ವಿಧಾನಸಭೆಯಲ್ಲಿ ಪ್ರತಿಧ್ವನಿಸಿದ ಡಿ.ಕೆ.ರವಿ ನಿಗೂಢ ಸಾವು: ಸಿಬಿಐ ತನಿಖೆಗೆ ಪ್ರತಿಪಕ್ಷಗಳ ಒತ್ತಾಯ

ದಕ್ಷ ಐಎಎಸ್ ಅಧಿಕಾರಿ ಡಿ.ಕೆ.ರವಿ ಅವರ ನಿಗೂಢ ಸಾವಿನ ಪ್ರಕರಣ ಮಂಗಳವಾರ ವಿಧಾನಸಭೆಯಲ್ಲೂ ಪ್ರತಿಧ್ವನಿಸಿತು.
ಜಗದೀಶ್ ಶೆಟ್ಟರ್
ಜಗದೀಶ್ ಶೆಟ್ಟರ್

ಬೆಂಗಳೂರು: ದಕ್ಷ ಐಎಎಸ್ ಅಧಿಕಾರಿ ಡಿ.ಕೆ.ರವಿ ಅವರ ನಿಗೂಢ ಸಾವಿನ ಪ್ರಕರಣ ಮಂಗಳವಾರ ವಿಧಾನಸಭೆಯಲ್ಲೂ ಪ್ರತಿಧ್ವನಿಸಿತು.

ವಿಧಾನಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಅವರು, ಇದು ಆತ್ಮಹತ್ಯೆ ಅಲ್ಲ. ಇದೊಂದು ಕೊಲೆ ಎಂದರು. ಅಲ್ಲದೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.

ರವಿಯಂಥಹ ಅಧಿಕಾರಿ ಆತ್ಮಹತ್ಯೆ ಮಾಡಿಕೊಳ್ಳುವ ಸಾಧ್ಯತೆ ಇಲ್ಲ. ಭೃಷ್ಟರಿಗೆ ಸಿಂಹ ಸ್ವಪ್ನರಾಗಿದ್ದ ರವಿ ಅವರನ್ನು ಕೊಲೆ ಮಾಡಲಾಗಿದೆ. ಕೊಲೆಯ ಹಿಂದೆ ದೊಡ್ಡ ದೊಡ್ಡ ಕೈಗಳಿವೆ. ಸಿಐಡಿ ಇಲ್ಲವೋ ರಾಜ್ಯದ ಪೊಲೀಸರಿಂದ ತನಿಖೆ ನಡೆಸಿದರೆ ಸತ್ಯಾಂಶ ಹೊರಬರುವುದಿಲ್ಲ. ನನಗೆ ರಾಜ್ಯ ಪೊಲೀಸರ ಮೇಲೆ ಗೌರವವಿದೆ. ಆದರೆ ಸರ್ಕಾರ ತನಿಖೆಯನ್ನು ಕೂಡಲೇ ಸಿಬಿಐಗೆ ಒಪ್ಪಿಸಲೇ ಬೇಕು'' ಎಂದು ಆಗ್ರಹಿಸಿದರು.

ಇನ್ನು ರವಿ ಅವರ ಸಾವು ಮೇಲ್ನೋಟಕ್ಕೆ ಆತ್ಮಹತ್ಯೆ ಎಂದಿದ್ದ ನಗರ ಪೊಲೀಸ್ ಆಯುಕ್ತ ಎಂ.ಎನ್.ರೆಡ್ಡಿ ಅವರ ಹೇಳಿಕೆ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಶೆಟ್ಟರ್, ತನಿಖೆಗೂ ಮೊದಲೇ ನಗರ ಪೊಲೀಸ್ ಆಯುಕ್ತರು ಆತ್ಮಹತ್ಯೆ ಎಂದು ಹೇಳಿಕೆ ನೀಡಿದ್ದಾರೆ. ಇದೊಂದು ಬೇಜವಾಬ್ದಾರಿ ಹೇಳಿಕೆ ಎಂದರು.

ಇದಕ್ಕೆ ಪ್ರತಿಕ್ರಿಯಿಸಿದ ಗೃಹ ಸಚಿವ ಕೆಜೆ ಜಾರ್ಜ್,  ಪ್ರಕರಣದ ತನಿಖೆಗೆ ವಿಶೇಷ ತಂಡ ರಚನೆ ಮಾಡಲಾಗಿದೆ. ಆಗ್ನೇಯ ವಿಭಾಗದ ಡಿಸಿಪಿ ರೋಹಿಣಿ ಕಟೋಚ್‌ ಅವರ ನೇತೃತ್ವದಲ್ಲಿ ತನಿಖೆ ನಡೆಸಲಾಗುತ್ತಿದೆ ಎಂದು ಉತ್ತರ ನೀಡಿದರು. ಆದರೆ ಸಚಿವರು ತಪ್ಪು ಉತ್ತರ ನೀಡಿದ್ದಾರೆ ಎಂದು ಆರೋಪಿಸಿದ ಬಿಜೆಪಿ ಸದಸ್ಯರು, ಲಿಖಿತ ಉತ್ತರದ ಹಾಳೆಯನ್ನು ಹರಿದುಹಾಕಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com