
ಬೆಂಗಳೂರು: ಬೆಂಗಳೂರಿನ ಚರ್ಚ್ ಸ್ಟ್ರೀಟ್ ಸ್ಫೋಟ ಪ್ರಕರಣದ ಆರೋಪಿಗಳಿಗೆ ಸಂಬಂಧಿಸಿದಂತೆ ಮಹತ್ವದ ಖಚಿತ ಮಾಹಿತಿ ಲಭ್ಯವಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಎಂ.ಎನ್.ರೆಡ್ಡಿ ಅವರು ಸೋಮವಾರ ಹೇಳಿದ್ದಾರೆ.
ಈ ಕುರಿತು ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರೆಡ್ಡಿ, ಚರ್ಚ್‌ಸ್ಟ್ರೀಟ್ ಬಾಂಬ್ ಸ್ಫೋಟ ಪ್ರಕರಣದ ಆರೋಪಿಗಳ ಕುರಿತು ವಿಶೇಷ ತನಿಖಾ ತಂಡಕ್ಕೆ ಖಚಿತ ಮಾಹಿತಿ ಲಭ್ಯವಾಗಿದ್ದು, ಎರಡು ಗುಂಪುಗಳ ಮೇಲೆ ಬಲವಾದ ಶಂಕೆ ವ್ಯಕ್ತವಾಗಿದೆ ಎಂದರು. ಅಲ್ಲದೆ ರಾಜ್ಯ ಹಾಗೂ ಹೊರರಾಜ್ಯಗಳಲ್ಲಿ ಪ್ರಕರಣದ ತನಿಖೆಗೆ ಸಾಗಿದೆ ಎಂದು ರೆಡ್ಡಿ ತಿಳಿಸಿದರು.
2015ರ ಹೊಸ ವರ್ಷದ ಆಚರಣೆಗೆ ಬೆಂಗಳೂರು ಸಿದ್ಧವಾಗುತ್ತಿದ್ದ ಸಂದರ್ಭದಲ್ಲಿ ಡಿಸೆಂಬರ್ 28ರಂದು ಚರ್ಚ್ಸ್ಟ್ರೀಟ್ನಲ್ಲಿ ಬಾಂಬ್ ಸ್ಫೋಟ ಸಂಭವಿಸಿತ್ತು. ಈ ಸಂಬಂಧ ಪೊಲೀಸರು ಹಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಇದೇ ವೇಳೆ ಫೆಬ್ರವರಿ 18ರಂದು ಯಲಂಹಕದ ವಾಯುನೆಲೆಯಲ್ಲಿ ನಡೆಯುವ ವೈಮಾನಿಕ ಪ್ರದರ್ಶನಕ್ಕೆ ಚಾಲನೆ ನೀಡಲು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನಗರಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಾದ್ಯಂತ ಬಿಗಿ ಭದ್ರತೆ ಕೈಗೊಳ್ಳಲಾಗಿದೆ ಎಂದು ರೆಡ್ಡಿ ತಿಳಿಸಿದರು.
ಪ್ರದರ್ಶನಕ್ಕೆ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಗಣ್ಯರು ಸೇರಿದಂತೆ ಲಕ್ಷಾಂತರ ಸಂಖ್ಯೆಯಲ್ಲಿ ಸಾರ್ವಜನಿಕರು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ನಗರದ ಎಲ್ಲಾ ಐಷಾರಾಮಿ ಹೋಟಲ್ ಹಾಗೂ ಇತರೆ ಪ್ರಮುಖ ಸ್ಥಳಗಳಲ್ಲಿ ಸುಮಾರು 3 ಸಾವಿರ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದರು.
Advertisement