ಲೋಕಾಯುಕ್ತ ತಿದ್ದುಪಡಿ ವಿಧೇಯಕ ವಾಪಸ್: ಸರ್ಕಾರ, ಪ್ರತಿಪಕ್ಷಗಳ ನಡುವೆ ವಾಕ್ಸಮರ

ವಿಧಾಸಭೆಯಲ್ಲಿ ಪ್ರತಿಪಕ್ಷಗಳ ಗದ್ದಲದ ಹಿನ್ನೆಲೆಯಲ್ಲಿ ಕರ್ನಾಟಕ ಲೋಕಾಯುಕ್ತ ತಿದ್ದುಪಡಿ ವಿಧೇಯಕವನ್ನು ಸರ್ಕಾರ ವಾಪಸ್ ಪಡೆದಿದೆ.
ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ

ಬೆಳಗಾವಿ/ಸುವರ್ಣಸೌಧ: ವಿಧಾಸಭೆಯಲ್ಲಿ ಪ್ರತಿಪಕ್ಷಗಳ ಗದ್ದಲದ ಹಿನ್ನೆಲೆಯಲ್ಲಿ ಕರ್ನಾಟಕ ಲೋಕಾಯುಕ್ತ ತಿದ್ದುಪಡಿ ವಿಧೇಯಕವನ್ನು ಸರ್ಕಾರ ವಾಪಸ್ ಪಡೆದಿದೆ.

ಕಡೆಗೂ ಪ್ರತಿಪಕ್ಷಗಳ ಒತ್ತಡಕ್ಕೆ ಮಣಿದ ಸರ್ಕಾರ, ಲೋಕಾಯುಕ್ತ ತಿದ್ದುಪಡಿ ವಿಧೇಯಕವನ್ನು ವಾಪಸ್ ಪಡೆದು, ಲೋಕಾಯುಕ್ತ ಕಾಯ್ದೆ ಸಮಗ್ರ ತಿದ್ದುಪಡಿಗೆ ತೀರ್ಮಾನಿಸಿದೆ ಎಂದು ಕಾನೂನು ಸಚಿವ ಟಿ.ಬಿ.ಜಯಚಂದ್ರ ಅವರು ಹೇಳಿದ್ದಾರೆ.

ಲೋಕಾಯುಕ್ತ ಸಂಸ್ಥೆಯಲ್ಲಿನ ಪ್ರಸಕ್ತ ಬೆಳವಣಿಗೆಗಳ ಬಗ್ಗೆ ನಮಗೂ ಅರಿವಿದೆ. ಒಂದು ವಾರದಲ್ಲಿ ಸಮಗ್ರ ತಿದ್ದುಪಡಿ ಬಳಿಕ ವಿಧೇಯಕವನ್ನು ಸದನದಲ್ಲಿ ಮಂಡಿಸುವುದಾಗಿ ತಿಳಿಸಿದರು.

ಸರ್ಕಾರ ಲೋಕಾಯುಕ್ತ ತಿದ್ದುಪಡಿ ವಿಧೇಯಕ ಮಂಡಿಸಿ, ಅಂಗೀಕರಿಸಲು ಮುಂದಾಗಿತ್ತು. ಆದರೆ ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ ಪ್ರತಿಪಕ್ಷಗಳು ಲೋಕಾಯುಕ್ತ ಕಾಯ್ದೆ ಸಮಗ್ರ ತಿದ್ದುಪಡಿಗೆ ಪಟ್ಟು ಹಿಡಿದಿದ್ದವು.

ಲೋಕಾಯುಕ್ತ ಸಂಸ್ಥೆಯಲ್ಲಿನ ಭ್ರಷ್ಟಾಚಾರ ಪ್ರಕರಣ ಸಂಬಂಧ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಅರ್ಕಾವತಿ ಹಾಗೂ ಗಣಿ ಲೈಸನ್ಸ್ ಸೇರಿದಂತೆ ಹಲವು ಗಂಭೀರ ದೂರುಗಳಿವೆ. ಹೀಗಾಗಿ ಸರ್ಕಾರ ಲೋಕಾಯುಕ್ತರ ರಕ್ಷಣೆಗೆ ನಿಂತಿದೆ ಎಂದು ಆರೋಪಿಸಿದರು.

ಈ ವೇಳೆ ಮಧ್ಯಪ್ರವೇಶಿಸಿದ ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರು, ಸರ್ಕಾರ ನನ್ನ ವಿರುದ್ಧ ಹಲವು ಕೇಸ್‌ಗಳನ್ನು ದಾಖಲಿಸುವ ಮೂಲಕ ಬೆದರಿಸುವ ಯತ್ನ ನಡೆಸುತ್ತಿದೆ ಎಂದು ದೂರಿದರು. ಅಲ್ಲದೆ ಲೋಕಾಯುಕ್ತರ ಪುತ್ರನ ವಿರುದ್ಧ ದೂರು ಬಂದ ತಕ್ಷಣ ಲೋಕಾಯುಕ್ತ ಎಸ್‌ಪಿ ಸೋನಿಯಾ ನಾರಂಗ್ ಅವರು ಎಫ್‌ಐಆರ್ ಏಕೆ ದಾಖಲಿಸಲಿಲ್ಲ ಎಂದು ಪ್ರಶ್ನಿಸಿದರು.

ಕುಮಾರಸ್ವಾಮಿ ಪ್ರಶ್ನೆಗೆ ಉತ್ತರಿಸಿದ ಗೃಹ ಸಚಿವ ಕೆ.ಜೆ.ಜಾರ್ಜ್ ಅವರು, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಎಚ್ ಡಿಕೆ ವಿರುದ್ಧದ ಪ್ರಕರಣಗಳಿಗೂ ಸರ್ಕಾರಕ್ಕೂ ಸಂಬಂಧವಿಲ್ಲ. ಸಿಎಜಿ ವರದಿ ಆಧರಿಸಿ ಲೋಕಾಯುಕ್ತದಲ್ಲಿ ಮೊಕದ್ದಮೆಗಳು ದಾಖಲಾಗಿವೆ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com