ಜಯಾ ಮೇಲ್ಮನವಿ ಕುರಿತು ಮೋದಿ, ಬಿಜೆಪಿ ತನ್ನ ನಿಲುವು ಸ್ಪಷ್ಟಪಡಿಸಲಿ: ಕಾಂಗ್ರೆಸ್

ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ನಿಂದ ಕ್ಲೀನ್‌ಚಿಟ್ ಪಡೆದಿರುವ ತಮಿಳುನಾಡು ಮುಖ್ಯಮಂತ್ರಿ ಜೆ.ಜಯಲಲಿತಾ ಅವರ ವಿರುದ್ಧ ಮೇಲ್ಮನವಿ...
ಜೈರಾಮ್ ರಮೇಶ್
ಜೈರಾಮ್ ರಮೇಶ್
Updated on: 

ಬೆಂಗಳೂರು: ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ನಿಂದ ಕ್ಲೀನ್‌ಚಿಟ್ ಪಡೆದಿರುವ ತಮಿಳುನಾಡು ಮುಖ್ಯಮಂತ್ರಿ ಜೆ.ಜಯಲಲಿತಾ ಅವರ ವಿರುದ್ಧ ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸುವ ಕುರಿತು ಬಿಜೆಪಿ ತನ್ನ ನಿಲುವು ಸ್ಪಷ್ಟಪಡಿಸಬೇಕು ಎಂದು ಹಿರಿಯ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಅವರು ಶನಿವಾರ ಆಗ್ರಹಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಮಾಜಿ ಸಚಿವ, ಜಯಲಲಿತಾ ಅವರ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮೌನ ವಹಿಸಿದ್ದಾರೆ. ಆದರೆ ಮೂಲ ಅರ್ಜಿದಾರರಾಗಿರುವ ಬಿಜೆಪಿ ನಾಯಕರೇ ಮೇಲ್ಮನವಿ ಸಲ್ಲಿಸುವಂತೆ ರಾಜ್ಯ ಸರ್ಕಾರವನ್ನು ಕೇಳುತ್ತಿದ್ದಾರೆ. ಕರ್ನಾಟಕ ಸರ್ಕಾರದ ಮೇಲೆ ದಾಳಿ ಮಾಡಲು ಅವರು ಈ ಪ್ರಕರಣವನ್ನು ಏಕೆ ಬಳಸಿಕೊಳ್ಳುತ್ತಿದ್ದಾರೆ ಎಂದು ಪ್ರಶ್ನಿಸಿದರು.

'ಅವರು ಸರ್ಕಾರದ ವಿರುದ್ಧ ಇದನ್ನು ಅಸ್ತ್ರವಾಗಿ ಬಳಸಿಕೊಳ್ಳುತ್ತಿದ್ದಾರೆ. ಈ ಪ್ರಕರಣದಲ್ಲಿ ಮೋದಿ ಅವರ ನಿಲುವು ಏನು ಎಂಬುದು ನಮಗೆ ತಿಳಿಯಬೇಕು. ಈ ಬಗ್ಗೆ ವಿತ್ತ ಸಚಿವ ಅರುಣ್ ಜೇಟ್ಲಿ ಅವರು ಏನು ಹೇಳುತ್ತಾರೆ' ಎಂದು ಜೈರಾಮ್ ರಮೇಶ್ ಪ್ರಶ್ನಿಸಿದರು.

'ಅರ್ಜಿದಾರ ಸುಬ್ರಮಣಿಯನ್ ಸ್ವಾಮಿ ಅವರು ಒಬ್ಬ ಹಿರಿಯ ಬಿಜೆಪಿ ನಾಯಕ. ಆದಾಗ್ಯೂ ಇಂದು ಇಬ್ಬರು ಬಿಜೆಪಿ ನಾಯಕರು ಜಯಲಲಿತಾ ಅವರ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಿದ್ದಾರೆ. ಬಿಜೆಪಿಯ ನಿಲುವು ಇದೇನಾ' ಎಂದರು.

ಕಳೆದ ಸೆಪ್ಟೆಂಬರ್ 27ರಂದು ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಜಯಲಲಿತಾ ಅವರು ದೋಷಿ ಎಂದು ಬೆಂಗಳೂರು ಸೆಷೆನ್ಸ್ ಕೋರ್ಟ್ ತೀರ್ಪು ನೀಡಿತ್ತು. ಈ ಹಿನ್ನೆಲೆಯಲ್ಲಿ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡಿದ್ದರು. ಆದರೆ ಮೇ 11ರಂದು ಕರ್ನಾಟಕ ಹೈಕೋರ್ಟ್ ಸೆಷೆನ್ಸ್ ಕೋರ್ಟ್ ತೀರ್ಪು ರದ್ದುಗೊಳಿಸಿ, ಜಯಲಲಿತಾ ನಿರ್ದೋಷಿ ಎಂದು ತೀರ್ಪು ನೀಡಿದೆ. ಹೀಗಾಗಿ ಜಯಾ ಮತ್ತೆ ಸಿಎಂ ಆಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com