ಕೈ ಕೊಟ್ಟ ಸಿಎಂಗಳು
ನವದೆಹಲಿ: ಮೋದಿ ಪ್ರಮಾಣ ವಚನ ಸಮಾರಂಭಕ್ಕೆ ಕರ್ನಾಟಕ ಹಾಗೂ ಕೇರಳ ಮುಖ್ಯಮಂತ್ರಿಗಳು ಗೈರಾಗಲಿದ್ದಾರೆ. ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಸಹ ಸಮಾರಂಭದಿಂದ ದೂರ ಉಳಿದಿದ್ದಾರೆ.
ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಯಲ್ಲಿ ಮೇ 26ರಂದು ನಡೆಯಲಿರುವ ಮೋದಿ ಪದಗ್ರಹಣ ಸಮಾರಂಭಕ್ಕೆ ಹಾಜರಾಗುವುದಿಲ್ಲ ಎಂಬುದು ಸ್ಪಷ್ಟವಾಗಿದೆ. ಮುಖ್ಯಮಂತ್ರಿ ಕಾರ್ಯಾಲಯ ಬಿಡುಗಡೆ ಮಾಡಿರುವ ಮೇ 26ರ ಮುಖ್ಯಮಂತ್ರಿಯ ಕಾರ್ಯಕ್ರಮಗಳ ಅಧಿಕೃತ ಪಟ್ಟಿಯಲ್ಲಿ, ದೆಹಲಿ ಕಾರ್ಯಕ್ರಮದ ಬಗ್ಗೆ ಉಲ್ಲೇಖವಿಲ್ಲ. ಇದು, ಸಿದ್ದರಾಮಯ್ಯ ಅವರು ಪದಗ್ರಹಣ ಸಮಾರಂಭದಿಂದ ದೂರ ಉಳಿಯುವುದನ್ನು ಸ್ಪಷ್ಟವಾಗಿಸಿದೆ. ಚುನಾವಣಾ ಫಲಿತಾಂಶ ಬಂದ ನಂತರ, ಮೋದಿಯವರನ್ನು ಅಭಿನಂದಿಸಿದ್ದ ಸಿದ್ದರಾಮಯ್ಯ, ಮೋದಿಯವರಿಗೆ ಶುಭ ಕೋರಿದ್ದರಲ್ಲದೇ, ನೂತನವಾಗಿ ಅಸ್ತಿತ್ವಕ್ಕೆ ಬರಲಿರುವ ಮೋದಿ ಸರ್ಕಾರ, ಕರ್ನಾಟಕದೊಂದಿಗೆ ಉತ್ತಮ ಬಾಂಧವ್ಯ ಹೊಂದಲಿದೆಯೆಂದು ಆಶಿಸಿದ್ದರು.
ಚಾಂಡಿಯೂ ಗೈರು: ಕೇರಳ ಮುಖ್ಯಮಂತ್ರಿ ಉಮ್ಮನ್ ಚಾಂಡಿ ಅವರು, ದೆಹಲಿಯಲ್ಲಿ ನಡೆಯಲಿರುವ ಮೋದಿ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಹಾಜರಾಗುವುದಿಲ್ಲ ಎಂಬುದು ಖಚಿತವಾಗಿದೆ.
ಮುಖ್ಯಮಂತ್ರಿ ಕಾರ್ಯಾಲಯದ ಮೂಲಗಳ ಪ್ರಕಾರ, ಉಮನ್ ಚಾಂಡಿ ಅವರಿಗೆ ಮೋದಿ ಪ್ರಮಾಣ ವಚನ ಸಮಾರಂಭಕ್ಕೆ ಆಗಮಿಸಲು ಆಹ್ವಾನ ಪತ್ರ ಕಳುಹಿಸಲಾಗಿತ್ತು. ಆದರೆ, ಸಮಯದ ಅಭಾವದ ಕಾರಣದಿಂದ ಅವರು ಸಮಾರಂಭಕ್ಕೆ ಹೋಗಲು ಆಗುತ್ತಿಲ್ಲ. ಈ ವಿಚಾರವನ್ನು, ಮೋದಿಯವರಿಗೆ ಚಾಂಡಿ ಅವರು ದೂರವಾಣಿ ಮುಖೇನ ಆಗಲೇ ತಿಳಿಸಿದ್ದಾರೆ.
ತಮ್ಮ ಮುಂದಿನ ದೆಹಲಿ ಭೇಟಿಯಲ್ಲಿ ಚಾಂಡಿ ಅವರು ಮೋದಿಯವರನ್ನು ಭೇಟಿಯಾಗಲಿದ್ದಾರೆ ಎಂದು ಮೂಲಗಳು ಹೇಳಿವೆ.
ನವೀನ್ ಸಹ ಬರಲ್ಲ: ಒಡಿಶಾದ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರೂ, ಮೋದಿ ಅಧಿಕಾರ ಸ್ವೀಕಾರ ಸಮಾರಂಭಕ್ಕೆ ಹಾಜರಾಗುತ್ತಿಲ್ಲ. ಇತ್ತೀಚೆಗಷ್ಟೇ, ಒಡಿಶಾದ ಮುಖ್ಯಮಂತ್ರಿಯಾಗಿ ಸತತ ನಾಲ್ಕನೇ ಬಾರಿ ಪ್ರಮಾಣ ವಚನ ಸ್ವೀಕರಿಸಿದ ನವೀನ್ ಅವರು ನರೇಂದ್ರ ಮೋದಿಯವರ ಪ್ರಮಾಣ ವಚನ ಸಮಾರಂಭದಿಂದ ದೂರ ಉಳಿಯಲಿದ್ದಾರೆಂದು ಮೂಲಗಳು ತಿಳಿಸಿವೆ.
ಬಹಿಷ್ಕರಿಸಿದ ಅಮ್ಮ
ಶ್ರೀಲಂಕಾ ಅಧ್ಯಕ್ಷ ಮಹಿಂದಾ ರಾಜಪಕ್ಸೆ ಅವರನ್ನು ಪ್ರಮಾಣ ವಚನ ಸಮಾರಂಭಕ್ಕೆ ಆಹ್ವಾನಿಸಿರುವುದನ್ನು ವಿರೋಧಿಸಿರುವ ಜಯಲಲಿತಾ, ಸಮಾರಂಭವನ್ನು ಬಹಿಷ್ಕರಿಸಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

