ಫಲಿತಾಂಶಕ್ಕೂ ಮುನ್ನ ಅಗ್ನಿಪರೀಕ್ಷೆ!

ಬೆಂಗಳೂರು: ಲೋಕಸಭಾ ಫಲಿತಾಂಶಕ್ಕೆ ಮುನ್ನವೇ ರಾಜ್ಯದಲ್ಲಿ ಸಮನ್ವಯ ಸಮಿತಿ ಸಭೆ ನಡೆಸಲು ನಿರ್ಧರಿಸಿರುವ ಕಾಂಗ್ರೆಸ್ ಹೈಕಮಾಂಡ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಸಂಪುಟದ ಪ್ರಗತಿ ಪರಿಶೀಲನೆ ನಡೆಸಲಿದೆ.
ಈ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ವಹಿಸಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಸಮನ್ವಯ ಸಮಿತಿ ಅಧ್ಯಕ್ಷರೂ ಆಗಿರುವ ದಿಗ್ವಿಜಯ್ ಸಿಂಗ್ ಮೇ 13ರಂದು ರಾಜ್ಯಕ್ಕೆ ಆಗಮಿಸಲಿದ್ದಾರೆ. ಕುತೂಹಲಕಾರಿ ಸಂಗತಿ ಎಂದರೆ ಅಂದು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ವರ್ಷ ತುಂಬುತ್ತದೆ. ಈ ಪರ್ವ ಕಾಲದಲ್ಲೇ ಸಂಪುಟದ ಕೆಲವು ಸಚಿವರು ಹೈಕಮಾಂಡ್ನ ಪ್ರಶ್ನೆ ಎದುರಿಸುವ ಸನ್ನಿವೇಶ ನಿರ್ಮಾಣವಾಗಿದೆ. ಕಾಂಗ್ರೆಸ್ ಮೂಲಗಳ ಪ್ರಕಾರ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ರಾಜ್ಯ ವಿದ್ಯಮಾನಗಳ ಮೇಲೆ ಕಣ್ಣಿಡಲು ಕಳುಹಿಸಿದ್ದ ರಹಸ್ಯ ತಂಡ ನೀಡಿದ ತನಿಖಾ ವರದಿ ಹಿನ್ನೆಲೆಯಲ್ಲಿ ತುರ್ತು ಸಮನ್ವಯ ಸಭೆ ಕರೆಯಲಾಗಿದೆ. ಕೆಲವು ಸಚಿವರ ಖಾತೆ ಬದಲಾವಣೆ ಹಾಗೂ ಸಂಪುಟದಿಂದ ಕೈ ಬಿಡುವವರ ಬಗ್ಗೆ ಆ ಸಂದರ್ಭದಲ್ಲಿ ಚರ್ಚೆ ನಡೆಯಲಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯನವರೂ ಸಮನ್ವಯ ಸಮಿತಿ ಸದಸ್ಯರಾಗಿದ್ದು, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ, ಸಚಿವರಾದ ಕೆ.ಜೆ.ಜಾರ್ಜ್, ಡಿ.ಕೆ.ಶಿವಕುಮಾರ್ ಹಾಗೂ ಎಐಸಿಸಿ ಕಾರ್ಯದರ್ಶಿ ಡಾ.ಚಲ್ಲಕುಮಾರ್ ಸಮಿತಿಯ ಇತರೆ ಸದಸ್ಯರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಒಂದು ವರ್ಷದ ಸಾಧನೆ ಬಗ್ಗೆ ದಿಗ್ವಿಜಯ್ ಸಿಂಗ್ ಮಾಹಿತಿ ಕೇಳಲಿದ್ದಾರೆ ಎಂದು ತಿಳಿದು ಬಂದಿದೆ. ಎಲ್ಲಕ್ಕಿಂತ ಮುಖ್ಯವಾಗಿ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಿಂದ ಪಕ್ಷ ಇಂತಿಷ್ಟೇ ಸ್ಥಾನಗಳಲ್ಲಿ ಗೆಲವು ಸಾಧಿಸಬೇಕು ಎಂಬ ಟಾರ್ಗೆಟ್ ನೀಡಲಾಗಿತ್ತು. ಆದರೆ ಕೇಂದ್ರ ಗುಪ್ತದಳದಿಂದ ಹೈಕಮಾಂಡ್ಗೆ ಪ್ರತಿಕೂಲ ಮಾಹಿತಿ ಲಭಿಸಿದೆ. ಈ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಲಿದೆ. ಏ.17ರ ಬಳಿಕ ನಡೆಯುವ ಈ ಸಭೆ ಭಾರಿ ಬದಲಾವಣೆಯ ಸೂಚನೆ ನೀಡಿದ್ದು, ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇಲಾಖಾವಾರು ಸಾಧನೆಯನ್ನು ಹೇಳುವಂತೆ ಎಲ್ಲ ಸಚಿವರಿಗೆ ಆದೇಶ ನೀಡಿದ್ದಾರೆ ಎಂದು ತಿಳಿದು ಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


