ಆಂಜನೇಯ ರಾಜೀನಾಮೆ ಕೋರಿ ಸದನದಲ್ಲಿ ಗದ್ದಲ
ಬೆಂಗಳೂರು: ವಿಧಾನಸಭಾ ಕಲಾಪದಲ್ಲಿ ಸಚಿವ ಆಂಜನೇಯ ವಿರುದ್ಧ ಪ್ರತಿಪಕ್ಷಗಳ ಸದಸ್ಯರು ತಿರುಗಿಬಿದ್ದಿದ್ದು, ಸಮಾಜ ಕಲ್ಯಾಣ ಇಲಾಖೆಯಲ್ಲಿನ ಭ್ರಷ್ಟಾಚಾರ ಆರೋಪ ಪ್ರಕರಣ ಸದನದಲ್ಲಿ ಗುರುವಾರ ಭಾರೀ ಗದ್ದಲವನ್ನುಂಟು ಮಾಡಿದೆ.
ಇಂದು ಸದನ ಆರಂಭವಾಗುತ್ತಿದ್ದಂತೆ ಪ್ರತಿಪಕ್ಷಗಳ ಸದಸ್ಯರು ಸಮಾಜ ಕಲ್ಯಾಣ ಇಲಾಖೆ ಸಚಿವ ಆಂಜನೇಯ ವಿರುದ್ಧ ತಿರುಗಿ ಬಿದ್ದಿದ್ದು, ಸಮಾಜ ಕಲ್ಯಾಣ ಇಲಾಖೆಯಲ್ಲಿನ ಭ್ರಷ್ಟಾಚಾರ ಇದೀಗ ಬಯಲಾಗಿದೆ. ಭ್ರಷ್ಟಾಚಾರ ಪ್ರಕರಣದಲ್ಲಿ ಅಧಿಕಾರಿಗಳೇ ನೇರವಾಗಿ ಭಾಗಿಯಾಗಿರುವುದು ರಹಸ್ಯ ಕಾರ್ಯಾಚರಣೆಯಲ್ಲಿ ಬೆಳಕಿಗೆ ಬಂದಿದೆ. ಹೀಗಾಗಿ ಕೂಡಲೇ ಆಂಜನೇಯ ಅವರು ರಾಜೀನಾಮೆ ಕೊಡಬೇಕೆಂದು ಎಂದು ಆಗ್ರಹಿಸಿದ್ದಾರೆ.
ಪ್ರಕರಣ ಕುರಿತಂತೆ ಸದನದಲ್ಲಿ ಮಾತನಾಡಿರುವ ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಅವರು, ಪ್ರಕರಣದ ತನಿಖೆ ಮುಗಿಯುವವರೆಗೂ ಸಚಿವ ಸ್ಥಾನಕ್ಕೆ ಆಂಜನೇಯ ರಾಜೀನಾಮೆ ಕೊಡಲಿ. ಒಂದು ವೇಳೆ ತನಿಖೆಯಲ್ಲಿ ನಿರಾಪರಾಧಿ ಎಂದು ಸಾಬೀತಾದರೆ ಮತ್ತೆ ಸಚಿವರಾಗಿ ಬರಲಿ ಎಂದು ಹೇಳಿದ್ದಾರೆ.
ಸದನದಲ್ಲಿ ಉಂಟಾದ ಈ ಗದ್ದಲದ ಮಧ್ಯೆ ಮಾತನಾಡಿದ ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರು, ಭಷ್ಟಾಚಾರ ಪ್ರಕರಣವನ್ನು ರಾಜ್ಯ ಸರ್ಕಾರ ಸಿಬಿಐ ತನಿಖೆಗೆ ವಹಿಸಿದ್ದು, ಈ ಬಗೆಗಿನ ಚರ್ಚೆ ಬಿಟ್ಟು ಬೇರೆ ವಿಚಾರದ ಬಗ್ಗೆ ಚರ್ಚೆ ನಡೆಸೋಣ ಎಂದು ಹೇಳಿದ್ದಾರೆ. ಇದಕ್ಕೊಪ್ಪದ ಪ್ರತಿಪಕ್ಷದ ಸದಸ್ಯರು ಮತ್ತೆ ಸದನದಲ್ಲಿ ಗದ್ದಲವನ್ನು ಮುಂದುವರೆಸಿದ್ದಾರೆ. ಅಲ್ಲದೆ, ಪ್ರಕರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೌನ ವಹಿಸಿದ್ದು, ಪ್ರಕರಣವನ್ನು ಮುಚ್ಚಿಹಾಕುವ ಹುನ್ನಾರಗಳು ನಡೆಯುತ್ತಿದೆ ಎಂದು ಆರೋಪಿಸಿವೆ.
ಪ್ರತಿಪಕ್ಷ ಸದಸ್ಯರ ಈ ನಡವಳಿಕೆಯನ್ನು ಕಂಡ ಸ್ಪೀಕರ್, ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಪ್ರಕರಣದ ತನಿಖೆಯನ್ನು ಸರ್ಕಾರ ಸಿಐಡಿಗೆ ವಹಿಸಿದೆ. ಪ್ರಕರಣ ಸಂಬಂಧ ಸಚಿವರ ಮೇಲೆಯೇ ತನಿಖೆ ನಡೆಸಲಾಗುತ್ತಿದೆ. ಈ ಸಂದರ್ಭದಲ್ಲಿ ಆರೋಪ ಹೊತ್ತು ತನಿಖೆಗೊಳಗಾಗುತ್ತಿರುವ ಸಚಿವರೊಬ್ಬರು ಸಚಿವರಾಗಿ ಮುಂದುವರೆದರೆ ಜನರಲ್ಲಿ ಯಾವ ರೀತಿಯ ಅಭಿಪ್ರಾಯ ಮೂಡುತ್ತದೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ