ಪ್ರಧಾನಿ ವಾಜಪೇಯಿ ಎಂದ ಸಿಎಂ ಸಿದ್ದು
ಪ್ರಧಾನಿ ವಾಜಪೇಯಿ..ಅರೆ ಭಾರತದ ಪ್ರಧಾನಿ ನರೇಂದ್ರ ಮೋದಿ ಅಲ್ಲವೇ.. ಎಂದು ಬೆರಗಾಗಬೇಡಿ.. ಇದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಾಯಿತಪ್ಪಿ ಆಡಿದ ಮಾತು...

ಬೆಂಗಳೂರು: ಪ್ರಧಾನಿ ವಾಜಪೇಯಿ..ಅರೆ ಭಾರತದ ಪ್ರಧಾನಿ ನರೇಂದ್ರ ಮೋದಿ ಅಲ್ಲವೇ.. ಎಂದು ಬೆರಗಾಗಬೇಡಿ.. ಇದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಾಯಿತಪ್ಪಿ ಆಡಿದ ಮಾತು.
ರಾಹುಲ್ ಗಾಂಧಿ ರಾಜ್ಯ ಪ್ರವಾಸ ಹಿನ್ನಲೆಯಲ್ಲಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ಕಾಂಗ್ರೆಸ್ ಪಕ್ಷ ಆಯೋಜಿಸಿದ್ದ ಗ್ರಾಮ ಸ್ವರಾಜ್ ಸಮಾವೇಶದಲ್ಲಿ ಬಿಜೆಪಿ ಪಕ್ಷವನ್ನು ಟೀಕಿಸುವ ಭರದಲ್ಲಿ ಸಿಎಂ ಸಿದ್ದರಾಮಯ್ಯ ಯಡವಟ್ಟು ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಎನ್ನುವ ಬದಲಿಗೆ ಪ್ರಧಾನಿ ವಾಜಪೇಯಿ ಎಂದು ಹೇಳುವ ಮೂಲಕ ಕೆಲಕಾಲ ಗೊಂದಲಕ್ಕೆ ಒಳಗಾದರು. ಕೂಡಲೇ ತಮ್ಮ ತಪ್ಪನ್ನು ಸರಿಪಡಿಸಿಕೊಂಡ ಸಿದ್ದರಾಮಯ್ಯ ಅವರು, ಪ್ರಧಾನಿ ನರೇಂದ್ರ ಮೋದಿ ಎಂದು ತಮ್ಮ ತಪ್ಪು ತಿದ್ದುಕೊಂಡರು.
ಬಿಜೆಪಿ ವಿರುದ್ಧ ವಾಗ್ದಾಳಿ
ಇದೇ ವೇಳೆ ಕೇಂದ್ರ ಸರ್ಕಾರ ಮತ್ತು ರಾಜ್ಯ ಬಿಜೆಪಿ ನಾಯಕರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಸಿದ್ದರಾಮಯ್ಯ ಅವರು, ಬಿಜೆಪಿಯವರಿಗೆ ಸುಳ್ಳುಹೇಳುವುದೇ ಕೆಲಸವಾಗಿದೆ. ರಾಹುಲ್ ಗಾಂಧಿ ರಾಜ್ಯ ಪ್ರವಾಸವನ್ನು ಬಿಜೆಪಿ ನಾಯಕರು ಟೀಕಿಸುತ್ತಿದ್ದಾರೆ. ಸತ್ಯವನ್ನು ಮರೆಮಾಚಿ ಜನತೆಗೆ ಸುಳ್ಳು ಹೇಳುತ್ತಿದ್ದಾರೆ. ಸುಳ್ಳು ಹೇಳುವ ಬಿಜೆಪಿಗೆ ತಕ್ಕ ಜನತೆ ಪಾಠ ಕಲಿಸಬೇಕಿದೆ ಎಂದು ಹೇಳಿದರು. ಅಲ್ಲದೆ ರಾಜದಲ್ಲಿ ಮುಂದುವರೆದಿರುವ ರೈತರ ಸರಣಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಸಿದ್ದರಾಮಯ್ಯ ಅವರು, ರೈತರ ಬಗ್ಗೆ ಮಾತನಾಡುವ ನೈತಿಕ ಹಕ್ಕು ಬಿಜೆಪಿಗಿಲ್ಲ. ರಾಜ್ಯದಲ್ಲಿ ಭೀಕರ ಬರವಿದ್ದರೂ ಕೇಂದ್ರ ಸರ್ಕಾರ ನೆರವು ನೀಡುತ್ತಿಲ್ಲ.
ರಾಜ್ಯದಲ್ಲಿ ಭೀಕರ ಬರಗಾಲವಿದ್ದು, 3800 ಕೋಟಿ ನೆರವು ನೀಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ಆದರೆ ಈ ವರೆಗೂ 1 ನಯಾ ಪೈಸೆ ಕೂಡ ಬಂದಿಲ್ಲ. ಕಳಸಾ-ಬಂಡೂರಿ ಯೋಜನೆ ಕುರಿತಂತೆಯೂ ಕೇಂದ್ರ ಸರ್ಕಾರ ಸ್ಪಂದಿಸುತ್ತಿಲ್ಲ. ಪ್ರಧಾನಿ ಬಳಿಗೆ ಹೋಗಿದ್ದ ರಾಜ್ಯದ ಬಿಜೆಪಿ ನಾಯಕರೂ ಕೂಡ ಈ ಬಗ್ಗೆ ಅವರೊಂದಿಗೆ ಮಾತನಾಡುತ್ತಿಲ್ಲ. ಸರ್ವಪಕ್ಷ ನಿಯೋಗ ಕರೆದುಕೊಂಡು ಹೋಗಿದ್ದಾಗಲೂ ಬಿಜೆಪಿ ನಾಯಕರು ಮಾತನಾಡಲಿಲ್ಲ. ರಾಜ್ಯ ಬಿಜೆಪಿ ನಾಯಕರಿಗೆ ಮಹದಾಯಿ ವಿವಾದ ಬಗೆಹರಿಸುವ ಮನಸ್ಸಿಲ್ಲ. ಹೀಗಾಗಿ ಅವರು ಕೇಂದ್ರ ಸರ್ಕಾರದೊಂದಿಗೆ ಮಾತನಾಡುತ್ತಿಲ್ಲ ಎಂದು ಸಿದ್ದು ವಾಗ್ದಾಳಿ ನಡೆಸಿದರು.
ಬಿಜೆಪಿ ಸಾಮಾಜಿಕ ನ್ಯಾಯದ ವಿರೋಧಿ
ಮೀಸಲಾತಿಗೆ ಸಂಬಂಧಿಸಿದಂತೆ ಮಾತನಾಡಿದ ಸಿದ್ದರಾಮಯ್ಯ ಅವರು, ಬಿಜೆಪಿ ಸಾಮಾಜಿಕ ನ್ಯಾಯದ ವಿರೋಧಿಯಾಗಿದ್ದು, ಇದೇ ಕಾರಣಕ್ಕೆ ಆರ್ ಎಸ್ ಎಸ್ ಮತ್ತು ಬಿಜೆಪಿ ಮೀಸಲಾತಿಯನ್ನು ವಿರೋಧಿಸುತ್ತಿವೆ. ಈ ಹಿಂದೆ ಕೂಡ ಬಿಜೆಪಿ ಮುಖಂಡ ರಾಮಾಜೋಯಿಸ್ ಅವರು ಮೀಸಲಾತಿಯನ್ನು ಪ್ರಶ್ನಿಸಿದ್ದರು ಎಂದು ಸಿದ್ದರಾಮಯ್ಯ ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


