ಪ್ರಧಾನ ಸುದ್ದಿ

ಪರಮೇಶ್ವರ್‌ಗೆ ಸಿಎಂ ಟಾಂಗ್

ಪರಮೇಶ್ವರ್‌ಗೆ ಸಿಎಂ ಟಾಂಗ್
Published On :

ಕನ್ನಡಪ್ರಭ ವಾರ್ತೆ ,  ಬೆಂಗಳೂರು ,  ಜೂ.21
ಸಮರ್ಪಕವಾಗಿ ಕೆಲಸ ಮಾಡದ ಸಚಿವರನ್ನು ಸಂಪುಟದಿಂದ ಕೈ ಬಿಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಹೇಳಿರುವುದು ಅವರ ವೈಯಕ್ತಿಕ ಅಭಿಪ್ರಾಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟಾಂಗ್ ನೀಡಿದ್ದಾರೆ.
ಮುಖ್ಯಮಂತ್ರಿಗಳ ಈ ಹೇಳಿಕೆಯಿಂದ ಪಕ್ಷ ಮತ್ತು ಸರ್ಕಾರದ ನಡುವೆ ಸಮನ್ವಯ ಇಲ್ಲ ಎಂಬುದು ಮತ್ತೊಮ್ಮೆ ಅನಾವರಣಗೊಂಡಿದೆ. ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ವ್ಯಕ್ತವಾದ ಅಭಿಪ್ರಾಯದ ಆಧಾರದ ಮೇಲೆ ಅಧಿವೇಶನದ ನಂತರ ಸಂಪುಟದಲ್ಲಿ ಲಘು ಬದಲಾವಣೆ ಮಾಡಲಾಗುವುದು. ಅಸಮರ್ಥ ಸಚಿವರನ್ನು ಕೈ ಬಿಡಲಾಗುವುದು ಎಂದು ಜಿ. ಪರಮೇಶ್ವರ ಕೆಲ ದಿನಗಳ ಹಿಂದಷ್ಟೇ ಹೇಳಿಕೆ ನೀಡಿದ್ದರು. ಅರಿವು ಯೋಜನೆಗಾಗಿ ಪರೀಕ್ಷಾ ಪ್ರಾಧಿಕಾರಕ್ಕೆ 15 ಕೋಟಿ ಚೆಕ್ ಹಸ್ತಾಂತರಿಸಿದ ನಂತರ ಸುದ್ದಿಗಾರರು ಈ ಬಗ್ಗೆ ಪ್ರಶ್ನಿಸಿದಾಗ ಪರಮೇಶ್ವರ ಹೇಳಿಕೆ ವೈಯಕ್ತಿಕವಾದದ್ದು ಎಂದು ಸಿಎಂ ಸಿದ್ದರಾಮಯ್ಯ ವ್ಯಾಖ್ಯಾನ ಮಾಡಿದ್ದಾರೆ.
ಈ ಮೂಲಕ ಸಂಪುಟ ಪುನಾರಚನೆ ಮತ್ತು ಅಸಮರ್ಥ ಸಚಿವರನ್ನು ಕೈ ಬಿಡುವ ಪ್ರಸ್ತಾಪವನ್ನು ಸಿದ್ದರಾಮಯ್ಯ ತಳ್ಳಿ ಹಾಕಿದ್ದಾರೆ. ಪರಮೇಶ್ವರ ಅವರ ಹೇಳಿಕೆ ಬಗ್ಗೆ ನಾನು ಏನೂ ಹೇಳುವುದಿಲ್ಲ. ಅದು ಅವರ ವೈಯಕ್ತಿಕ ಅಭಿಪ್ರಾಯ. ವಿಧಾನ ಮಂಡಲ ಅಧಿವೇಶನ ಬಳಿಕ ಸಂಪುಟದಲ್ಲಿ ಖಾಲಿ ಇರುವ ಸ್ಥಾನವನ್ನು ಹೈಕಮಾಂಡ್ ಜತೆ ಚರ್ಚಿಸಿ ಭರ್ತಿ ಮಾಡಲಾಗುವುದು. ನಿಗಮ-ಮಂಡಳಿ ನೇಮಕ ಪ್ರಕ್ರಿಯೆಗೂ ಆಗ ಚಾಲನೆ ನೀಡಲಾಗುವುದು ಎಂದು ಹೇಳಿದ್ದಾರೆ.
ಅಹಿಂದ ವರ್ಗಕ್ಕೆ ಸರ್ಕಾರದಲ್ಲಿ ಹೆಚ್ಚಿನ ಪ್ರಾತಿನಿಧ್ಯ ನೀಡುವುದು ಸರಿಯಲ್ಲ. ಎಲ್ಲರನ್ನೂ ಸಮಾನವಾಗಿ ನೋಡಬೇಕು ಎಂಬ ಮಾಜಿ ಸಂಸದ ಎಂ.ವಿ.ರಾಜಶೇಖರನ್ ಅವರ ಹೇಳಿಕೆ ಬಗ್ಗೆ ಪ್ರಶ್ನಿಸಿದಾಗ ಈ ಬಗ್ಗೆ ನಾನು ಯಾವ ಪ್ರತಿಕ್ರಿಯೆಯನ್ನೂ ನೀಡುವುದಿಲ್ಲ ಎಂದು ಹೇಳಿದ್ದಾರೆ.
ಡಿಡಿ ಹಸ್ತಾಂತರ: ಅಲ್ಪ ಸಂಖ್ಯಾತ ವಿದ್ಯಾರ್ಥಿಗಳಿಗೆ ವೃತ್ತಿ ಆಧಾರಿತ ಶಿಕ್ಷಣ ನೀಡಲು ಆರಂಭಿಸಿರುವ ಅರಿವು ಯೋಜನೆ ಅನ್ವಯ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ರಾಜ್ಯ ಸರ್ಕಾರದ ವತಿಯಿಂದ ರು. 15 ಕೋಟಿ ಮೌಲ್ಯದ ಡಿಡಿ ಹಸ್ತಾಂತರಿಸಿದ ಅವರು, ಮೊದಲು ವಿದ್ಯಾರ್ಥಿಗಳಿಗೆ ಸಮರ್ಪಕವಾಗಿ ಸಾಲ ಸೌಲಭ್ಯ ನೀಡಲು ತೊಂದರೆಯಾಗುತ್ತಿತ್ತು. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಪರಿಸ್ಥಿತಿ ಸುಧಾರಿಸಿದೆ ಎಂದರು.
ವಾರ್ಷಿಕ ಆದಾಯ ರು. 4.5 ಲಕ್ಷಕ್ಕಿಂತ ಕಡಿಮೆ ಇರುವವರು ಈ ಸೌಲಭ್ಯ ಪಡೆದುಕೊಳ್ಳಬಹುದು. 15,963 ವಿದ್ಯಾರ್ಥಿಗಳಿಗೆ ಇದರಿಂದ ಅನುಕೂಲವಾಗಲಿದೆ ಎಂದರು. ಕ್ರಿಶ್ಚಿಯನ್ ಸಮುದಾಯದ ವಿದ್ಯಾರ್ಥಿಗಳಿಗೆ 10 ಕೋಟಿ ಪ್ರತ್ಯೇಕವಾಗಿ ಕಾಯ್ದಿರಿಸಲಾಗಿದ್ದು, 3333 ವಿದ್ಯಾರ್ಥಿಗಳಿಗೆ ಸಾಲ ನೀಡುವ ಗುರಿ ಇದೆ ಎಂದು ಹೇಳಿದರು.
ನಿರೀಕ್ಷೆ ಹುಸಿ
ರೈಲು ಪ್ರಯಾಣ ದರ ಹೆಚ್ಚಳ ಮಾಡುವ ಮೂಲಕ ಕೇಂದ್ರ ಸರ್ಕಾರ ಜನರ ನಿರೀಕ್ಷೆಯನ್ನು ಹುಸಿ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ಜನರು ಇಟ್ಟಿದ್ದ ನಂಬಿಕೆ ಸುಳ್ಳಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಅಧಿಕಾರಕ್ಕೆ ಬರುವ ಪೂರ್ವದಲ್ಲಿ ಅವರು ಬೆಲೆ ಏರಿಕೆಗೆ ಕಡಿವಾಣ ಹಾಕುವುದಾಗಿ ದೇಶದ ಜನತೆಗೆ ಭರವಸೆ ನೀಡಿದ್ದರು. ಆದರೆ ರೇಲ್ವೆ ಪ್ರಯಾಣ ದರವನ್ನು ಶೇ. 14.2ರಷ್ಟು ಹಾಗೂ ಸರಕು ಸಾಗಣೆ ದರವನ್ನು ಶೇ.6.5ರಷ್ಟು ಹೆಚ್ಚಿಸಿ ಸಾರ್ವಜನಿಕರ ನಂಬಿಕೆ ಮೇಲೆ ಬರೆ ಎಳೆದಿದ್ದಾರೆ ಎಂದು ಆರೋಪಿಸಿದರು. ಪ್ರಧಾನಿ ಮೋದಿ ಅವರು ಹಿಂದಿ ಭಾಷೆಯನ್ನು ಒತ್ತಾಯಪೂರ್ವಕವಾಗಿ ಹೇರಲು ಹೊರಟಿದ್ದಾರೆ. ಇದರಿಂದ ಪ್ರಾಂತೀಯ ಭಾಷೆಗಳಿಗೆ ತೊಂದರೆಯಾಗುತ್ತದೆ. ಪ್ರಧಾನಿಯವರ ಈ ನಿರ್ಧಾರವನ್ನು ನಾನು ವಿರೋಧಿಸುತ್ತೇನೆ ಎಂದರು. ಹಿಂದಿ ಮಾತನಾಡುವ ರಾಜ್ಯಗಳಲ್ಲಿ ಹಿಂದಿ ಭಾಷೆಗೆ ಪ್ರಾಧಾನ್ಯತೆ ನೀಡಲಿ. ಆದರೆ ದಕ್ಷಿಣ ಭಾರತದ ರಾಜ್ಯಗಳ ಮೇಲೆ ಹಿಂದಿ ಭಾಷೆಯನ್ನು ಒತ್ತಾಯಪೂರ್ವಕವಾಗಿ ಹೇರುವುದು ಸರಿಯಲ್ಲ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.