ಪ್ರಧಾನ ಸುದ್ದಿ

ಜಯಲಲಿತಾಗೆ 4 ವರ್ಷ ಜೈಲು, 100 ಕೋಟಿ ದಂಡ

ಜಯಲಲಿತಾಗೆ 4 ವರ್ಷ ಜೈಲು, 100 ಕೋಟಿ ದಂಡ
Published On :

ಬೆಂಗಳೂರು: 18 ವರ್ಷಗಳ ಸುದೀರ್ಘ ವಿಚಾರಣೆ ಬಳಿಕ ತಮಿಳುನಾಡು ಮುಖ್ಯಮಂತ್ರಿ ಜೆ.ಜಯಲಲಿತಾ ಅವರ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕಣದ ತೀರ್ಪು ಶನಿವಾರ ಹೊರಬಿದ್ದಿದ್ದು, ತಮಿಳುನಾಡು ಸಿಎಂಗೆ ಸಿಬಿಐ ವಿಶೇಷ ನ್ಯಾಯಾಲಯ ನಾಲ್ಕು ವರ್ಷ ಜೈಲು ಶಿಕ್ಷೆ ಹಾಗೂ 100 ಕೋಟಿ ರುಪಾಯಿ ದಂಡ ವಿಧಿಸಿದೆ.

ಜಯಲಲಿತಾ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣದ ವಿಚಾರಣೆ ಪೂರ್ಣಗೊಳಿಸಿದ್ದ ಬೆಂಗಳೂರಿನ ವಿಶೇಷ ನ್ಯಾಯಾಲದ ನ್ಯಾಯಾಧೀಶ ಜಾನ್ ಮೈಕಲ್ ಡಿ ಕುನ್ಹಾ ಅವರು ತೀರ್ಪನ್ನು ಇಂದಿಗೆ ಕಾಯ್ದಿರಿಸಿದ್ದರು. ಇಂದು ತೀರ್ಪು ಪ್ರಕಟಿಸಿದ ಅವರು, ಜಯಲಲಿತಾ ಸೇರಿದಂತೆ ಪ್ರಕರಣದ ನಾಲ್ವರು ಆರೋಪಿಗಳು ತಪ್ಪಿತಸ್ಥರೆಂದು ಘೋಷಿಸಿ, ತಲಾ ನಾಲ್ಕು ವರ್ಷಗಳ ಜೈಲು ಶಿಕ್ಷೆ ವಿಧಿಸಿದ್ದಾರೆ.

ಜಯಲಲಿತಾಗೆ 100 ಕೋಟಿ ರುಪಾಯಿ ದಂಡ ಹಾಗೂ ನಾಲ್ಕು ವರ್ಷ ಜೈಲು ಶಿಕ್ಷೆ ವಿಧಿಸಿರುವ ನ್ಯಾಯಾಲಯ ಇತರ ಅಪರಾಧಿಗಳಾದ ಜಯಲಲಿತಾ ಮಾಜಿ ಆಪ್ತೆ ಶಶಿಕಲಾ, ಸಾಕುಮಗ ವಿ.ಎನ್. ಸುಧಾರಕನ್ ಜೆ. ಇಳವರಿಸಿಗೆ ತಲಾ 10 ಕೋಟಿ ದಂಡ ಹಾಗೂ ನಾಲ್ಕು ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ.


ವಿಶೇಷ ನ್ಯಾಯಾಲಯ ಇಂದು ತೀರ್ಪು ನೀಡಲಿರುವ ಹಿನ್ನೆಲೆಯಲ್ಲಿ ಪ್ರಮುಖ ಆರೋಪಿ ಜಯಲಲಿತಾ  ಸೇರಿದಂತೆ ಇತರ ಆರೋಪಿಗಳಾದ ಜಯಲಲಿತಾ  ಮಾಜಿ  ಆಪ್ತೆ ವಿ.ಕೆ.ಶಶಿಕಲಾ ಹಾಗೂ ಅವರ ಸಂಬಂಧಿ ಸುಧಾಕರನ್, ಇಳವರಸಿ ಕೂಡ ಬೆಳಗ್ಗೆ 10.30ರ ಸುಮಾರಿಗೆ ಕೋರ್ಟ್‌ಗೆ ಹಾಜರಾಗಿದ್ದರು.

ತೀರ್ಪಿನ ಹಿನ್ನೆಲೆಯಲ್ಲಿ ಪರಪ್ಪನ ಅಗ್ರಹಾರ ಸುತ್ತಮುತ್ತ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು. ಅಲ್ಲದೆ ಪಾಸ್ ಹೊಂದಿದವರಿಗೆ ಮಾತ್ರ ಜೈಲು ಆವರಣಕ್ಕೆ ಪ್ರವೇಶ ನೀಡಲಾಗಿತ್ತು.

ಸಿಎಂ ಸ್ಥಾನಕ್ಕೆ ರಾಜಿನಾಮೆ?
ಜಯಲಲಿತಾ ಅವರು ತಪ್ಪಿತಸ್ಥೆ ಎಂದು ಕೋರ್ಟ್ ತೀರ್ಪು ನೀಡಿ, ನಾಲ್ಕು ವರ್ಷ ಜೈಲು ಶಿಕ್ಷೆ ವಿಧಿಸಿರುವುದರಿಂದ ಅವರು ವಿಧಾನಸಭಾ ಸದಸ್ಯತ್ವ ಕಳೆದುಕೊಳ್ಳುತ್ತಾರೆ. ಅಲ್ಲದೆ ಮುಂದಿನ ಆರು ವರ್ಷಗಳ ಕಾಲ ಯಾವುದೇ ಚುನಾವಣೆಗೆ ಸ್ಪರ್ಧಿಸುವಂತಿಲ್ಲ. ಹೀಗಾಗಿ ಅವರು ಅನಿವಾರ್ಯವಾಗಿ ರಾಜಿನಾಮೆ ನೀಡುವ ಸಾಧ್ಯತೆ ಇದೆ.

ಏನಿದು ಪ್ರಕರಣ?
1991ರಿಂದ 1996ರವರೆಗೆ ಮೊದಲ ಬಾರಿ ಮುಖ್ಯಮಂತ್ರಿಯಾಗಿದ್ದ ಜಯಲಲಿತಾ ಅವರು ಭ್ರಷ್ಟಾಚಾರ ಎಸಗಿ 66.65 ಕೋಟಿ ರುಪಾಯಿ ಸಂಪಾದಿಸಿದ್ದಾರೆ ಎಂದು ಆರೋಪಿಸಿ ವಿರೋಧ ಪಕ್ಷ ಡಿಎಂಕೆ ಕಾರ್ಯದರ್ಶಿ ಅನ್ಬಳಗನ್ ಅವರು ಚೆನ್ನೈನ ಭ್ರಷ್ಟಾಚಾರ ನಿಗ್ರಹ ದಳಕ್ಕೆ 1996ರಲ್ಲಿ ದೂರು ನೀಡಿದ್ದರು.

ಪ್ರಕರಣದ ವಿಚಾರಣೆ ನಡೆದು ಸ್ಥಳೀಯ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಲಾಗಿತ್ತು. ಈ ನಡುವೆ ನಿಷ್ಪಕ್ಷಪಾತ ವಿಚಾರಣೆಗಾಗಿ 2003ರ ನವೆಂಬರ್‌ನಲ್ಲಿ ಪ್ರಕರಣವನ್ನು ಸುಪ್ರೀಂ ಕೋರ್ಟ್ ಬೆಂಗಳೂರಿಗೆ ವರ್ಗಾಯಿಸಿತು. ಅಲ್ಲದೆ ಪ್ರಕರಣದ ವಿಚಾರಣೆಗೆ ವಿಶೇಷ ನ್ಯಾಯಾಲಯ ಸ್ಥಾಪನೆಗೂ ಸೂಚಿಸಿತ್ತು. ಪ್ರಕರಣ ಸಂಬಂಧ 18 ವರ್ಷಗಳ ಕಾಲ ಸುದೀರ್ಘ ವಿಚಾರಣೆ ನಡೆದು ಅಂತಿಮವಾಗಿ ಇಂದು ತೀರ್ಪು ಪ್ರಕಟವಾಗಿದೆ.

ಡಿಎಂಕೆಯಿಂದ ಸಂಭ್ರಮಾಚರಣೆ
ತನ್ನ ರಾಜಕೀಯ ಕಡು ವಿರೋಧಿ ಜಯಲಲಿತಾ ಅವರ ವಿರುದ್ಧದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಡಿಎಂಕೆ ಪಕ್ಷದ ಕಾರ್ಯಕರ್ತರು ಚೆನ್ನೈನಲ್ಲಿ ಸಂಭ್ರಮಾಚರಣೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.