ಸಿದ್ದು ವಿರುದ್ಧ ಕಾನೂನು ಸಮರಕ್ಕೆ ಸಿದ್ಧವಾದ ಬಿಜೆಪಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಕಾನೂನು ಸಮರಕ್ಕೆ ಪ್ರತಿಪಕ್ಷ ಬಿಜೆಪಿ ಸಿದ್ಧವಾಗಿದ್ದು, ಅರ್ಕಾವತಿ..
ಸಿದ್ದರಾಮಯ್ಯ -ಜಗದೀಶ್ ಶೆಟ್ಟರ್
ಸಿದ್ದರಾಮಯ್ಯ -ಜಗದೀಶ್ ಶೆಟ್ಟರ್
Updated on

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಕಾನೂನು ಸಮರಕ್ಕೆ ಪ್ರತಿಪಕ್ಷ ಬಿಜೆಪಿ ಸಿದ್ಧವಾಗಿದ್ದು, ಅರ್ಕಾವತಿ ಡಿನೋಟಿಫಿಕೇಶನ್ ಪ್ರಕರಣ ಸಂಬಂಧ ಸಿಎಂ ವಿರುದ್ಧ ಕೇಸ್ ದಾಖಲಿಸಲು ಅನುಮತಿ ಕೋರಿ ರಾಜ್ಯಪಾಲರಿಗೆ ಮನವಿ ಸಲ್ಲಿಸಲು ಬಿಜೆಪಿ ನಿರ್ಧರಿಸಿದೆ.

ಈ ಸಂಬಂಧ ಇಂದು ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ನೇತೃತ್ವದಲ್ಲಿ ಅವರ ನಿವಾಸದಲ್ಲಿ ಸಭೆ ನಡೆಯಿತು. ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಶೆಟ್ಟರ್, ಸಿಎಂ ವಿರುದ್ಧ ಕಾನೂನು ಸಮರ ನಡೆಸುವ ಬಗ್ಗೆ ಸಭೆಯಲ್ಲಿ ವಿವರವಾಗಿ ಚರ್ಚಿಸಲಾಯಿತು ಮತ್ತು ಅವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲು ಅನುಮತಿ ನೀಡುವಂತೆ ರಾಜ್ಯಪಾಲರಿಗೆ ಮನವಿ ಸಲ್ಲಿಸಲು ತೀರ್ಮಾನಿಸಲಾಗಿದೆ ಎಂದರು.

ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಶಿ, ಸತ್ಯ ಶೋಧನಾ ಸಮಿತಿ ಸದಸ್ಯ ವಿ.ಸೋಮಣ್ಣ ಹಾಗೂ ಹಿರಿಯ ವಕೀಲರು ಸೇರಿದಂತೆ ಹಲವು ಬಿಜೆಪಿ ನಾಯಕರು ಭಾಗವಹಿಸಿದ್ದಾರೆ.

ಈ ಹಿಂದೆ ಕಾಂಗ್ರೆಸ್ ಸಹ ಬಿಜೆಪಿ ಅಧಿಕಾರದಲ್ಲಿದ್ದಾಗ ರಾಜ್ಯಪಾಲರ ಅನುಮತಿ ಪಡೆದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧ ಕೇಸ್ ದಾಖಲಿಸಿತ್ತು. ಇದರಿಂದ ಯಡಿಯೂರಪ್ಪ ರಾಜಿನಾಮೆ ನೀಡಬೇಕಾಗಿ ಬಂದಿತ್ತು. ಈಗ ಅದೇ ತಂತ್ರವನ್ನು ಬಿಜೆಪಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರಯೋಗಿಸುತ್ತಿದೆ.

ಶೀಘ್ರದಲ್ಲೇ ಸಿಎಂ ವಿರುದ್ಧ ಮೊಕದ್ದಮೆ ದಾಖಲಿಸಲು ಅನುಮತಿ ನೀಡುವಂತೆ ರಾಜ್ಯಪಾಲ ವಜುಭಾಯಿ ವಾಲಾ ಅವರಿಗೆ ಮನವಿ ಸಲ್ಲಿಸಲು ಬಿಜೆಪಿ ನಿರ್ಧರಿಸಿದ್ದು, ಈ ಸಂಬಂಧ ಪಕ್ಷದ ಹೈಕಮಾಂಡ್‌ನಿಂದಲೂ ಅನುಮತಿ ಪಡೆದಿರುವುದಾಗಿ ನಿನ್ನೆ ಕನ್ನಡಪ್ರಭ.ಕಾಮ್‌ಗೆ ನೀಡಿದ ಸಂದರ್ಶನದಲ್ಲಿ ಜಗದೀಶ್ ಶೆಟ್ಟರ್ ಹೇಳಿದ್ದರು.

ಒಂದು ವೇಳೆ ರಾಜ್ಯಪಾಲರು ಪ್ರಕರಣ ದಾಖಲಿಸಲು ಅನುಮತಿ ನೀಡದಿದ್ದರೆ ಪಕ್ಷಕ್ಕೆ ಮುಜುಗರವಾಗುತ್ತದೆ ಎಂಬ ಕಾರಣಕ್ಕೆ
ಬಿಜೆಪಿ, ಕೇಂದ್ರ ನಾಯಕರ ಅನುಮತಿ ಪಡೆದಿದ್ದು, ಈಗ ರಾಜಭವನದ ಅನುಮತಿ ಪಡೆಯಲು ಮುಂದಾಗಿದೆ.


ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಕ್ರಮವಾಗಿ ಡಿನೋಟಿಫಿಕೇಶ್ ಮಾಡಿದ್ದಾರೆ ಎಂದು ಕಳೆದ ವಿಧಾನಸಭಾ ಅಧಿವೇಶನದ ವೇಳೆ ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಅವರು ಗಂಭೀರ ಆರೋಪ ಮಾಡಿದ್ದರು. ಅಲ್ಲದೆ ಈ ಸಂಬಂಧ ಮಾಜಿ ಸಚಿವರಾದ ಎಸ್.ಸುರೇಶ್ ಕುಮಾರ್ ಹಾಗೂ ವಿ.ಸೋಮಣ್ಣ ನೇತೃತ್ವದಲ್ಲಿ ಸತ್ಯಶೋಧನಾ ಸಮಿತಿ ರಚಿಸಲಾಗಿತ್ತು. ಸತ್ಯ ಶೋಧನಾ ಸಮಿತಿ ಮಧ್ಯಂತರ ವರದಿ ಬಿಡುಗಡೆ ಮಾಡಿದ್ದು, ವರದಿಯಲ್ಲಿ ಅರ್ಕಾವತಿ ಬಡಾವಣೆಯಲ್ಲಿ 'ರೀ ಡು' ಹೆಸರಿನಲ್ಲಿ ಅಕ್ರಮವಾಗಿ ಡಿನೋಟಿಫಿಕೇಶನ್ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಹೈಕೋರ್ಟ್ ಮಾರ್ಗದರ್ಶನದಂತೆ ಕೇವಲ 140 ಎಕರೆ ಡಿನೋಟಿಫೈಗೆ ಅವಕಾಶವಿತ್ತು. ಆದರೆ ಸುಪ್ರೀಂ ಹಾಗೂ ಹೈಕೋರ್ಟ್ ಆದೇಶ ಉಲ್ಲಂಘಿಸಿ 707 ಎಕರೆಗಳನ್ನು 'ರೀ ಡು' ಮಾಡಲಾಗಿದೆ ಎಂದು ದೂರಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com