

ನವದೆಹಲಿ: ಬಹು ದಿನಗಳಿಂದ ನೆನೆಗುದಿಗೆ ಬಿದ್ದಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಅಧಿಕೃತ ಚಾಲನೆ ದೊರೆತಿದ್ದು, ಈ ಸಂಬಂಧ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ನೇತೃತ್ವದಲ್ಲಿ ಸೆಪ್ಟೆಂಬರ್ 24ರಂದು ದೆಹಲಿಯಲ್ಲಿ ಮಹತ್ವದ ಸಭೆ ಕರೆಯಲಾಗಿದೆ.
ಸಭೆಯಲ್ಲಿ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಅವರು ಭಾಗವಹಿಸಲಿದ್ದಾರೆ.
ಸಭೆಯಲ್ಲಿ ಸಂಪುಟ ವಿಸ್ತರಣೆ ಮಾಡಬೇಕೋ ಅಥವಾ ಪುನಾರಚನೆ ಮಾಡಬೇಕೋ ಎಂಬುದರ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ. ಅಲ್ಲದೆ ಸಿದ್ದು ಸಂಪುಟದ ಸಚಿವರ ಕಾರ್ಯವೈಖರಿ ಬಗ್ಗೆ ಮತ್ತು ಪರಮೇಶ್ವರ ಅವರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡುವ ಬಗ್ಗೆಯೂ ಚರ್ಚಿಸುವ ಸಾಧ್ಯತೆ ಇದೆ.
8 ಸಚಿವರಿಗೆ ಕೊಕ್ ಸಾಧ್ಯತೆ
ಒಂದು ವೇಳೆ ಸಚಿವ ಸಂಪುಟ ಪುನಾರಚನೆಯಾದರೆ, ಸುಮಾರು ಎಂಟರಿಂದ ಹತ್ತು ಸಚಿವರು ಸ್ಥಾನ ಕಳೆದುಕೊಳ್ಳುವ ಸಂಭವವಿದೆ ಎನ್ನಲಾಗುತ್ತಿದೆ. ವಯಸ್ಸು, ಆರೋಗ್ಯ ಮತ್ತು ಪ್ರಾಂತ್ಯದ ನೆಪದಿಂದ ಸುಮಾರು ಎಂಟು ಮಂದಿ ಸಚಿವರು ತಮ್ಮ ಹುದ್ದೆ ಕಳೆದುಕೊಳ್ಳಲಿದ್ದಾರೆ. ಇಂತಹವರ ಪಟ್ಟಿಯಲ್ಲಿ ಕಂದಾಯ ಸಚಿವ ಶ್ರೀನಿವಾಸ ಪ್ರಸಾದ್, ತೋಟಗಾರಿಕೆ ಸಚಿವ ಶಾಮನೂರು ಶಿವಶಂಕರಪ್ಪ, ವಸತಿ ಸಚಿವ ಅಂಬರೀಶ್, ಪ್ರಾಥಮಿಕ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ, ಪೌರಾಡಳಿತ ಸಚಿವ ಖಮರುಲ್ ಇಸ್ಲಾಂ, ಸಣ್ಣ ನೀರಾವರಿ ಸಚಿವ ಶಿವರಾಜ್ ತಂಗಡಗಿ, ಕ್ರೀಡಾ ಸಚಿವ ಅಭಯಚಂದ್ರಜೈನ್, ಒಳನಾಡು ಸಾರಿಗೆ ಸಚಿವ ಬಾಬುರಾವ್ ಚಿಂಚನಸೂರ್ ಮತ್ತು ಕಾರ್ಮಿಕ ಸಚಿವ ಪಿ.ಟಿ.ಪರಮೇಶ್ವರ ನಾಯ್ಕ ಅವರ ಹೆಸರಿದೆ.
ಇವರಲ್ಲದೆ, ಕೆಪಿಸಿಸಿ ಅಧ್ಯಕ್ಷ ಗಾದಿಗೆ ಹೆಸರು ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ದಿನೇಶ್ ಗುಂಡೂರಾವ್ ಮತ್ತು ಕೃಷ್ಣ ಬೈರೇಗೌಡ ಅವರನ್ನು ಸಹ ಸಂಪುಟದಿಂದ ಕೈ ಬಿಡುವ ಸಾಧ್ಯತೆಗಳಿವೆ ಎನ್ನಲಾಗಿದೆ. ಒಂದು ವೇಳೆ ಈ ಇಬ್ಬರ ಪೈಕಿ ಯಾರೇ ಸಂಪುಟದಿಂದ ಹೊರ ಬಂದರೂ ಪಕ್ಷದಲ್ಲಿ ಉತ್ತಮ ಸ್ಥಾನ ಪಡೆಯುವ ಸಾಧ್ಯತೆಗಳಿವೆ ಎಂದು ಹೇಳಲಾಗಿದೆ.