ಅಮೆರಿಕ ಜತೆ ಮಾತುಕತೆ: ಖುದ್ದು ಅಖಾಡಕ್ಕೆ ಇಳಿದ ಮೋದಿ, ಸುಷ್ಮಾ

ನವದೆಹಲಿ: ದೇವಯಾನಿ ಖೋಬ್ರಾಗಡೆ ವಿವಾದದ ಬಳಿಕ ತೀರಾ ಕೆಳಮಟ್ಟಕ್ಕೆ ಇಳಿದಿರುವ ಭಾರತ ಮತ್ತು ಅಮೆರಿಕ ಸಂಬಂಧ ಸುಧಾರಣೆಗೆ ಪ್ರಯತ್ನಗಳು ನಡೆಯುತ್ತಿವೆ. ಇಲ್ಲಿ ವಿಶೇಷವೆಂದರೆ ಖುದ್ದು ಪ್ರಧಾನಿ ನರೇಂದ್ರ ಮೋದಿ ಮತ್ತು ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ಅವರೇ ಅಮೆರಿಕ ಜತೆ ಮಾತುಕತೆಗೆ ಮುಂದಾಗಿದ್ದಾರೆ.
ಈಗಾಗಲೇ ನಿಗದಿಯಾಗಿರುವಂತೆ ಪ್ರಧಾನಿಯವರು ಸೆಪ್ಟೆಂಬರ್ ತಿಂಗಳಲ್ಲಿ ಅಮೆರಿಕ ಪ್ರವಾಸ ಕೈಗೊಳ್ಳಲಿದ್ದಾರೆ. ಅದಕ್ಕೂ ಮುನ್ನ ಎರಡು ರಾಷ್ಟ್ರಗಳ ನಡುವೆ ಇರುವ ಅಡೆ ತಡೆ ನಿವಾರಿಸಬೇಕು ಎನ್ನುವುದು ಮೋದಿ ಸರ್ಕಾರದ ಆದ್ಯತೆಯಾಗಿದೆ. ಅದಕ್ಕೆ ಪೂರಕವಾಗಿ ದಕ್ಷಿಣ ಮತ್ತು ಕೇಂದ್ರ ಏಷ್ಯಾ ವ್ಯವಹಾರಗಳಿಗಾಗಿನ ಅಮೆರಿಕದ ಸಚಿವೆ ನಿಶಾ ಬಿಸ್ವಾಲ್ ನವದೆಹಲಿಗೆ ಆಗಮಿಸಿದ್ದಾರೆ. ನವದೆಹಲಿಯಲ್ಲಿ ಪ್ರಧಾನಮಂತ್ರಿ ಕಚೇರಿ ಮತ್ತು ವಿದೇಶಾಂಗ ಇಲಾಖೆ ವ್ಯವಹಾರಗಳ ಸಚಿವಾಲಯದ ಹಿರಿಯ ಅಧಿಕಾರಿಗಳ ಜತೆ ಮಾತುಕತೆ ನಡೆಸಿದರು.
ಕೆರ್ರಿ- ಸ್ವರಾಜ್ ಚರ್ಚೆ: ನರೇಂದ್ರ ಮೋದಿ ಅವರು ಅಮೆರಿಕ ಪ್ರವಾಸ ಕೈಗೊಳ್ಳಲು ಅನುವಾಗುವಂತೆ ಕೇಂದ್ರ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಮತ್ತು ಅಮೆರಿಕದ ವಿದೇಶಾಂಗ ಸಚಿವ ಜಾನ್ ಕೆರ್ರಿ ನಡುವೆ ವ್ಯೂಹಾತ್ಮಕ ಸಭೆ ನಡೆಯಲಿದೆ. ಈ ಸಂದರ್ಭದಲ್ಲಿ ಮೋದಿ ಮತ್ತು ಒಬಾಮ ನಡುವೆ ಯಾವ ವಿಚಾರಗಳನ್ನು ಚರ್ಚಿಸಬಹುದು ಎಂಬ ಬಗ್ಗೆ ಸಮಾಲೋಚನೆ ನಡೆಯಲಿದೆ. ಶೀಘ್ರದಲ್ಲೇ ಈ ಮಹತ್ವದ ಸಭೆ ನಡೆಯಲಿದ್ದು, ಸುಷ್ಮಾ ಸ್ವರಾಜ್ ಅಧ್ಯಕ್ಷತೆ ವಹಿಸಲಿದ್ದಾರೆ.
ಕಳೆದ ತಿಂಗಳು ಪ್ರಕಟವಾದ ಫಲಿತಾಂಶದ ವೇಳೆ ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ ಅವರು ಖುದ್ದಾಗಿ ನರೇಂದ್ರ ಮೋದಿಯವರಿಗೆ ದೂರವಾಣಿ ಕರೆ ಮಾಡಿ ಅಭಿನಂದಿಸಿದ್ದರು. ಜತೆಗೆ ಅಮೆರಿಕಕ್ಕೆ ಭೇಟಿ ನೀಡುವಂತೆ ಆಹ್ವಾನ ನೀಡಿದ್ದರು. ಈ ವರ್ಷದ ಫೆಬ್ರವರಿಯಲ್ಲಿ ನವದೆಹಲಿಯಲ್ಲಿ ಅಮೆರಿಕದ ರಾಯಭಾರಿಯಾಗಿದ್ದ ನ್ಯಾನ್ಸಿ ಪೊವೆಲ್ ಅವರು ಗಾಂಧಿನಗರದಲ್ಲಿ ಮೋದಿಯವರನ್ನು ಭೇಟಿಯಾಗಿದ್ದರು.
15ರಿಂದ ಪಿಎಂ ಭೂತಾನ್ ಪ್ರವಾಸ
ಪ್ರಧಾನಿ ನರೇಂದ್ರ ಮೋದಿ ಅವರು ಜೂ.15ರಿಂದ ಎರಡು ದಿನಗಳ ಕಾಲ ಭೂತಾನ್ ಪ್ರವಾಸ ಕೈಗೊಳ್ಳಲಿದ್ದಾರೆ. ಮೇ 26ರಂದು ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಮೋದಿಯವರ ಪ್ರಥಮ ವಿದೇಶ ಪ್ರವಾಸ ಇದಾಗಲಿದೆ. ಈ ಸಂದರ್ಭದಲ್ಲಿ ದ್ವಿಪಕ್ಷೀಯ ಸಂಬಂಧ ಸುಧಾರಣೆ ನಿಟ್ಟಿನಲ್ಲಿ ಮೋದಿ ಭೂತಾನ್ ಸರ್ಕಾರದ ನಾಯಕರ ಜತೆ ಚರ್ಚಿಸಲಿದ್ದಾರೆ. ಮೇ 26ರಂದು ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಭೂತಾನ್ ಪ್ರಧಾನಿ ತೆಶೆರಿಂಗ್ ತೋಗ್ಬೇ ಆಗಮಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


