

ನವದೆಹಲಿ: ಸಾಲಬಾಧೆಯಿಂದ ರಾಜ್ಯದಲ್ಲಿ ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬಕ್ಕೆ ಪರಿಹಾರ ನೀಡುವ ವಿಚಾರದಲ್ಲಿ ರಾಜ್ಯ ಸರ್ಕಾರ ತಾರತಮ್ಯ ಮಾಡುತ್ತಿದ್ದು, ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಿಬೇಕು ಎಂದು ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಸೋಮವಾರ ಲೋಕಸಭೆಯಲ್ಲಿ ಒತ್ತಾಯಿಸಿದ್ದಾರೆ.
ರಾಜ್ಯದಲ್ಲಿ ಮುಂದುವರೆದಿರುವ ರೈತರ ಸರಣಿ ಆತ್ಮಹತ್ಯೆ ಪ್ರಕರಣವನ್ನು ಸದನದಲ್ಲಿ ಪ್ರಸ್ತಾಪಿಸಿದ ಯಡಿಯೂರಪ್ಪ, ಕಳೆದ ಆರು ತಿಂಗಳಲ್ಲಿ ರಾಜ್ಯದಲ್ಲಿ 250ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರೈತರ ಸರಣಿ ಆತ್ಮಹತ್ಯೆ ತುಂಬಾ ಆತಂಕಕಾರಿ ಬೆಳವಣಿಗೆಯಾಗಿದ್ದು, ಆತ್ಮಹತ್ಯೆ ತಡೆಗೆ ಸೂಕ್ತಕ್ರಮ ಕೈಗೊಳ್ಳಬೇಕು ಎಂದರು.
ರೈತರ ಆತ್ಮಹತ್ಯೆಯಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ರಾಜ್ಯ ಸರ್ಕಾರದಿಂದ ರೈತರ ಕುಟುಂಬಕ್ಕೆ ಪರಿಹಾರ ನೀಡುವಲ್ಲಿ ತಾರತಮ್ಯವಾಗುತ್ತಿದ್ದು, ಕೇಂದ್ರ ಸರ್ಕಾರ ಕೂಡಲೇ ಮಧ್ಯಪ್ರವೇಶಿಸಬೇಕು ಎಂದರು.
ರಾಜ್ಯ ಸರ್ಕಾರ ಕೇಂದ್ರ ಸರ್ಕಾರ ನೀಡಿರುವ ಅನುದಾನವನ್ನು ಸರಿಯಾದ ರೀತಿಯಲ್ಲಿ ಬಳಕೆ ಮಾಡಿಕೊಳ್ಳುತ್ತಿಲ್ಲ ಎಂದು ಆರೋಪಿಸಿದ ಯಡಿಯೂರಪ್ಪ, ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಎಲ್ಲಾ ರಾಜ್ಯಗಳಿಗೂ ಕೂಡ ಭೇಟಿ ನೀಡುತ್ತಿದ್ದಾರೆ. ಆದರೆ ಕರ್ನಾಟಕಕ್ಕೆ ಮಾತ್ರ ಇದುವರೆಗೂ ಭೇಟಿ ನೀಡಿಲ್ಲ ಎಂದು ವಾಗ್ದಾಳಿ ನಡೆಸಿದರು.