

ಬೆಂಗಳೂರು: ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಶೌಚಾಲಯ ಸೌಲಭ್ಯ ಕಲ್ಪಿಸುವಂತೆ ಸರ್ವೋಚ್ಚ ನ್ಯಾಯಾಲಯ ನೀಡಿದ್ದ ಆದೇಶ ಪಾಲಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದ್ದರೆ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿಕೊಂಡು ಸರ್ಕಾರಕ್ಕೆ ನ್ಯಾಯಾಂಗ ನಿಂದನೆ ನೋಟಿಸ್ ಜಾರಿಗೊಳಿಸಿ ಎಂದು ಸುಪ್ರೀಂ ಕೋರ್ಟ್ ನ್ಯಾ. ವಿ. ಗೋಪಾಲ್ಗೌಡ ರಾಜ್ಯ ಹೈಕೋರ್ಟ್ಗೆ ಸೂಚನೆ ನೀಡಿದ್ದಾರೆ.
ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಶನಿವಾರ ಹೈಕೋರ್ಟ್ನಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ಲೋಕ್ಅದಾಲತ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಈ ಸೂಚನೆ ನೀಡಿದ್ದಾರೆ. ಗ್ರಾಮೀಣ ಸರ್ಕಾರಿ ಶಾಲೆಗಳಲ್ಲಿ ಶೌಚಾಲಯ ಸೌಲಭ್ಯ ಕಲ್ಪಿಸಿಕೊಡುವಂತೆ ಸುಪ್ರೀಂಕೋರ್ಟ್ ನೀಡಿದ್ದ ಆದೇಶ ಪಾಲನೆ ಆಗಿದೆಯೇ ಎಂಬ ಬಗ್ಗೆ ಶಿಕ್ಷಣ ಸಚಿವರನ್ನು ಜತೆಗೆ ಕರೆದೊಯ್ದು ಪರಿಶೀಲನೆ ನಡೆಸಿ ಎಂದು ಹೈಕೋರ್ಟ್ನ ಹಂಗಾಮಿ ಮುಖ್ಯನ್ಯಾಯಮೂರ್ತಿ ಎಸ್.ಕೆ. ಮುಖರ್ಜಿ ಮತ್ತು ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯಕಾರಿ ಅಧ್ಯಕ್ಷ ನ್ಯಾ. ಎನ್.ಕೆ. ಪಾಟೀಲ್ ಅವರಿಗೆ ಸೂಚಿಸಿದ್ದಾರೆ. ಒಂದು ವೇಳೆ ಸುಪ್ರೀಂ ಆದೇಶದಂತೆ ಸರ್ಕಾರಿ ಶಾಲೆಗಳಿಗೆ ಅದರಲ್ಲೂ ವಿಶೇಷವಾಗಿ ಹೆಣ್ಣು ಮಕ್ಕಳು ಹೆಚ್ಚಾಗಿರುವ ಗ್ರಾಮೀಣ ಪ್ರದೇಶದ ಶಾಲೆಗಳಿಗೆ ಶೌಚಾಲಯ ಸೌಲಭ್ಯ ಕಲ್ಪಿಸಿಕೊಡುವಲ್ಲಿ ಸರ್ಕಾರ ವಿಫಲವಾಗಿದ್ದಲ್ಲಿ ಸ್ವಯಂ ಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿ ನ್ಯಾಯಾಂಗ ನಿಂದನೆ ನೋಟಿಸ್ ಜಾರಿ ಮಾಡಿ ಎಂದು ನಿರ್ದೇಶನ ನೀಡಿದ್ದಾರೆ.
ಶೈತ್ಯಾಗಾರದಲ್ಲಿಡುವುದಕ್ಕಲ್ಲ: ನ್ಯಾಯಾಲಯಗಳು ನೀಡುವ ಆದೇಶ ಗಳು ಶೈತ್ಯಗಾರ(ಕೋಲ್ಡ್ಸ್ಟೋರೇಜ್) ದಲ್ಲಿ ಇಡುವುದಕ್ಕಲ್ಲ. ಆದೇಶ ಪಾಲಿಸಿ ನೊಂದವರಿಗೆ ನ್ಯಾಯ ದೊರಕಿಸಿಕೊಡ ಬೇಕು.``ಗ್ರಾಮೀಣ ಭಾಗದ ಶಾಲೆ ಗಳಿಗೆ ಶೌಚಾಲಯ ಸೌಲಭ್ಯ ಕಡ್ಡಾಯವಾಗಿ ಕಲ್ಪಿಸಿಕೊಡಬೇಕು ಎಂಬ ಸುಪ್ರೀಂ ಕೋರ್ಟ್ ನೀಡಿರುವ ಆದೇಶವನ್ನು ನಿಮ್ಮ ಮುಖ್ಯಮಂತ್ರಿ, ಶಿಕ್ಷಣ ಸಚಿವರು ಮತ್ತು ಲೋಕೋಪಯೋಗಿ ಸಚಿವರ ಗಮನಕ್ಕೆ ತನ್ನಿ'' ಎಂದು ಸಮಾರಂಭದಲ್ಲಿ ಭಾಗವಹಿಸಿದ್ದ ರಾಜ್ಯ ಅಡ್ವೋಕೇಟ್ ಜನರಲ್ ಆರ್. ಮಧುಸೂಧನ್ ನಾಯಕ್ ಅವರಿಗೆ ಸೂಚನೆ ನೀಡಿದರು. ಸರ್ಕಾರ ಮಾಡುವ ಕೆಲಸವನ್ನು ಕಾನೂನು ಸೇವೆಗಳ ಪ್ರಾಧಿಕಾರ ಮಾಡುತ್ತಿದೆ. ಹಾಗಾಗಿ, ಪ್ರಾಧಿಕಾರದ ಕಾರ್ಯಚಟುವಟಿಕೆಗಳಿಗೆ ಸಹಕಾರ ನೀಡುವಂತೆ ಎಲ್ಲ ಇಲಾಖೆಗಳ ಅಧಿಕಾರಿಗಳಿಗೆ ಸುತ್ತೋಲೆ ಹೊರಡಿಸುವಂತೆ ಮುಖ್ಯಮಂತ್ರಿಯವರಿಗೆ ಹೇಳಿ ಎಂದು ಗೋಪಾಲ್ಗೌಡ ಅಡ್ವೋಕೇಟ್ ಜನರಲ್ ಅವರಿಗೆ ಸೂಚನೆ ನೀಡಿದರು.
ನ್ಯಾಯಾಲಯಗಳಲ್ಲಿ ಪ್ರಕರಣಗಳು ಬಾಕಿ ಉಳಿಯುವುದಕ್ಕೆ ನ್ಯಾಯಾಂಗ ಕಾರಣವಲ್ಲ. ಸರ್ಕಾರ ನ್ಯಾಯಾಲಯಗಳ ಸ್ಥಾಪಿಸಿದ್ದರೆ ಈ ಸಮಸ್ಯೆಉದ್ಭವಿಸುತ್ತಿರಲಿಲ್ಲ ಎಂದು ಅಭಿಪ್ರಾಯಪಟ್ಟರು. ಹೈಕೋರ್ಟ್ ಹಂಗಾಮಿ ಮುಖ್ಯ ನ್ಯಾ. ಎಸ್.ಕೆ. ಮುಖರ್ಜಿ, ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯಕಾರಿ ಅಧ್ಯಕ್ಷ ನ್ಯಾ. ಎನ್.ಕೆ. ಪಾಟೀಲ್, ಅಡ್ವೊಕೇಟ್ ಜನರಲ್ ಆರ್. ಮಧುಸೂಧನ್ ನಾಯಕ್, ರಾಜ್ಯ ವಕೀಲರ ಪರಿಷತ್ ಅಧ್ಯಕ್ಷ ಎ.ಆರ್. ಪಾಟೀಲ್, ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ಎಚ್.ಸಿ. ಶಿವರಾಂ, ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಅಶೋಕ್ ನಿಜಗಣ್ಣವರ್ ಇದ್ದರು.