ಸಿದ್ದು ವಿರುದ್ಧ ಅರ್ಕಾವತಿ ಅಸ್ತ್ರ: ರಾಜ್ಯಪಾಲರ ಭೇಟಿ ಮಾಡಿದ ಬಿಜೆಪಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಅರ್ಕಾವತಿ ಡಿನೋಟಿಫಿಕೇಶನ್ ಪ್ರಕರಣವನ್ನೇ ಅಸ್ತ್ರವಾಗಿ ಬಳಸಿಕೊಳ್ಳಲು ಪ್ರತಿಪಕ್ಷ ಬಿಜೆಪಿ ನಿರ್ಧರಿಸಿದ್ದು, ಈ ಸಂಬಂಧ ಶುಕ್ರವಾರ ರಾಜ್ಯಪಾಲ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಅರ್ಕಾವತಿ ಡಿನೋಟಿಫಿಕೇಶನ್ ಪ್ರಕರಣವನ್ನೇ ಅಸ್ತ್ರವಾಗಿ ಬಳಸಿಕೊಳ್ಳಲು ಪ್ರತಿಪಕ್ಷ ಬಿಜೆಪಿ ನಿರ್ಧರಿಸಿದ್ದು, ಈ ಸಂಬಂಧ ಶುಕ್ರವಾರ ರಾಜ್ಯಪಾಲರನ್ನು ಭೇಟಿ ಮಾಡಿ ಚರ್ಚಿಸಿದೆ. ಅಲ್ಲದೆ ಸಿಎಂ ವಿರುದ್ಧ ಖಾಸಗಿ ವ್ಯಕ್ತಿ ಮೂಲಕ ದೂರು ದಾಖಲಿಸಲು ಮುಂದಾಗಿದೆ.

ಇಂದು ರಾಜ್ಯಪಾಲ ವಜುಭಾಯಿ ವಾಲಾ ಅವರ ಹುಟ್ಟುಹಬ್ಬ. ಈ ಹಿನ್ನೆಲೆಯಲ್ಲಿ ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್, ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಶಿ ಹಾಗೂ ಮಾಜಿ ಉಪ ಮುಖ್ಯಮಂತ್ರಿ ಆರ್.ಅಶೋಕ್ ನೇತೃತ್ವದ ನಿಯೋಗ ಇಂದು ರಾಜಭವನಕ್ಕೆ ಭೇಟಿ ನೀಡಿ, ರಾಜ್ಯಪಾಲರಿಗೆ ಶುಭ ಕೋರಿದರು.

ಪಕ್ಷದ ಕಾನೂನು ಘಟಕದೊಂದಿಗೆ ರಾಜಭವನಕ್ಕೆ ತೆರಳಿದ್ದ ಬಿಜೆಪಿ ನಾಯಕರು, ಅರ್ಕಾವತಿ ಡಿನೋಟಿಫಿಕೇಶನ್ ಪ್ರಕರಣ ಸಂಬಂಧ ಸಿಎಂ ವಿರುದ್ಧ ಕೇಸ್ ದಾಖಲಿಸುವ ಕುರಿತು ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ವಜುಭಾಯಿ ವಾಲಾ ಅವರೊಂದಿಗೆ ಚರ್ಚಿಸಿದ್ದಾರೆ.

ರಾಜ್ಯಪಾಲರ ಭೇಟಿಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಶಿ ಅವರು, ಅರ್ಕಾವತಿ ಡಿನೋಟಿಫಿಕೇಶನ್ ಪ್ರಕರಣದ ಕುರಿತು ಯಾವುದೇ ಚರ್ಚೆ ಆಗಿಲ್ಲ. ಆದರೆ ಈ ಸಂಬಂಧ ಖಾಸಗಿ ವ್ಯಕ್ತಿಯೊಬ್ಬರು ಸಿಎಂ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಲಿದ್ದು, ಅವರಿಗೆ ಪಕ್ಷದ ಕಾನೂನು ಘಟಕ ಎಲ್ಲಾ ರೀತಿಯ ನೆರವು ನೀಡಲಿದೆ ಎಂದು ತಿಳಿಸಿದ್ದಾರೆ.

ಬಿಜೆಪಿ ಕಾನೂನು ಘಟಕದ ಬೆಂಬಲದೊಂದಿಗೆ ವಕೀಲ ನಟರಾಜ್ ಶರ್ಮಾ ಅವರು ಸಿಎಂ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಲಿದ್ದಾರೆ. ಮುಂದಿನ ಕಾನೂನು ಹೋರಾಟವನ್ನು ಸಹ ಬಿಜೆಪಿ ಕಾನೂನು ಘಟಕ ನೋಡಿಕೊಳ್ಳಲಿದೆ. ಈ ಕಾನೂನು ಹೋರಾಟಕ್ಕೆ ರಾಜ್ಯ ಬಿಜೆಪಿ ಸಂಪೂರ್ಣ ನೆರವು ನೀಡಲಿದೆ ಎಂದು ಜೋಶಿ ತಿಳಿಸಿದ್ದಾರೆ.

ಸದ್ಯ ಅರ್ಕಾವತಿ ಡಿನೋಟಿಫಿಕೇಶನ್ ಪ್ರಕರಣ ರಾಜಭವನದ ಅಂಗಳ ತಲುಪಿದ್ದು, ಸಿದ್ದರಾಮಯ್ಯ ಅವರ ಮುಖ್ಯಮಂತ್ರಿ ಕುರ್ಚಿಯ ಭವಿಷ್ಯ ರಾಜ್ಯಪಾಲ ವಜುಭಾಯಿ ವಾಲಾ ತೆಗೆದುಕೊಳ್ಳುವ ನಿರ್ಧಾರದ ಮೇಲೆ ನಿಂತಿದೆ. ಒಂದು ವೇಳೆ ರಾಜ್ಯಪಾಲರು ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದೇಯಾದರೆ ಸಿದ್ದರಾಮಯ್ಯ ಅವರ ಕುರ್ಚಿಗೆ ಸಂಚಕಾರ ಬರುವ ಸಾಧ್ಯತೆಯೇ ಹೆಚ್ಚು.

ಈ ಹಿಂದೆ ಕಾಂಗ್ರೆಸ್ ಸಹ ಬಿಜೆಪಿ ಅಧಿಕಾರದಲ್ಲಿದ್ದಾಗ ರಾಜ್ಯಪಾಲರ ಅನುಮತಿ ಪಡೆದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧ ಕೇಸ್ ದಾಖಲಿಸಿತ್ತು. ಇದರಿಂದ ಯಡಿಯೂರಪ್ಪ ರಾಜಿನಾಮೆ ನೀಡಬೇಕಾಗಿ ಬಂದಿತ್ತು. ಈಗ ಅದೇ ತಂತ್ರವನ್ನು ಬಿಜೆಪಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರಯೋಗಿಸುತ್ತಿದೆ ಎನ್ನಲಾಗುತ್ತಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com