೆ ಎಂದು ಶೆಟ್ಟರ್ ಪ್ರತಿ ಸವಾಲು ಹಾಕಿದರು.
ಗಲಾಟೆ ಹೆಚ್ಚಿದ್ದರಿಂದ ಸ್ಪೀಕರ್ ಕಾಗೋಡು ತಿಮ್ಮಪ್ಪ ಕಲಾಪವನ್ನು ಸೋಮವಾರಕ್ಕೆ  ಮುಂದೂಡಿದರು. ಸದನ ಸಮಾವೇಶಗೊಳ್ಳುತ್ತಿದ್ದಂತೆ ಮಾತನಾಡಿದ ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್, ಸಿದ್ದರಾಮಯ್ಯನವರು ಒಂದು ಎಕರೆ ಜಾಗವನ್ನೂ ಡಿನೋಟಿಫೈ ಮಾಡಿಲ್ಲ ಎನ್ನುತ್ತಾರೆ. ಆದರೆ 541 ಎಕರೆ ಡಿನೋಟಿಫೈ ಆಗಿದೆ. ಹೀಗಾಗಿ ಸಿಬಿಐ ತನಿಖೆ ನಡೆಸಲೇಬೇಕು ಎಂದು ಪಟ್ಟು ಹಿಡಿದರು.
ಸದನ ಸಮಿತಿ ರಚನೆಗೆ ಸಿದ್ಧ: ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿದೆ. ಹೀಗಾಗಿ ನಿಮ್ಮ ತಪ್ಪುಗಳನ್ನು ಮುಚ್ಚಿಕೊಳ್ಳಲು ಸಿಬಿಐ ತನಿಖೆಗೆ ಆಗ್ರಹಿಸುತ್ತಿದ್ದೀರಿ. ಸರ್ಕಾರ ಸಿಐಡಿ, ನ್ಯಾಯಾಂಗ ತನಿಖೆಗೆ ಸಿದ್ಧವಿದೆ. ಅಗತ್ಯ ಬಿದ್ದರೆ ಸದನ ಸಮಿತಿ ರಚಿಸಿ ತನಿಖೆ ಎದುರಿಸುವುದಕ್ಕೂ ಸಿದ್ಧ ಎಂದು ಸಿದ್ದರಾಮಯ್ಯ ಹೇಳಿದರು. ನಮ್ಮ ಕಾಲದಲ್ಲಿ ಯಾವುದೇ ಅಕ್ರಮ ನಡೆದಿಲ್ಲ. ನೀವು ಭಂಡರು, ಭ್ರಷ್ಟರು. ವಿಧಾನಸಭೆ ಚುನಾವಣೆಗೆ ಹಣ ಹೊಂದಿಸುವುದಕ್ಕಾಗಿ ನಿಮ್ಮ ಸರ್ಕಾರದ ಅವಧಿಯಲ್ಲೇ ಡಿನೋಟಿಫೈ ಮಾಡಿದ್ದೀರಿ. ಯಡಿಯೂರಪ್ಪ ಕಾಲದಲ್ಲಿ 198 ಎಕರೆ, ಶೆಟ್ಟರ್ ಕಾಲದಲ್ಲಿ 541 ಎಕರೆ ಡಿನೋಟಿಫೈ ಆಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ನಿಮಗೆ ನಾಚಿಕೆಯಾಗುವುದಿಲ್ಲವೇ? ಮಾನ-ಮರ್ಯಾದೆ ಇಲ್ಲವೇ? ಈ ರಾಜ್ಯವನ್ನು ಹಾಳು ಮಾಡಿದವರು ನೀವು. ನಾನು ಅಕ್ರಮ ಎಸಗಿರುವುದನ್ನು ಸಾಬೀತುಪಡಿಸಿದರೆ ರಾಜಕೀಯ ನಿವೃತ್ತಿ ಪಡೆಯಲು ಸಿದ್ಧ ಎಂದು ಸವಾಲು ಹಾಕಿದರು.
ಆಗ ಮಧ್ಯಪ್ರವೇಶ ಮಾಡಿದ ಸ್ಪೀಕರ್, ಇಲಾಖೆಗಳ ಬೇಡಿಕೆ ಬಗ್ಗೆ ಚರ್ಚೆ ನಡೆಯಬೇಕಿದೆ. ಇರುವುದು ಒಂದೇ ದಿನ. ಅವಕಾಶ ಸದ್ಬಳಕೆ ಮಾಡಿಕೊಳ್ಳಿ ಎಂದು ಮನವಿ ಮಾಡಿದರೂ ಬಿಜೆಪಿ ಸದಸ್ಯರು ತಮ್ಮ ನಿಲುವಿನಿಂದ ಹಿಂದೆ ಸರಿಯಲಿಲ್ಲ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.