ಬೆಂಗಳೂರು: ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಗಿರೀಶ್ ಕಾರ್ನಾಡ್ ವಿರುದ್ಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಗಿರೀಶ್‌ಕಾರ್ನಾಡ್ ಅವರು ಕೆಂಪೇಗೌಡರು ಸ್ವಾತಂತ್ರ್ಯ ಸೇನಾನಿ ಅಲ್ಲ, ಹೀಗಾಗಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಟಿಪ್ಪು ಸುಲ್ತಾನ್ ಹೆಸರು ಸೂಕ್ತ ಎಂದು ಹೇಳಿಕೆ ನೀಡಿದ್ದರು.
ಇದೊಂದು ಗಲಭೆಗೆ ಪ್ರಚೋದನೆ ನೀಡುವಂತಹ ಹೇಳಿಕೆಯಾಗಿದ್ದು, ರಾಜ್ಯದಲ್ಲಿ ಶಾಂತಿ ಕದಡುವಂತೆ ಮಾಡಲಾಗಿದೆ. ಹಾಗಾಗಿ, ಕಾರ್ನಾಡ್ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕನ್ನಡಪರ ಹೋರಾಟಗಾರ ಚೀನಾ ರಾಮು ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಗಿರೀಶ್ ಕಾರ್ನಾಡ್ ಅವರು ಪ್ರಚೋದನಕಾರಿ ಹೇಳಿಕೆ ನೀಡಿದ್ದು, ಕೂಡಲೇ ಅವರನ್ನು ಪೊಲೀಸರು ಬಂಧಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ. ರಾಜ್ಯಾದ್ಯಂತ ವಿವಿಧ ಕನ್ನಡ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಕಾರ್ನಾಡ್ ಅವರು ಬಹಿರಂಗವಾಗಿ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸುತ್ತಿವೆ.
ಕಾರ್ನಾಡ್ ಅವರು ತಮ್ಮ ಹೇಳಿಕೆಗೆ ಕ್ಷಮೆಯಾಚಿಸಿದ್ದು, ಕೇವಲ ನನ್ನ ಅಭಿಪ್ರಾಯವನ್ನು ತಿಳಿಸಿದ್ದೇನೆ. ಇದರಿಂದ ಹಿಂದೆ ಯಾವುದೇ ದುರುದ್ದೇಶವಿಲ್ಲ ಎಂದು ತಿಳಿಸಿದ್ದರು.
ಟಿಪ್ಪು ಸುಲ್ತಾನ್ ಅವರ 265ನೇ ಜಯಂತಿ ಅಂಗವಾಗಿ ವಿಧಾನಸೌಧದಲ್ಲಿ ಸರ್ಕಾರ ಕಾರ್ಯಕ್ರಮವೊಂದನ್ನು ಆಯೋಜಿಸಿತ್ತು. ಈ ಕಾರ್ಯಕ್ರಮದಲ್ಲಿ ಮಾತನಾಡಿದ ಗಿರೀಶ್ ಕಾರ್ನಾಡ್ ಅವರು, ಕೆಂಪೇಗೌಡರು ಸ್ವಾತಂತ್ರ್ಯ ಸೇನಾನಿ ಅಲ್ಲ ಹೀಗಾಗಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಟಿಪ್ಪು ಸುಲ್ತಾನ್ ಹೆಸರು ಸೂಕ್ತ ಎಂದು ಹೇಳಿಕೆ ನೀಡಿದ್ದರು.