ಪ್ರಧಾನ ಸುದ್ದಿ

ಎಂಎಂಎಲ್ ಗಣಿ ಅಕ್ರಮವೂ ಲೋಕಾ ಎಸ್‌ಐಟಿ ವ್ಯಾಪ್ತಿಗೆ; ಐಎಎಸ್, ಐಪಿಎಸ್ ಅಧಿಕಾರಿಗಳ ವಿರುದ್ಧ ವಿಚಾರಣೆಗೆ ಒಪ್ಪಿಗೆ

ಎಂಎಂಎಲ್ ಗಣಿ ಅಕ್ರಮವೂ ಲೋಕಾ ಎಸ್‌ಐಟಿ ವ್ಯಾಪ್ತಿಗೆ; ಐಎಎಸ್, ಐಪಿಎಸ್ ಅಧಿಕಾರಿಗಳ ವಿರುದ್ಧ ವಿಚಾರಣೆಗೆ ಒಪ್ಪಿಗೆ
Published On :

ಸಂಪುಟ ನಿರ್ಣಯ
-ಎಂಎಂಎಲ್ ಅಕ್ರಮ ಗಣಿಗಾರಿಕೆ ಬಗ್ಗೆ ವಿಶೇಷ ತನಿಖಾ ತಂಡದಿಂದ ತನಿಖೆ
-ಇದು 642 ಕೋಟಿ ಮೌಲ್ಯದ ಅವ್ಯವಹಾರ-ಲೋಕಾ ವರದಿಯಲ್ಲಿ ಉಲ್ಲೇಖ
-ಆದಾಯಕ್ಕೆ ಮೀರಿದ ಆಸ್ತಿ ಸಂಗ್ರಹ ಮಾಡಿರುವ ಐಎಎಸ್, ಐಪಿಎಸ್ ಅಧಿಕಾರಿಗಳ ವಿರುದ್ಧವೂ ತನಿಖೆ
-ಸರ್ಕಾರದ ಮೇಲೆ ಮುನಿಸಿಕೊಂಡಿರುವ ಲೋಕಾಯುಕ್ತರ ಸಮಾಧಾನ ಪಡಿಸುವ ಯತ್ನ
-ಮುಂದಿನ ದಿನಗಳಲ್ಲಿ ಕೆಎಎಸ್ ಮತ್ತು ಇಲಾಖೆ ಅಧಿಕಾರಿಗಳ ಕುರಿತ ತನಿಖೆ

ಕನ್ನಡಪ್ರಭವಾರ್ತೆ ಬೆಂಗಳೂರು ಮಾ.3
ಮೈಸೂರು ಮಿನರಲ್ಸ್ ಲಿಮಿಟೆಡ್ (ಎಂಎಂಎಲ್) ನಲ್ಲಿ ನಡೆದ ಅಕ್ರಮ ಗಣಿಗಾರಿಕೆಯನ್ನು ಲೋಕಾಯುಕ್ತ ಪೊಲೀಸ್ ವಿಶೇಷ ತನಿಖೆಗೆ ಒಪ್ಪಿಸಲು ನಿರ್ಧರಿಸಿರುವ ರಾಜ್ಯ ಸರ್ಕಾರ, ನಿವೃತ್ತ ಅಧಿಕಾರಿಗಳನ್ನು ತನಿಖೆ ವ್ಯಾಪ್ತಿಗೆ ತರಲು ತೀರ್ಮಾನಿಸಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಆದಾಯಕ್ಕೆ ಮೀರಿ ಆಸ್ತಿ ಸಂಗ್ರಹಿಸಿ ಲೋಕಾಯುಕ್ತ ಬಲೆಗೆ ಬಿದ್ದಿದ್ದ ಐಎಎಸ್, ಐಪಿಎಸ್ ಹಾಗೂ ಐಎಫ್‌ಎಸ್ ಅಧಿಕಾರಿಗಳ ವಿರುದ್ಧ ವಿಚಾರಣೆ ನಡೆಸುವುದಕ್ಕೆ ಒಪ್ಪಿಗೆ ನೀಡಲು ನಿರ್ಧರಿಸಲಾಗಿದೆ.
ಈ ಮೂಲಕ ಸರ್ಕಾರದ ವಿರುದ್ಧ ಮುನಿಸಿಕೊಂಡಿದ್ದ ಲೋಕಾಯುಕ್ತರನ್ನು ಶಾಂತಗೊಳಿಸುವ ಪ್ರಯತ್ನ ನಡೆಸಲಾಗಿದ್ದು, ಕೆಎಎಸ್ ಹಾಗೂ ಇತರೆ ಇಲಾಖೆ ಅಧಿಕಾರಿಗಳ ವಿರುದ್ಧ ಕಾಲಾನುಕ್ರಮದಲ್ಲಿ ತನಿಖೆಗೆ ಅನುಮತಿ ನೀಡಲು ನಿರ್ಧರಿಸಲಾಗಿದೆ ಎಂದು ಸಂಪುಟ ಸಭೆ ಬಳಿಕ ನಡೆದ ಸುದ್ದಿಗೋಷ್ಠಿಯಲ್ಲಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ.ಜಯಚಂದ್ರ ತಿಳಿಸಿದ್ದಾರೆ.
ಗಣಿ ಗದ್ದಲ: ಲೋಕಾಯುಕ್ತ ವರದಿಯಲ್ಲಿ ಉಲ್ಲೇಖಿಸಿರುವ ಪ್ರಕಾರ ಎಂಎಂಎಲ್‌ನಲ್ಲಿ ನಡೆದ ಅಕ್ರಮ ಗಣಿಗಾರಿಕೆ ಬಗ್ಗೆ ಲೋಕಾಯುಕ್ತ ಎಸ್‌ಐಟಿ ಮೂಲಕ ತನಿಖೆ ನಡೆಸಲು ನಿರ್ಧರಿಸಲಾಗಿದೆ. ಈ ಸಂಬಂಧ ಸಂಪುಟ ಸಭೆಯಲ್ಲಿ ಬಿರುಸಿನ ಚರ್ಚೆ ನಡೆದಿದ್ದು, ಅಂತಿಮವಾಗಿ ತನಿಖೆಗೆ ಒಪ್ಪಿಗೆ ನೀಡಲಾಗಿದೆ.
ಒಟ್ಟು ರು. 642 ಕೋಟಿ ಅವ್ಯವಹಾರ ನಡೆದಿದೆ ಎಂದು ಲೋಕಾಯುಕ್ತ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಈ ಹಿನ್ನೆಲೆಯಲ್ಲಿ ಅಂದು ಎಂಎಂಎಲ್ ನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸಿದ್ದ ಸರ್ಕಾರದ ಹಾಲಿ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ವಿ.ಉಮೇಶ್, ನಿವೃತ್ತ ಐಎಎಸ್ ಅಧಿಕಾರಿಗಳಾದ ಐ.ಆರ್.ಪೆರುಮಾಳ್, ಗಂಗಾರಾಂ ಭಡೇರಿಯಾ, ಮಹೇಂದ್ರ ಜೈನ್, ನಿವೃತ್ತ ಡಿಜಿಪಿ ಜೀಜಾ ಮಾಧವ ಹರಿಸಿಂಗ್, ಗಣಿ ಮತ್ತು ಭೂವಿಜ್ಞಾನ ಇಲಾಖೆ ನಿವೃತ್ತ ಅಧಿಕಾರಿಗಳಾದ ಶಿವಲಿಂಗಮೂರ್ತಿ, ಬಸಪ್ಪ ರೆಡ್ಡಿ, ಮಂಜುನಾಥ್, ಕೊಂಗವಾಡ, ಅಶೋಕ್ ವಿರುದ್ಧ ಮತ್ತೆ ಎಸ್‌ಐಟಿ ಮೂಲಕ ತನಿಖೆ ನಡೆಸಲು ಒಪ್ಪಿಗೆ ನೀಡಲಾಗಿದೆ.
ತಿದ್ದುಪಡಿ : ಕರ್ನಾಟಕ ಭೂ ಸುಧಾರಣಾ ಕಾಯ್ದೆ ಸೆಕ್ಷನ್ 109, ಭೂ ಕಂದಾಯ ಕಾಯ್ದೆ ಸೆಕ್ಷನ್ 95ಕ್ಕೆ ತಿದ್ದುಪಡಿ ತರುವುದಕ್ಕೆ ಸಂಪುಟ ಒಪ್ಪಿಗೆ ನೀಡಿದೆ. ಕೈಗಾರಿಕೆ ಹಾಗೂ ಸರ್ಕಾರಿ ಯೋಜನೆಗಳ ಭೂಸ್ವಾಧೀನ ಪ್ರಕ್ರಿಯೆ ಸುಗಮಗೊಳಿಸಲು ಈ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ಮುಂದಿನ ಅಧಿವೇಶನದಲ್ಲಿ ಮಂಡಿಸಲಾಗುವುದು.
ವ್ಯಾಖ್ಯಾನ : ರಕ್ಷಿತಾರಣ್ಯ, ಅಭಯಾರಣ್ಯಗಳನ್ನು ಹೊರತುಪಡಿಸಿ ಸುಪ್ರೀಂ ಕೋರ್ಟ್ ಇತ್ತೀಚೆಗೆ ಅರಣ್ಯ ಎಂಬ ಪದಕ್ಕೆ ಹೊಸ ವ್ಯಾಖ್ಯಾನ ನೀಡಿದೆ. ಇದರಿಂದ ಸರ್ಕಾರದ ಸಿಎನ್‌ಡಿ ಭೂಮಿಗಳನ್ನೂ ಅರಣ್ಯ ಎಂದು ಪರಿಗಣಿಸಲಾಗುತ್ತಿದ್ದು, ನಿವಾಸಿಗಳನ್ನು ಒಕ್ಕಲೆಬ್ಬಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಇದರಿಂದ ಗ್ರಾಮೀಣ ಪ್ರದೇಶದಲ್ಲಿ ಸರ್ಕಾರಕ್ಕೆ ತೀವ್ರ ಇರುಸು ಮುರುಸಾಗುತ್ತಿರುವ ಹಿನ್ನೆಲೆಯಲ್ಲಿ ಅರಣ್ಯ ಎಂಬ ಪದಕ್ಕೆ ವ್ಯಾಖ್ಯಾನ ಮಾಡಲು ರಾಜ್ಯ, ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ವಿವಿಧ ಸಮಿತಿ ರಚಿಸಲು ನಿರ್ಧರಿಸಲಾಗಿದೆ. ಆರು ತಿಂಗಳಲ್ಲಿ ಈ ಸಮಿತಿ ಅರಣ್ಯ ಎಂಬ ಶಬ್ದಕ್ಕೆ ವ್ಯಾಖ್ಯಾನ ಮಾಡಬೇಕಾಗುತ್ತದೆ. ಒಟ್ಟು  40 ವಿಷಯಗಳಿಗೆ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ.

ವಿಚಾರಣೆಗೆ ಒಪ್ಪಿಗೆ
ಸೇವೆಯಲ್ಲಿದ್ದ ಸಂದರ್ಭದಲ್ಲಿ ಆದಾಯಕ್ಕೆ ಮೀರಿ ಆದಾಯ ಸಂಗ್ರಹಿಸಿದ ಆರೋಪದ ಮೇಲೆ ಲೋಕಾಯುಕ್ತ ದಾಳಿಗೆ ಒಳಗಾಗಿದ್ದ ಹಿರಿಯ ಐಎಎಸ್ ಅಧಿಕಾರಿ ಬಾಬುರಾವ್ ಮುಡವಿ, ಡಾ.ವಿ.ಚಂದ್ರಶೇಖರ್, ಬಲದೇವಕೃಷ್ಣ ವಿರುದ್ಧ ವಿಚಾರಣೆ ನಡೆಸುವುದಕ್ಕೆ ಅನುಮತಿ ನೀಡಿದೆ. ಆದರೆ ಇವರೆಲ್ಲರೂ ಈಗ ನಿವೃತ್ತರಾಗಿದ್ದಾರೆ. ಅದೇ ರೀತಿ ಇನ್ನೂ ಸೇವೆ ಸಲ್ಲಿಸುತ್ತಿರುವ ಐಪಿಎಸ್ ಅಧಿಕಾರಿ ಡಿ.ಸಿ.ರಾಜಪ್ಪ ವಿರುದ್ಧ ವಿಚಾರಣೆಗೆ ಅನುಮತಿ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲು ನಿರ್ಧರಿಸಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.