ಸಂಪುಟ ವಿಸ್ತರಣೆ ಮತ್ತೆ ಮುಂದಕ್ಕೆ, ಆಕಾಂಕ್ಷಿಗಳ ಸಹನೆ ಸ್ಫೋಟ

ನವದೆಹಲಿ: ಪದೇಪದೆ ಒಂದಲ್ಲ ಒಂದು ಕಾರಣ ನೀಡಿ ಸಂಪುಟ ವಿಸ್ತರಣೆಯನ್ನು ಮುಂದೂಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಪಕ್ಷದ ಹೈಕಮಾಂಡ್ ನಿರ್ಧಾರಕ್ಕೆ ಸಚಿವ ಆಕಾಂಕ್ಷಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಖಾಲಿ ಇರುವ ಸಚಿವ ಸ್ಥಾನಗಳನ್ನು ಕೂಡಲೇ ಭರ್ತಿ ಮಾಡಬೇಕು. ದಸರಾಗು ಮುನ್ನವೇ ಸಿಎಂ ಸಂಪುಟ ವಿಸ್ತರಣೆ ಮಾಡಬೇಕು ಎಂದು ಸಚಿವಾಕಾಂಕ್ಷಿ ಯಾದಗಿರಿ ಶಾಸಕ ಎ.ಬಿ.ಮಾಲಕರೆಡ್ಡಿ ಅವರು ಇಂದು ದೆಹಲಿಯಲ್ಲಿ ಒತ್ತಾಯಿಸಿದ್ದಾರೆ.
ಸಂಪುಟ ವಿಸ್ತರಣೆಗೆ ಶಾಸಕರ ಲಾಬಿ ಮುಂದುವರೆದಿದೆ. ಶಾಸಕ ಕೆ.ಬಿ.ಕೋಳಿವಾಡ ಅವರು ಸಹ ದಸರಾಕ್ಕೂ ಮೊದಲು ಸಂಪುಟ ವಿಸ್ತರಣೆ ಮಾಡಬೇಕು. ಸಂಪುಟ ವಿಸ್ತರಣೆ ಮಾಡಿದರೆ ಸರ್ಕಾರಕ್ಕೆ ಶಕ್ತಿ ಬರುತ್ತದೆ ಎಂದು ಹೇಳಿದ್ದಾರೆ. ಗುರುವಾರವೂ ಹಲವು ನಾಯಕರು ದೆಹಲಿಯಲ್ಲಿ ವಾಸ್ತವ್ಯ ಹೂಡಿದ್ದು, ಸಚಿವ ಸ್ಥಾನ ಪಡೆಯಲು ಪ್ರಯತ್ನ ಮುಂದುವರೆರಸಿದ್ದಾರೆ.
ಸಂಪುಟ ವಿಸ್ತರಣೆ ಸಂಬಂಧ ಚರ್ಚಿಸಲು ದೆಹಲಿಗೆ ತೆರಳಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿನ್ನೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಪ್ರತ್ಯೇಕವಾಗಿ ಭೇಟಿ ಮಾಡಿ, ಸಚಿವಾಕಾಂಕ್ಷಿಗಳ ಪಟ್ಟಿ ದೊಡ್ಡದಿರುವುದರಿಂದ ಸದ್ಯಕ್ಕೆ ಸಂಪುಟ ವಿಸ್ತರಣೆ ಬೇಡ ಎಂದು ಮನವಿ ಮಾಡಿದ್ದಾರೆ. ಇದಕ್ಕೆ ಹೈಕಮಾಂಡ್ ಸಹ ಒಪ್ಪಿಗೆ ನೀಡಿದೆ. ಸಿದ್ದರಾಮಯ್ಯ ಅವರ ಈ ನಿರ್ಧಾರ ಸಚಿವ ಆಕಾಂಕ್ಷಿಗಳಲ್ಲಿ ಭಾರಿ ನಿರಾಸೆ ಮೂಡಿಸಿದೆ.
ಒಂದು ವರ್ಷದ ಬಳಿಕ ಸಂಪುಟ ವಿಸ್ತರಣೆ ಎಂದು ಹೇಳಿದ್ದ ಸಿಎಂ, ನಂತರ ಉಪ ಚುನಾವಣೆ ಬಳಿಕ ಎಂದಿದ್ದರು. ಉಪ ಚುನಾವಣೆ ಮುಗಿಯುತ್ತಿದ್ದಂತೆ ಸಚಿವಾಕಾಂಕ್ಷಿಗಳ ಮಂತ್ರಿಗಿರಿಗಾಗಿ ತೀವ್ರ ಲಾಬಿ ನಡೆಸಲು ಆರಂಭಿಸಿದ್ದರು. ಅಲ್ಲದೆ ಸಚಿವ ಆಕಾಂಕ್ಷಿಗಳ ಪಟ್ಟಿಯೂ ಬೆಳೆಯುತ್ತಾ ಹೊಯ್ತು. ಇದರಿಂದ ತೀವ್ರ ಸಂಕಟಕ್ಕೆ ಸಿಲುಕಿದ್ದ ಸಿಎಂಗೆ ಈಗ ರಾಜ್ಯ ಉಸ್ತುವಾರಿ ದಿಗ್ವಿಜಯ್ ಸಿಂಗ್ ಅಮೆರಿಕ ಪ್ರವಾಸ ವರವಾಗಿದೆ.
ಈ ಮಧ್ಯೆ, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಅವರ ಉಪ ಮುಖ್ಯಮಂತ್ರಿ ಹುದ್ದೆಯ ಕನಸಿಗೆ ಬ್ರೇಕ್ ಬಿದ್ದಿದೆ. ರಾಜ್ಯದಲ್ಲಿ ಉಪ ಮುಖ್ಯಮಂತ್ರಿ ಹುದ್ದೆ ಸೃಷ್ಟಿಸುವ ಬಗ್ಗೆ ಹೈಕಮಾಂಡ್ಗೆ ಆಸಕ್ತಿ ಇಲ್ಲ ಮತ್ತು ಈ ನಿರ್ಧಾರ ಕೈಗೊಳ್ಳುವ ಅಧಿಕಾರವನ್ನು ಸಿಎಂಗೆ ನೀಡಲಾಗಿದೆ ಎಂದು ಪಕ್ಷದ ಉನ್ನತ ಮೂಲಗಳು ತಿಳಿಸಿವೆ.
ಇನ್ನು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷ ಕಳೆದರೂ ನಿಗಮ ಮಂಡಳಿಗಳಿಗೆ ನೇಮಕ ನಡೆಯದಿರುವುದು ಸಹ ಪಕ್ಷ ಕಾರ್ಯಕರ್ತರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ನಡುವೆ ನಿಗಮ ಮಂಡಳಿಗಳ ನೇಮಕವಾದ ನಂತರ ಆಕಾಂಕ್ಷಿಗಳ ಸಂಖ್ಯೆ ಕುಗ್ಗಬಹುದು, ಹೀಗಾಗಿ ಮೊದಲು ನಿಗಮ ಮಂಡಳಿಗಳಿಗೆ ನೇಮಕ ಮಾಡುವ ಸಿಎಂ ಲೆಕ್ಕಾಚಾರಕ್ಕೆ ಹೈಕಮಾಂಡ್ ಒಪ್ಪಿಗೆ ನೀಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


