

ನವದೆಹಲಿ: ನಿರ್ಭಯಾ ಸಾಮೂಹಿಕ ಅತ್ಯಾಚಾರ ಪ್ರಕರಣದ ಬಾಲಪರಾಧಿಯ ಬಿಡುಗಡೆಗೆ ತಡೆ ನೀಡಲು ಹೈಕೋರ್ಟ್ ನಿರಾಕರಿಸಿರುವ ಬಗ್ಗೆ ಆಕೆಯ ಪೋಷಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಆದರೆ ತಮ್ಮ ಮಗಳಿಗೆ ನ್ಯಾಯ ದೊರಕಿಸಿಕೊಡಲು ಹೋರಾಟ ಮುಂದುವರೆಸುವುದಾಗಿ ಶುಕ್ರವಾರ ಹೇಳಿದ್ದಾರೆ.
ಹೈಕೋರ್ಟ್ ತೀರ್ಪಿನ ಬಳಿಕ ವರದಿಗಾರರಿಗೆ ಪ್ರತಿಕ್ರಿಯಿಸಿದ ನಿರ್ಭಯಾ ತಾಯಿ, ನಮ್ಮ ಎಲ್ಲಾ ಪ್ರಯತ್ನಗಳ ಹೊರತಾಗಿಯೂ ಬಾಲಪರಾಧಿ ಜೈಲಿನಿಂದ ಬಿಡುಗಡೆಯಾಗುತ್ತಿದ್ದಾನೆ. ಏನೂ ಮಾಡಕ್ಕಾಗಲ್ಲ. ಆದರೆ ನಮ್ಮ ಹೋರಾಟ ಮುಂದುವರೆಯಲಿದೆ ಎಂದಿದ್ದಾರೆ.
ಇನ್ನು ಈ ವೇಳೆ ಮಾತನಾಡಿದ ನಿರ್ಭಯಾ ತಂದೆ, 'ಹೈಕೋರ್ಟ್ ತೀರ್ಪಿನ ಬಗ್ಗೆ ನಾನು ಏನು ಹೇಳುವುದಿಲ್ಲ. ಆದರೆ ಅನ್ಯಾಯದ ವಿರುದ್ಧ ನಮ್ಮ ಹೋರಾಟ ಮುಂದುವರೆಯಲಿದೆ' ಎಂದಿದ್ದಾರೆ.
2012 ಡಿಸೆಂಬರ್ 16ರಂದು ದೆಹಲಿಯಲ್ಲಿ ನಡೆದ ನಿರ್ಭಯಾ ಸಾಮೂಹಿಕ ಅತ್ಯಾಚಾರ ಪ್ರಕರಣದ ಅಪರಾಧಿ, ಅಪ್ರಾಪ್ತ ಬಾಲಕನ ಬಿಡುಗಡೆಗೆ ತಡೆ ನೀಡಲು ದೆಹಲಿ ಹೈಕೋರ್ಟ್ ಇಂದು ನಿರಾಕರಿಸಿದ್ದು, ಬಾಲಪರಾಧಿಯನ್ನು ಭಾನುವಾರ ಬಂಧಮುಕ್ತಗೊಳಿಸಲಾಗುತ್ತಿದೆ.