
ನವದೆಹಲಿ: ದಕ್ಷ ಐಎಎಸ್ ಅಧಿಕಾರಿ ಡಿ.ಕೆ.ರವಿ ಅವರ ನಿಗೂಢ ಸಾವಿನ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ಒತ್ತಾಯಿಸಿ ವಿಧಾನಸಭೆಯಲ್ಲಿ ಅಹೋರಾತ್ರಿ ಧರಣಿ ನಡೆಸಿದ ಬಿಜೆಪಿ, ಇದೀಗ ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿ ಕೇಂದ್ರ ಸರ್ಕಾರದ ಗಮನ ಸೆಳೆದಿದೆ.
ಕೇಂದ್ರ ಸಚಿವರಾದ ಅನಂತಕುಮಾರ್, ಡಿ.ವಿ.ಸದಾನಂದಗೌಡ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಶಿ ನೇತೃತ್ವದ ಬಿಜೆಪಿ ನಿಯೋಗ ಇಂದು ರಾಜನಾಥ್ ಸಿಂಗ್ ಅವರನ್ನು ಭೇಟಿ, ಡಿ.ಕೆ.ರವಿ ಸಾವಿನ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು ಎಂದು ಒತ್ತಾಯಿಸಿ ಮನವಿ ಪತ್ರ ನೀಡಿದರು.
ರಾಜನಾಥ್ ಸಿಂಗ್ ಭೇಟಿಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅನಂತಕುಮಾರ್, ಡಿ.ಕೆ.ರವಿ ಸಾವಿನ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ನಾವು ಒತ್ತಾಯಿಸಿದ್ದೇವೆ ಎಂದರು.
ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಕಿರಣ್ ರಿಜಿಜು, ರಾಜ್ಯ ಸರ್ಕಾರದಿಂದ ವರದಿ ಬಂದ ಬಳಿಕ ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
Advertisement